Site icon Vistara News

Karnataka Election 2023 : ಸಿಎಲ್‌ಪಿಗೆ ವೀಕ್ಷಕರಾಗಿ ಸುಶೀಲ್‌ ಕುಮಾರ್‌ ಶಿಂಧೆ, ಜಿತೆಂದ್ರ ಸಿಂಗ್‌, ದೀಪಕ್‌ ನೇಮಕ

Karnataka Election 2023 observers deputed for the election of the CLP Leader

#image_title

ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್‌ ಪಕ್ಷದ ಶಾಸಕಾಂಗ ಸಭೆ (Karnataka Election 2023) ಭಾನುವಾರ ಸಂಜೆ ನಡೆಯಲಿದ್ದು, ಎಐಸಿಸಿ ವೀಕ್ಷಕರಾಗಿ ಪಕ್ಷದ ಹಿರಿಯ ನಾಯಕ, ಮಹಾರಾಷ್ಟ್ರದ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಜಿತೆಂದ್ರ ಸಿಂಗ್‌, ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ದೀಪಕ್‌ ಬಾಬ್ರಿಯಾ ಅವರನ್ನು ನೇಮಕ ಮಾಡಲಾಗಿದೆ.

ಅವರು ಸಭೆಯಲ್ಲಿ ಭಾಗವಹಿಸಲು ರಾಜಧಾನಿಗೆ ಆಗಮಿಸುತ್ತಿದ್ದಾರೆ. ಈ ವಿಷಯವನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ವೀಕ್ಷಕರನ್ನು ನೇಮಕ ಮಾಡಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಯಾರಾಗಬಹುದೆಂಬ ಕುತೂಹಲ ಎಲ್ಲೆಡೆ ಇದೆ. ಹೀಗಾಗಿ ಭಾನುವಾರದ ನೂತನ ಶಾಸಕರ ಸಭೆಯು ತೀವ್ರ ಕುತೂಹಲ ಮೂಡಿಸಿದೆ. ಈಗಾಗಲೇ ಎಐಸಿಸಿ ಅಧ್ಯಕ್ಷ, ರಾಜ್ಯದವರೇ ಆದ ಮಲ್ಲಿಕಾರ್ಜುನ ಖರ್ಗೆ ಪಕ್ಷದ ನಾಯಕರೊಂದಿಗೆ ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತು ಚರ್ಚಿಸುತ್ತಿದ್ದಾರೆ. ಅಲ್ಲದೆ ಪಕ್ಷದ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌, ರಾಜ್ಯದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ರಾಜಧಾನಿಯಲ್ಲಿಯೇ ಬೀಡು ಬಿಟ್ಟಿದ್ದಾರೆ.

ಈ ನಡುವೆ ಶಾಸಕರ ಅಭಿಪ್ರಾಯವನ್ನು ಪಡೆದು ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ವೀಕ್ಷಕರಾಗಿ ಶಿಂಧೆ ಆಗಮಿಸುತ್ತಿದ್ದಾರೆ. ಮಹಾರಾಷ್ಟ್ರದವರಾದ ಶಿಂಧೆ ಮನಮೋಹನ್‌ ಸಿಂಗ್‌ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದರು. ರಾಜ್ಯ ರಾಜಕಾರಣದ ಮಾಹಿತಿ ಹೊಂದಿದ್ದಾರೆ. ಹಲವಾರು ಬಾರಿ ಪಕ್ಷ ಸಂಘಟನೆಗಾಗಿ ರಾಜ್ಯಕ್ಕೆ ಆಗಮಿಸಿದ್ದಾರೆ. ಇವರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜಿತೆಂದ್ರ ಸಿಂಗ್‌, ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ದೀಪಕ್‌ ಬಾಬ್ರಿಯಾ ಕೂಡ ಇರಲಿದ್ದಾರೆ.

ವರದಿಯನ್ನು ಇಲ್ಲಿ ನೋಡಿ

ಈ ಬಾರಿ ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಹಲವು ನಾಯಕರಿದ್ದಾರೆ. ಮುಖ್ಯವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ನಡುವೆ ಪೈಪೋಟಿ ನಡೆಯುತ್ತಿದೆ. ಇವರಿಬ್ಬರಲ್ಲದೆ, ಪಕ್ಷದ ನಾಯಕರಾದ ಡಾ. ಜಿ ಪರಮೇಶ್ವರ್‌, ಎಂ.ಬಿ. ಪಾಟೀಲ್‌ , ಶಾಮನೂರು ಶಿವಶಂಕರಪ್ಪ ಕೂಡ ಬೇಡಿಕೆ ಮಂಡಿಸಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಆಯ್ಕೆಯು ತೀವ್ರ ಕುತೂಹಲ ಮೂಡಿಸಿದೆ. ಈ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಗುತ್ತದೆ. ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ.

ಇದನ್ನೂ ಓದಿ: Karnataka Election 2023: ಯಾರಾಗಲಿದ್ದಾರೆ ಮುಂದಿನ ಸಿಎಂ? 50:50 ಫಾರ್ಮುಲಾ!

Exit mobile version