ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Election 2023) ಹತ್ತಿರವಾಗುತ್ತಿರುವಂತೆ ಕಾಂಗ್ರೆಸ್‌ನ ಇಬ್ಬರು ನಾಯಕರ ನಡುವೆ ಸಿಎಂ ಗಾದಿಗಾಗಿ ಪೈಪೋಟಿ ಮುಂದುವರಿದಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಮ್ಮನ್ನು ತಾವು ಸಿಎಂ ಅಭ್ಯರ್ಥಿ ಎಂದು ಬಿಂಬಿಸುಕೊಳ್ಳುವ ಪ್ರಯತ್ನವನ್ನು ಮುಂದುವರಿಸಿದ್ದಾರೆ.
ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಹೋರಾಟಕ್ಕೆ ಪೂರ್ವಭಾವಿಯಾಗಿ ನಡೆದ ಸಭೆಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಒಕ್ಕಲಿಗ ಸಮುದಾಯಕ್ಕೆ ಅವಕಾಶ ಸಿಕ್ಕಿದೆ. ವಿಧಾನಸೌಧದಕ್ಕೆ ಹೋಗಲು ರಾಜಕೀಯವಾಗಿ ಅವಕಾಶ ಸಿಕ್ಕಿದ್ದು, ಅದನ್ನು ಬಳಸಿಕೊಳ್ಳಿ ಎಂದು ಹೇಳಿದ್ದಾರೆ. ತಮ್ಮನ್ನು ಸಿಎಂ ಮಾಡಿ ಎಂದು ಪರೋಕ್ಷವಾಗಿ ಕೋರಿದ್ದಾರೆ.
ಹೆಬ್ಬಾಳದ ವಿ. ನಾಗೇನಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಸಿಎಂ ಎಂಭ ಘೋಷಣೆ ಮೊಳಗಿದೆ.
ಸಿದ್ದರಾಮಯ್ಯ ಆಪ್ತ ಹಾಗೂ ಹೆಬ್ಬಾಳ ಕ್ಷೇತ್ರದ ಶಾಸಕ ಬೈರತಿ ಸುರೇಶ್ ಅವರಿಂದ ಘೋಷಣೆ ಮಾಡಲಾಗಿದ್ದು, ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ಘೋಷಣೆ ಕೂಗಿದ ಸುರೇಶ್ ಮಾತಿಗೆ ಜನರು ಹರ್ಷ ವ್ಯಕ್ತಪಡಿಸಿದ್ದಾರೆ.
ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಇಬ್ಬರೂ ನಾಯಕರು ಹೇಳಿಕೊಳ್ಳುತ್ತಾರಾದರೂ ಸಿಎಂ ಗಾದಿಗೆ ಇಬ್ಬರೂ ಪೈಪೋಟಿ ನಡೆಸುತ್ತಿರುವುದು ಮತ್ತೊಮ್ಮೆ ಜಗಜ್ಜಾಹೀರಾಗಿದೆ.
ಇದನ್ನೂ ಓದಿ | Siddaramaiah Video | ವಂದೇ ಮಾತರಂ ಹಾಡೋದು ಬೇಡಯ್ಯ ಎಂದ ಸಿದ್ದರಾಮಯ್ಯ!