Site icon Vistara News

Karnataka Election 2023 : ಕಣದಿಂದ ಹಿಂದೆ ಸರಿದ ಗಂಗಾಂಬಿಕೆ, ರಾಮಣ್ಣ ಲಮಾಣಿ ಸೇರಿದಂತೆ ಪ್ರಮುಖ ಬಂಡಾಯ ಅಭ್ಯರ್ಥಿಗಳು

Karnataka Election 2023 some of dissidents withdraw their nomination

#image_title

ಬೆಂಗಳೂರು : ಕರ್ನಾಟಕ ವಿಧಾನಸಭೆಯ ಚುನಾವಣೆಗೆ (Karnataka Election 2023) ಸಂಬಂಧಿಸಿದಂತೆ ನಾಮಪತ್ರ ಹಿಂದಕ್ಕೆ ಪಡೆಯಲು ಸೋಮವಾರ ಕೊನೆಯ ದಿನವಾಗಿದ್ದು, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಬಿಜೆಪಿ ಮತ್ತು ಕಾಂಗ್ರೆಸ್‌ನ ಹಲವು ಅಭ್ಯರ್ಥಿಗಳು ತಮ್ಮ ನಾಮ ಪತ್ರವನ್ನು ಹಿಂದಕ್ಕೆ ಪಡೆದಿದ್ದಾರೆ.

31 ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳು ಕಣದಲ್ಲಿದ್ದರು. ಇವರಲ್ಲಿ ಬೆರಳೆಣಿಕೆಯಷ್ಟು ಮಂದಿ ನಾಮಪತ್ರ ಹಿಂದಕ್ಕೆ ಪಡೆಯುವಂತೆ ಮಾಡುವಲ್ಲಿ ಪಕ್ಷದ ನಾಯಕರು ಯಶಸ್ವಿಯಾಗಿದ್ದಾರೆ. ಬಂಡಾಯ ಕಾರಣದಿಂದಲೇ ಹಲವು ಕ್ಣೇತ್ರಗಳಲ್ಲಿ ಕಾಂಗ್ರೆಸ್ ಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿಯೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತಿತರ ನಾಯಕರು ನಿರಂತರವಾಗಿ ಬಂಡಾಯ ಅಭ್ಯರ್ಥಿಗಳೊಂದಿಗೆ ಮಾತುಕತೆ ನಡೆಸಿದ್ದು, ಬಂಡಾಯ ಅಭ್ಯರ್ಥಿಗಳನ್ನು ಕಣದಿಂದ ಹಿಂದಕ್ಕೆ ಸರಿಯುವಂತೆ(nomination withdrawal) ಮನವೊಲಿಸಲು ಪ್ರಯತ್ನಿಸಿದ್ದು.

ಈ ಪ್ರಯತ್ನ ಕೆಲವು ಕಡೆ ಯಶಸ್ಸು ಪಡೆದಿದ್ದರೆ ಮತ್ತೆ ಕೆಲವು ಕಡೆ ಯಶಸ್ಸು ನೀಡಿಲ್ಲ. ಪ್ರಮುಖ ಕ್ಷೇತ್ರಗಳನ್ನು ಬಂಡಾಯ ಅಭ್ಯರ್ಥಿಗಳು ಇನ್ನೂ ಕಣದಲ್ಲಿದ್ದಾರೆ.

ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಪ್ರಬಲ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ, ಮಾಜಿ ಮೇಯರ್‌ ಗಂಗಾಂಬಿಕೆ ಕಣದಿಂದ ಹಿಂದಕ್ಕೆ ಸರಿದಿದ್ದಾರೆ. ಇವರೊಂದಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌, ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ ಮಾತುಕತೆ ನಡೆಸಿದ್ದರು.

ಇದೇ ರೀತಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರವಿಕುಮಾರ್ ಹಾಗೂ ನಾರಾಯಣ ಸ್ವಾಮಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಶಿವಮೊಗ್ಗದ ನಿವಾಸದಲ್ಲಿ ಸೊರಬ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಈ ವಿಷಯ ತಿಳಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಸೂಚನೆಯ ಮೇರೆಗೆ ತಾವು ಇವರಿಬ್ಬರೊಂದಿಗೆ ಮಾತುಕತೆ ನಡೆಸಿ, ಮನವೊಲಿಸಿರುವುದಾಗಿ ಹೇಳಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್‌ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಸ್ಪರ್ಧಿಸುತ್ತಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಬಂಡಾಯ ಅಭ್ಯರ್ಥಿ ಅಲ್ತಾಫ್ ಕಿತ್ತೂರ ಕೂಡ ನಾಮಪತ್ರ ಹಿಂದಕ್ಕೆ ಪಡೆದು, ಜಗದೀಶ್‌ ಶೆಟ್ಟರ್‌ಗೆ ಬಂಬಲ ಸೂಚಿಸಿದ್ದಾರೆ. ಅಲ್ತಾಫ್ ಕಿತ್ತೂರರೊಂದಿಗೆ ಜಗದೀಶ್ ಶೆಟ್ಟರ್, ಶಾಸಕ ಪ್ರಸಾದ್ ಅಬ್ಬಯ್ಯ ಮಾತುಕತೆ ನಡೆಸಿದ್ದರು.

ಉತ್ತರಕನ್ನಡ ಜಿಲ್ಲೆಯಶಿರಸಿ-ಸಿದ್ದಾಪುರ ಕ್ಷೇತ್ರಕ್ಕೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ವೆಂಕಟೇಶ್ ಹೆಗಡೆ ಕೂಡ ತಮ್ಮ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಹೊಸಬಾಳೆಯೊಂದಿಗೆ ಸಿದ್ದರಾಮಯ್ಯ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ಅವರು ನಾಮಪತ್ರ ಹಿಂದಕ್ಕೆ ಪಡೆಯುವ ತೀರ್ಮಾನ ಪ್ರಕಟಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸುವುದಾಗಿ ಘೋಷಿಸಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಕುಮಟಾ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಾರದಾ ಶೆಟ್ಟಿ ನಾಮಪತ್ರ ಹಿಂದಕ್ಕೆ ಪಡೆದಿದ್ದು, ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಿರುವುದಾಗಿ ಪ್ರಕಟಿಸಿದ್ದಾರೆ. ಕುಮಟಾದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನವಿಯ ಮೇರೆಗೆ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ಮುಂದೆ ಎಂ.ಎಲ್.ಸಿ ಅಥವಾ ನಿಗಮ ಮಂಡಳಿ ಅಧ್ಯಕ್ಷ ಹುದ್ದೆ ಕೊಡುವುದಾಗಿ ಡಿಕೆಶಿ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ʻʻನಮ್ಮ ಬೆಂಬಲಿಗರು ಯಾರನ್ನಾದರೂ ಬೆಂಬಲಿಸಲು ಸ್ವತಂತ್ರರುʼʼ ಎಂದು ಅವರು ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆ ತೇರದಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಬಂಡಾಯ ಅಭ್ಯರ್ಥಿ ಡಾ.ಎ ಆರ್. ಬೆಳಗಲಿ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ನಾಮಪತ್ರ ವಾಪಸ್ ಪಡೆದರೂ ಕಾಂಗ್ರೆಸ್ ಗೆ ಬೆಂಬಲ ನೀಡುವುದಿಲ್ಲ ಎಂದು ಅವರು ಪ್ರಕಟಿಸಿದ್ದಾರೆ. ಕಾಂಗ್ರೆಸ್ ಇನ್ನೋರ್ವ ಬಂಡಾಯ ಅಭ್ಯರ್ಥಿ ಡಾ ಪದ್ಮಜಿತ್ ನಾಡಗೌಡ ಗೆ ಬೆಂಬಲ‌ ನೀಡುವುದಾಗಿ ಅವರು ಹೇಳಿದ್ದಾರೆ.

ಉಡುಪಿಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಕೃಷ್ಣಮೂರ್ತಿ ಆಚಾರ್ಯ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲಾ ಪ್ರವಾಸಕೈಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕೃಷ್ಣಮೂರ್ತಿ ಜತೆಗೆ ಮಾತುಕತೆ ನಡೆಸಿದ್ದು, ಬಹಿರಂಗ ಸಭೆಯಲ್ಲಿಯೇ ಪಕ್ಷದ ಅಧಿಕೃತ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ರನ್ನು ಕೃಷ್ಣಮೂರ್ತಿ ಆಚಾರ್ಯ ಆಲಂಗಿಸಿಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಬಿಜೆಪಿಯಲ್ಲಿಯೂ ಹಿಂದೆ ಸರಿದ ಹಲವರು

ತುಮಕೂರು ಜಿಲ್ಲೆ ಕುಣಿಗಲ್‌ ವಿಧಾನಸಭಾಕ್ಷೇತ್ರದಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಚ್.ಡಿ.ರಾಜೇಶ್ ಗೌಡ ಕಣದಿಂದ ಹಿಂದಕ್ಕೆ ಸರಿದಿದ್ದಾರೆ. ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಎಚ್.ಡಿ.ರಾಜೇಶ್ ಗೌಡ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಪಕ್ಷದಲ್ಲಿಯೇ ಇದ್ದು, ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ಅವರು ಪ್ರಕಟಿಸಿದ್ದಾರೆ. ಅಲ್ಲದೆ, ಮುನಿಸು ಮರೆತು ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದಾರೆ. ಅವರು ಟಿಕೆಟ್ ಬಯಸಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಗದಗ ಜಿಲ್ಲೆ ಶಿರಹಟ್ಟಿ ಮೀಸಲು ಕ್ಷೇತ್ರದ ಶಾಸಕ ರಾಮಣ್ಣ ಲಮಾಣಿ ಕೂಡ ಕಣದಿಂದ ಹಿಂದಕ್ಕೆ ಸರಿದಿದ್ದಾರೆ. ಟಿಕೇಟ್ ಕೈ ತಪ್ಪಿದ್ದ ಹಿನ್ನೆಲೆಯಲ್ಲಿ ಹಾಲಿ ಶಾಸಕರಾಗಿರುವ ರಾಮಣ್ಣ ಕಣಕ್ಕಿಳಿದಿದ್ದರು. ಈ ಬಾರಿ ಬಿಜೆಪಿ ಈ ಕ್ಷೇತ್ರದಲ್ಲಿ ಪಕ್ಷದ ನಾಯಕ ಚಂದ್ರು ‌ಲಮಾಣಿಯನ್ನು ಕಣಕ್ಕಿಳಿಸಿತ್ತು. ಹೀಗಾಗಿ ರಾಮಣ್ಣ ಲಮಾಣಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಇವರೊಂದಿಗೆ ಮಾಜು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ಪಕ್ಷದ ಉಪಾಧ್ಯಕ್ಷ ವಿಜಯೇಂದ್ರ ಮಾತುಕತೆ ನಡೆಸಿ, ಅವರ ಮನವೊಲಿಸಿದ್ದಾರೆ. ಇದವರೊಂದಿಗೆ ಟಿಕೇಟ್ ವಂಚಿತರಾಗಿ ಕಣಕ್ಕಿಳಿದಿದ್ದ ಭೀಮಸಿಂಗ್ ರಾಠೋಡ, ಗುರುನಾಥ ದಾನಪ್ಪನವರ ಸೇರಿದಂತೆ ಹಲವರು ಸಹ ಕಣದಿಂದ ಹಿಂದಕ್ಕೆ ಸರಿದಿದ್ದಾರೆ.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎ. ಎಸ್. ಮಂಜುನಾಥ್ ಕೂಡ ಕಣದಿಂದ ಹಿಂದೆ ಸರಿದಿದ್ದಾರೆ. ಬಿಜೆಪಿ ಮುಖಂಡರಾಗಿರುವ ಎ.ಎಸ್ ಮಂಜುನಾಥ್ ಪಕ್ಷೇತರವಾಗಿ ಬಿಜೆಪಿ ಅಭ್ಯರ್ಥಿ ಲಿಂಗಮೂರ್ತಿ ವಿರುದ್ಧ ಸ್ಪರ್ಧೆಗೆ ಇಳಿದಿದ್ದರು. ನಾಮಪತ್ರ ಹಿಂಪಡೆದಿರುವ ಅವರು ಇನ್ನೋರ್ವ ಪಕ್ಷೇತರ ಅಭ್ಯರ್ಥಿ ಟಿ. ಮಂಜುನಾಥ್ ಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಬಿಜೆಪಿ ನಾಯಕರ ವರ್ತನೆಗೆ ಬೇಸತ್ತು ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ್ದೆ. ಯಾವುದೇ ಆಮಿಷಕ್ಕೆ ಬಲಿಯಾಗದೇ ಸಂತೋಷದಿಂದ ನಾಮಪತ್ರ ಹಿಂಪಡೆದಿದ್ದೇನೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಟಿ.ಮಂಜುನಾಥ್ ಅವರಿಗೆ ಬೆಂಬಲ ಸೂಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಧಾರವಾಡ ಕ್ಷೇತ್ರದಲ್ಲಿನ ಬಂಡಾಯವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶಮನಗೊಳಿಸಿದ್ದಾರೆ. ಶಾಸಕ ಅಮೃತ ದೇಸಾಯಿ ಮತ್ತು ಹೋರಾಟಗಾರ ಬಸವರಾಜ ಕೊರವರ್ ಮಧ್ಯೆ ಸಂಧಾನ ನಡೆಸಿರುವ ಅವರು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಬಸವರಾಜ ಕೊರವರ್ ನಾಮ ಪತ್ರ ಹಿಂದಕ್ಕೆ ಪಡೆಯುವಂತೆ ಮಾಡಿದ್ದಾರೆ. ʻʻಅವರಿಬ್ಬರೂ ಹಳೆಯ ಸ್ನೇಹಿತರು. ಏನೋ ಸ್ವಲ್ಪ ಇಬ್ಬರ ಮಧ್ಯೆವಮನಸ್ತಾಪ ಬಂದಿತ್ತು. ಅದೆಲ್ಲವೂ ಈಗ ನಿವಾರಣೆಯಾಗಿದೆʼʼ ಎಂದು ಸಚಿವ ಪ್ರಲ್ಹಾದ್‌ ಜೋಷಿ ಹೇಳಿದ್ದಾರೆ. ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ತವನಪ್ಪ ಅಷ್ಟಗಿ ಕಣದಿಂದ ಹಿಂದಕ್ಕೆ ಸರಿದಿದ್ದಾರೆ. ಅವರು ಭಾನುವಾರವಷ್ಟೇ ಕಾಂಗ್ರೆಸ್‌ ಸೇರಿದ್ದರು.

ಬಾಗಲಕೋಟೆ ಜಿಲ್ಲೆ ತೇರದಾಳ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಗಳಾದ ರಾಜೇಂದ್ರ ಅಂಬಲಿ, ಬಸವರಾಜ ಬಾಳಿಕಾಯಿ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ನೇಕಾರ ಸಮುದಾಯಕ್ಕೆ ಟಿಕೆಟ್‌ಗಾಗಿ ರಾಜೇಂದ್ರ ಅಂಬಲಿ ಪಟ್ಟು ಹಿಡಿದಿದ್ದು, ಟಿಕೆಟ್ ಸಿಗದಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.

ಹಾಸನ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶಾಸಕ ಪ್ರೀತಂಗೌಡ ಪತ್ನಿ ಕಾವ್ಯ ಕೂಡ ಕಣದಿಂದ ಹಿಂದಕ್ಕೆ ಸರಿದಿದ್ದಾರೆ.

ಕಣದಿಂದ ಹಿಂದೆ ಸರಿದ ಜೆಡಿಎಸ್‌ ಅಭ್ಯರ್ಥಿ

ಹಾಸನ ಜಿಲ್ಲೆ ಅರಸೀಕೆರೆ ಕ್ಷೇತ್ರದ ಬಂಡಾಯ ಜೆಡಿಎಸ್ ಅಭ್ಯರ್ಥಿಯಾಗಿ ಬಾಣಾವರ ಅಶೋಕ್ ಕಣದಿಂದ ಹಿಂದಕ್ಕೆ ಸರಿದಿದ್ದಾರೆ. ಎನ್. ಆರ್. ಸಂತೊಕಷ್ ಗೆ ಟಿಕೇಟ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಅವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು.

ಇದನ್ನೂ ಓದಿ : Karnataka Election : ನಾನು ಬಸವ ಅನುಯಾಯಿ; ಲಿಂಗಾಯತ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಸಿದ್ದರಾಮಯ್ಯ

Exit mobile version