ಬೆಂಗಳೂರು: ಲೋಕಸಭೆ ಚುನಾವಣೆಗೆ (Lok sabha Elections 2024) ಇನ್ನು ಕೆಲವೇ ತಿಂಗಳು ಬಾಕಿ ಇದೆ. ರಾಜ್ಯ ರಾಜಕಾರಣ (Karnataka Politics) ರಂಗೇರಿದೆ. ಈ ನಡುವೆ ಬಿಜೆಪಿ – ಜೆಡಿಎಸ್ ಮೈತ್ರಿ (BJP JDS Alliance) ಮಾಡಿಕೊಂಡಿದ್ದು, ರಾಜ್ಯದಲ್ಲಿ ಲೋಕ ಸಮರಕ್ಕೆ ಸಜ್ಜಾಗಿದೆ. ಈಗ ಇದಕ್ಕಿಂತ ಮುಂಚಿತವಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ (Bangalore Teachers Constituency) ಫೆ. 16ರಂದು ಉಪ ಚುನಾವಣೆ ನಡೆಯುತ್ತಲಿದ್ದು, ಇದಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಯಾವ ಪಕ್ಷದವರನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಕೊನೆಗೆ ಜೆಡಿಎಸ್‌ಗೆ ಬಿಟ್ಟುಕೊಡಲು ರಾಜ್ಯ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದು, ಬಿಜೆಪಿ ಹೈಕಮಾಂಡ್ (BJP high command) ಗಮನಕ್ಕೆ ತಂದು ಅಂತಿಮ ಘೋಷಣೆ ಹೊರಬೀಳಲಿದೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಮೈತ್ರಿ ಸಭೆ ಭಾನುವಾರ ನಡೆದಿದ್ದು, ಸುಮಾರು 2 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಲಾಗಿದೆ.
ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಜೆಪಿಯಿಂದ ಮಾಜಿ ಸಿಎಂಗಳಾದ ಡಿ.ವಿ. ಸದಾನಂದಗೌಡ, ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಡಿಸಿಎಂಗಳಾದ ಗೋವಿಂದ ಕಾರಜೋಳ, ಅಶ್ವತ್ಥ ನಾರಾಯಣ್ ಭಾಗಿಯಾಗಿದ್ದರು. ಜೆಡಿಎಸ್‌ನಿಂದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವರಾದ ಜಿ.ಟಿ ದೇವೇಗೌಡ, ಬಂಡೆಪ್ಪ ಖಾಶೆಂಪುರ್ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮುಖಂಡರಾದ ತಿಪ್ಪೇಸ್ವಾಮಿ, ಭೋಜೇಗೌಡ ಭಾಗಿಯಾಗಿದ್ದರು.
ಈ ಸಭೆಯಲ್ಲಿ ಲೋಕಸಭಾ ಚುನಾವಣೆ ತಯಾರಿ, ಅಭ್ಯರ್ಥಿಗಳ ಆಯ್ಕೆ, ಹೋರಾಟದ ರೂಪುರೇಷೆ ಸೇರಿದಂತೆ ಇನ್ನಿತರ ವಿಷಯಗಳ ಚರ್ಚೆಗೆ ಬಂದಿವೆ ಎನ್ನಲಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನಾಗಿ ಯಾರನ್ನು ಕಣಕ್ಕೆ ಇಳಿಸಬೇಕು ಎಂದು ಚರ್ಚೆ ನಡೆದಿದೆ. ಎರಡೂ ಪಕ್ಷದಿಂದ ಅಭ್ಯರ್ಥಿ ಇರುವುದರಿಂದ ಯಾರನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆ ತೀವ್ರ ಚರ್ಚೆ ನಡೆದಿದೆ. ಕೊನೆಗೆ ಜೆಡಿಎಸ್‌ಗೆ ಬಿಟ್ಟುಕೊಡುವ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ.
