ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ನೀರಾವರಿ ಖಾತೆಯನ್ನು ಏಕೆ ತೆಗೆದುಕೊಂಡರು? ತಮಗೇ ಈ ಖಾತೆ ಬೇಕು ಎಂದು ಅವರು ಪಟ್ಟು ಹಿಡಿದಿದ್ದು ಏಕೆ? ಎಂದು ಹಲವು ಬಾರಿ ಚರ್ಚೆಯಾದ ವಿಚಾರವಾಗಿತ್ತು. ಆದರೆ, ಈಗ ಇದಕ್ಕೆ ಸ್ವತಃ ಡಿಕೆಶಿ ಕಾರಣವನ್ನು ಹೇಳಿದ್ದಾರೆ. ಅವರು ಜಲ ಸಂಪನ್ಮೂಲ ಖಾತೆಯನ್ನು (Water Resources) ಪಡೆದುಕೊಳ್ಳಲು “ಮೇಕೆದಾಟು” ಯೋಜನೆಯೇ (Mekedatu project) ಕಾರಣವಂತೆ.
ಕರ್ನಾಟಕದಲ್ಲಿ ನೀರಿನ ಸಮಸ್ಯೆ ತಲೆದೋರುತ್ತಿದೆ. ಅಲ್ಲದೆ, ಬೆಂಗಳೂರು ದಿನೇ ದಿನೆ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ನೀರಿಗೆ ಸಾಕಷ್ಟು ಸಮಸ್ಯೆಗಳು ಆಗುತ್ತಿವೆ. ಅಲ್ಲದೆ, ಪ್ರತಿ ವರ್ಷ ಮಳೆ ಸರಿಯಾಗಿ ಆಗದೇ ಇದ್ದಾಗ ತಮಿಳುನಾಡಿಗೆ ನೀರು ಬಿಡುವ ವಿಷಯದಲ್ಲಿ ಸಮಸ್ಯೆ ಆಗುತ್ತಲೇ ಇದೆ. ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕೆಂದರೆ ಮೇಕೆದಾಟು ಯೋಜನೆ ಜಾರಿಗೆ ಬರಬೇಕು ಎಂಬುದು ಕಾಂಗ್ರೆಸ್‌ನ ವಾದವಾಗಿದೆ. ಈ ಸಂಬಂಧ ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಆಗಿನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆಯನ್ನು ಸಹ ಕೈಗೊಳ್ಳಲಾಗಿತ್ತು. ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಬಜೆಟ್‌ನಲ್ಲಿ ಸಹ ಮೇಕೆದಾಟು ಯೋಜನೆಯನ್ನು ಪ್ರಸ್ತಾಪ ಮಾಡಿದೆ.
ನೀರಾವರಿ ಖಾತೆ ಬಗ್ಗೆ ಡಿ.ಕೆ. ಶಿವಕುಮಾರ್ ಹೇಳಿದ್ದೇನು?
ನಮ್ಮ ಸರ್ಕಾರಕ್ಕೆ ಬದ್ಧತೆ ಇರುವ ಕಾರಣ ಮೇಕೆದಾಟು ಯೋಜನೆ ಜಾರಿಗೆ ಅರಣ್ಯ ಪ್ರದೇಶದಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ಅರಣ್ಯ ಪ್ರದೇಶಕ್ಕೆ ಪರ್ಯಾಯ ಜಾಗ ಗುರುತಿಸಲಾಗಿದೆ. ಬದ್ಧತೆ ಇರುವ ಕಾರಣಕ್ಕೆ ನಾವು ಪೂರ್ವಭಾವಿ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದೇವೆ. ಈ ಯೋಜನೆಯನ್ನು ಮಾಡಲೇಬೇಕು ಅಂತಲೇ ನಾನು ನೀರಾವರಿ ಇಲಾಖೆಯ ಜವಾಬ್ದಾರಿ ತೆಗೆದುಕೊಂಡಿದ್ದೇನೆ ಡಿ.ಕೆ. ಶಿವಕುಮಾರ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.
ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಗೆ ಮೇಕೆದಾಟು ಯೊಜನೆಯೊಂದೇ ಶಾಶ್ವತ ಪರಿಹಾರವಾಗಿದೆ. ಆದರೆ ಸದ್ಯದ ಮಟ್ಟಿಗೆ ನೀರಿನ ಅಭಾವ ನೀಗಿಸಲು ಹಾಲಿ ಇರುವ ಕೊಳವೆ ಬಾವಿಗಳನ್ನು ಮತ್ತೆ ಕೊರೆಸುವುದು ಮತ್ತು ಹೊಸ ಕೊಳವೆ ಬಾವಿಯನ್ನು ಕೊರೆಸಲು ತೀರ್ಮಾನಿಸಿದ್ದೇವೆ. ಕೈಗಾರಿಕೆ, ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲರಿಗೂ ನೀರು ಪೂರೈಸುತ್ತೇವೆ. ಇದಕ್ಕಾಗಿ ಆನೇಕಲ್ ಹಾಗೂ ಬೆಂಗಳೂರು ದಕ್ಷಿಣ ಭಾಗದ ಹಳ್ಳಿಗಳ ರೈತರ ಜತೆಗೂ ಒಪ್ಪಂದ ಮಾಡಿಕೊಂಡು ಅವರ ಕೊಳವೆ ಬಾವಿ ನೀರನ್ನು ಬಳಸಿಕೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಮೇ ಅಂತ್ಯದೊಳಗೆ ಕಾವೇರಿ 5ನೇ ಹಂತ ಪೂರ್ಣ
ನೀರಿನ ಪೂರೈಕೆಯಲ್ಲಿ ನಡೆಯುತ್ತಿದ್ದ ದಂಧೆಯನ್ನು ನಾವು ತಡೆದಿದ್ದೇವೆ. ಜನರಿಗೆ ಸೂಕ್ತ ದರದಲ್ಲಿ ನೀರು ಸಿಗುವಂತೆ ಮಾಡಿದ್ದೇವೆ. ಕೆಲವು ಕೊಳಗೇರಿ ಪ್ರದೇಶದಲ್ಲಿ ಉಚಿತವಾಗಿ ನೀರು ನೀಡುತ್ತಿದ್ದೇವೆ. ಉಳಿದಂತೆ ಅಪಾರ್ಟ್ಮೆಂಟ್‌ಗಳಿಗೆ ಪೂರೈಸುವ ನೀರಿಗೆ ದರ ನಿಗದಿ ಮಾಡಿದ್ದು, ಕೈಗಾರಿಕೆಗಳ ಬಳಕೆಗೆ ಪ್ರತ್ಯೇಕ ದರ ನಿಗದಿ ಮಾಡಲಾಗಿದೆ. ಈಗಾಗಲೇ 1500ಕ್ಕೂ ಹೆಚ್ಚು ಟ್ಯಾಂಕರ್ ಗಳನ್ನು ನೋಂದಣಿ ಮಾಡಲಾಗಿದ್ದು, ಬೇರೆಯವರಿಗೆ ನೋಂದಣಿ ಮಾಡಿಕೊಳ್ಳಲು ಕಾಲಾವಕಾಶ ನೀಡಿದ್ದೇವೆ. ಪೊಲೀಸ್, ಆರ್‌ಟಿಒ, ಪಾಲಿಕೆ ಅವರಿಗೆ ಸೂಚನೆ ನೀಡಿ ನೋಂದಾಯಿತ ಟ್ಯಾಂಕರ್‌ಗಳ ಮೇಲೆ ಸರ್ಕಾರದ ನಾಮಫಲಕ ಅಳವಡಿಸುವಂತೆ ಮಾಡುತ್ತೇವೆ. ಆ ಮೂಲಕ ಸರ್ಕಾರದ ನಿಯಂತ್ರಿತ ಕಾನೂನುಬಾಹಿರವಾಗಿ ಜನರಿಂದ ವಸೂಲಿ ಮಾಡುವುದನ್ನು ತಡೆಗಟ್ಟಲು ಮುಂದಾಗಿದ್ದೇವೆ. ಬೆಂಗಳೂರಿನ ಸುತ್ತಮುತ್ತಲು ಇರುವ ನೀರಾವರಿ ಕೊಳವೆ ಬಾವಿಯನ್ನು ನಾವು ಗುರುತಿಸಿದ್ದು, ಅಗತ್ಯ ಬಿದ್ದರೆ ಅವುಗಳನ್ನು ಬಳಸಿಕೊಳ್ಳುತ್ತೇವೆ. ಇನ್ನು ಬೆಂಗಳೂರಿನ ಹೊರವಲಯದ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆ ಮೇ ಅಂತ್ಯದೊಳಗೆ ಪೂರ್ಣಗೊಳಿಸುತ್ತೇವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ತಮಿಳುನಾಡಿಗೆ ನೀರು ಬಿಟ್ಟಿಲ್ಲ
ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, “ತಮಿಳುನಾಡಿಗೆ ನೀರು ಬಿಟ್ಟಿರುವ ಆರೋಪ ಸುಳ್ಳು. ತಮಿಳುನಾಡಿಗೆ ಈ ಸಂದರ್ಭದಲ್ಲಿ ನೀರು ಬಿಡುವ ಪ್ರಶ್ನೆಯೇ ಇಲ್ಲ. ತಮಿಳುನಾಡಿಗೆ ನೀರು ಬಿಟ್ಟಿಲ್ಲ, ಬಿಡುವುದೂ ಇಲ್ಲ. ತಮಿಳುನಾಡಿಗೆ ಹೋಗುವ ಪ್ರತಿಯೊಂದು ನೀರಿನ ಲೆಕ್ಕ ದಾಖಲಾಗಿರುತ್ತದೆ. ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಾವು ನೀರಿನ ವಿಚಾರದಲ್ಲಿ ಜವಾಬ್ದಾರಿ ಹೊಂದಿದ್ದೇವೆ. ಕಾವೇರಿ ಭಾಗದ ರೈತರನ್ನು ನಾವು ಈ ಹಿಂದೆಯೂ ಕಾಪಾಡಿದಿದ್ದೇವೆ. ಈಗಲೂ ಕಾಪಾಡುತ್ತಿದ್ದೇವೆ. ತಮಿಳುನಾಡು ನೀರು ಕೇಳುತ್ತಿಲ್ಲದಿರುವಾಗ ನಾವು ಯಾಕೆ ಅವರಿಗೆ ನೀರನ್ನು ಬಿಡೋಣ? ಕುಡಿಯುವ ನೀರಿನ ಪೂರೈಕೆ ನಮ್ಮ ಸರ್ಕಾರದ ಮೊದಲ ಆದ್ಯತೆ. ಶಿವ ಡ್ಯಾಂನಲ್ಲಿ ನೀರಿನ ಮಟ್ಟ 2 ಅಡಿ ಕಡಿಮೆ ಇದ್ದ ಕಾರಣ ಬೆಂಗಳೂರಿಗೆ ಪೂರೈಸಲು ನೀರನ್ನು ಪಂಪ್ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಈ ಕೊರತೆಯನ್ನು ತುಂಬಲು ಬಿಡಬ್ಲ್ಯೂಎಸ್ಎಸ್‌ಬಿ ಮನವಿ ಮೇರೆಗೆ ಕೆಆರ್‌ಎಸ್‌ನಿಂದ ನೀರು ಹರಿಸಿದ್ದೇವೆಯೇ ಹೊರತು, ತಮಿಳುನಾಡಿಗೆ ನೀರು ಹರಿಸಿಲ್ಲ ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದರು.
ಇದನ್ನೂ ಓದಿ: Lok Sabha Election 2024: ಬೀದರ್, ಕೊಪ್ಪಳಕ್ಕೆ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ? ಬಳತೆ, ಮಲ್ಕಾಪುರೆಗೆ ಟಿಕೆಟ್?
ಸ್ನಾನಕ್ಕೂ ನೀರಿಲ್ಲ ಎನ್ನುವ ಬುದ್ಧಿವಂತರು!
ಕೆಲವು ಬುದ್ಧಿವಂತರು ಸ್ನಾನಕ್ಕೂ ನೀರಿಲ್ಲ ಎಂದು ಟ್ವೀಟ್ ಮಾಡುತ್ತಾರೆ. ಈ ಮಧ್ಯೆ ವಾರ್ಡ್, ವಲಯ ಮಟ್ಟದಲ್ಲಿ ಕಾಲ್ ಸೆಂಟರ್‌ಗಳನ್ನು ನಿರ್ಮಾಣ ಮಾಡಿದ್ದೇವೆ. ಬೆಂಗಳೂರಿನ ಇತಿಹಾಸದಲ್ಲೇ ಇಷ್ಟು ಪರಿಣಾಮಕಾರಿಯಾದ ವ್ಯವಸ್ಥೆಯನ್ನು ಯಾವ ಸರ್ಕಾರವೂ ಮಾಡಿರಲಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿಕೊಂಡರು.