ಬೆಂಗಳೂರು: ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ಇನ್ನೂ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಪ್ರಕಟಿಸಿಲ್ಲ. ಆದರೆ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿಯಾಗಿ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ. ಪ್ರಮಾಣವಚನ ಕಾರ್ಯಕ್ರಮ ಗುರುವಾರ ನಡೆಯಲಿದ್ದು, ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಮೇ 20ರಂದು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯುವ ಸಾಧ್ಯತೆಗಳಿವೆ.
ರಾಜಧಾನಿಯ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಇದಕ್ಕೆ ಸಿದ್ಧತೆ ನಡೆಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಸೂಚಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುತ್ತಿದೆ.
ತಮಿಳು ನಾಡಿನ ಮುಖ್ಯಮಂತ್ರಿ ಸ್ಟಾಲಿನ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಗಳಿವೆ.
ಸಂಧಾನ ಸೂತ್ರ ರೂಪಿಸಿದ ಹೈಕಮಾಂಡ್
ಪಕ್ಷದ ಉನ್ನತ ಮೂಲಗಳ ಪ್ರಕಾರ ಮುಖ್ಯಮಂತ್ರಿ ಹುದ್ದೆಗಾಗಿ ತೀವ್ರ ಪೈಪೋಟಿ ನಡೆಸುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆಯ ಸೂತ್ರ ರೂಪಿಸುವಲ್ಲಿ ಪಕ್ಷದ ಹೈಕಮಾಂಡ್ ಯಶಸ್ವಿಯಾಗಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನೇಮಕವಾಗಲಿದ್ದಾರೆ.
ಡಿಸಿಎಂ ಆಗಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಲಿದ್ದಾರೆ. ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದು, ಅವರಿಗೆ ಇಂಧನ ಮತ್ತು ಜಲ ಸಂಪನ್ಮೂಲ ಖಾತೆಯನ್ನು ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.
ಗುರುವಾರ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರೇ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಇದನ್ನೂ ಓದಿ: Karnataka Election Results: ಪ್ರಾಬಲ್ಯದ ವಿರುದ್ಧ ಜನಶಕ್ತಿ ಗೆದ್ದಿದೆ; ಫಲಿತಾಂಶದ ಬಳಿಕ ರಾಹುಲ್ ಗಾಂಧಿ ಹೇಳಿದ್ದಿಷ್ಟು