ಸೊರಬ: ನೈರುತ್ಯ ಪದವೀಧರರ ಕ್ಷೇತ್ರದ (MLC Election) ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪಕ್ಷದ ಹಿರಿಯರು ಸ್ಪರ್ಧಿಸಲು ಅವಕಾಶ ನೀಡಿದ್ದು, ದೇಶದ ಪ್ರಗತಿಗಾಗಿ ಮತದಾರರು ತಮ್ಮ ಗೆಲುವಿಗೆ ಸಾಕ್ಷಿಯಾಗಲಿದ್ದಾರೆ ಎಂದು ನೈರುತ್ಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿ ಡಾ. ಧನಂಜಯ ಸರ್ಜಿ ತಿಳಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಸೇವೆ ಮಾಡಿದ್ದೇನೆ. ಜತೆಗೆ ಅನೇಕ ಸಂಘ-ಸಂಸ್ಥೆಗಳಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದ ಅನುಭವವಿದೆ. ಕೃಷಿ ಕುಟುಂಬದಿಂದ ಬಂದ ನಾನು ಪದವಿ ಹಂತದಲ್ಲಿಯೇ ಪದವೀಧರರ ಸಮಸ್ಯೆಯನ್ನು ಹತ್ತಿರದಿಂದ ಬಲ್ಲವನಾಗಿದ್ದೇನೆ. ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮೂಲಕ ಪದವೀಧರರ ಧ್ವನಿಯಾಗಿ ಕಾರ್ಯನಿರ್ವಹಿಸುವ ಹಂಬಲವಿದೆ ಎಂದು ಹೇಳಿದರು.
ಇದನ್ನೂ ಓದಿ: UPSC: ಐಇಎಸ್ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ
ಕಾರ್ಯಕರ್ತರನ್ನೇ ಶಕ್ತಿಯನ್ನಾಗಿಸಿಕೊಂಡಿರುವ ಬಿಜೆಪಿಯಲ್ಲಿ ಸಂಘಟನಾತ್ಮಕವಾಗಿ ಕಾರ್ಯಕರ್ತರು ತಾವೇ ಅಭ್ಯರ್ಥಿ ಎನ್ನುವಂತೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ನೈರುತ್ಯ ಪದವೀಧರರ ಕ್ಷೇತ್ರದಲ್ಲಿ ಸುಮಾರು 85 ಸಾವಿರ ಮತದಾರರಿದ್ದು, ಹೆಚ್ಚಿನ ಬಹುಮತದೊಂದಿಗೆ ಗೆಲುವು ಸಾಧಿಸುವ ವಿಶ್ವಾಸವಿದೆ. ದೇಶದ ಉತ್ತಮ ಭವಿಷ್ಯಕ್ಕಾಗಿ ಮತ್ತು ಭದ್ರತೆಗಾಗಿ ಬಿಜೆಪಿಗೆ ಮತ ನೀಡುವಂತೆ ಅವರು ಮನವಿ ಮಾಡಿದರು.
ಮಾಜಿ ಸಚಿವ ಎಸ್. ಕುಮಾರ್ ಬಂಗಾರಪ್ಪ ಮಾತನಾಡಿದರು.
ಇದನ್ನೂ ಓದಿ: Diabetes Management Tips: ಈ ಏಳು ಪಾನೀಯಗಳನ್ನು ಸೇವಿಸಿ, ಮಧುಮೇಹ ನಿಯಂತ್ರಿಸಿ
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ಎಚ್.ಎಸ್. ಮಂಜಪ್ಪ, ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಪುರಸಭೆ ಸದಸ್ಯ ಎಂ.ಡಿ. ಉಮೇಶ್, ಪ್ರಮುಖರಾದ ದೇವೇಂದ್ರಪ್ಪ, ಮಾಲತೇಶ್, ಜಾನಕಪ್ಪ ಒಡೆಯರ್ ಯಲಸಿ ಉಪಸ್ಥಿತರಿದ್ದರು.