ಜೆಡಿಎಸ್ ಅಭ್ಯರ್ಥಿ ಎ.ಪಿ ರಂಗನಾಥ್ ಸ್ಪರ್ಧೆ ಬಹುತೇಕ ಖಚಿತ
ಈ ಬೆಳವಣಿಗೆ ಹಿನ್ನೆಲೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧೆ ಮಾಡಲು ಆಕಾಂಕ್ಷಿಯಾಗಿ ಎ.ಪಿ ರಂಗನಾಥ್ ಅವರಿಗೆ ಟಿಕೆಟ್ ಕೊಡುವ ಸಾಧ್ಯತೆ ಹೆಚ್ಚಿದೆ. ಈಗ ರಾಜ್ಯ ನಾಯಕರ ನಡುವೆ ಆದ ತೀರ್ಮಾನಕ್ಕೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸಿದಲ್ಲಿ ಜೆಡಿಎಸ್‌ನಿಂದ ಎ.ಪಿ. ರಂಗನಾಥ್ ಸ್ಪರ್ಧೆ ಬಹುತೇಕ ಖಚಿತ ಎಂದು ತಿಳಿದುಬಂದಿದೆ.
ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ: ಬಿ.ಎಸ್. ಯಡಿಯೂರಪ್ಪ
ವಿಧಾನ ಪರಿಷತ್‌ಗೆ ಸೀಮಿತವಾಗಿ ಎಲ್ಲರೂ ಚರ್ಚೆ ಮಾಡಿದ್ದೇವೆ. ಚರ್ಚೆಯ ವಿಚಾರವನ್ನು ದೆಹಲಿಗೆ ತಿಳಿಸುತ್ತೇವೆ. ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಎಂಎಲ್‌ಸಿ ಚುನಾವಣೆ ಬಂದಿದ್ದು, ಒಟ್ಟಾಗಿ ಎದುರಿಸುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಮುಂದಿನ ಚುನಾವಣೆಗೆ ಇಲ್ಲಿಂದಲೇ ಸಂದೇಶ
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಇಂದು ಯಡಿಯೂರಪ್ಪ ಅವರ ಮನೆಯಲ್ಲಿ ಎರಡೂ ಪಕ್ಷದ ಪ್ರಮುಖ ನಾಯಕರು ಸಭೆ ನಡೆಸಿ ಚರ್ಚೆ ಮಾಡಿದ್ದೇವೆ. ಇದು ಮೊದಲ ಸಭೆಯಾಗಿದ್ದು, ಸಾಕಷ್ಟು ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ಶೀಘ್ರದಲ್ಲೇ ವಿಧಾನ ಪರಿಷತ್‌ಗೆ ಬೈ ಎಲೆಕ್ಷನ್ ಇದೆ. ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ಮಾಡಿದ್ದೇವೆ. ಬಿಜೆಪಿ ಹೈಕಮಾಂಡ್‌ಗೆ ಮಾಹಿತಿ ನೀಡುತ್ತೇವೆ. ಮುಂದಿನ ಚುನಾವಣೆಗೆ ಇಲ್ಲಿಂದಲೇ ಸಂದೇಶ ಕೊಡಲಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಒಟ್ಟಾಗಿ ಹೋಗುತ್ತೇವೆ. ರಾಜ್ಯದಲ್ಲಿ ಕೆಟ್ಟ ಸರ್ಕಾರ ಇದೆ. ಅದು ತೊಲಗಬೇಕು ಎಂದು ಹೇಳಿದರು.
ಇದನ್ನೂ ಓದಿ: HD Kumaraswamy: ಮಂಡ್ಯ ಲೋಕಸಭೆಯಿಂದ ಎಚ್.ಡಿ. ಕುಮಾರಸ್ವಾಮಿ ಸ್ಪರ್ಧೆ ಖಚಿತ; ಕೇಂದ್ರ ಮಂತ್ರಿ ಆಗುತ್ತಾರಾ?
ತಳಮಟ್ಟದಲ್ಲಿ ಎರಡೂ ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ಹೋಗಬೇಕು
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಎರಡೂ ಪಕ್ಷದವರು ಒಟ್ಟಿಗೆ ಕುಳಿತು ವಿಧಾನ ಪರಿಷತ್ ಉಪ ಚುನಾವಣೆ ಎದುರಿಸಬೇಕಿದೆ. ಮುಂದೆ ಲೋಕಸಭಾ ಚುನಾವಣೆ ಕೂಡ ಬರುತ್ತಿದೆ. ಈ ಬಗ್ಗೆ ಚರ್ಚೆಯಾಗಿದೆ. ಅಭ್ಯರ್ಥಿ ಘೋಷಣೆ ಮಾಡಲು ಹೈಕಮಾಂಡ್‌ಗೆ ಮನವಿ ಮಾಡುತ್ತೇವೆ. ತಳಮಟ್ಟದಲ್ಲಿ ಎರಡೂ ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ಹೋಗಬೇಕು ಎಂದು ಹೇಳಿದರು.