Site icon Vistara News

Parliament Session: ಇಂದು ಸಂಸತ್‌ನಲ್ಲಿ ಮಂಡನೆಯಾಗುತ್ತಾ ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ?; ಅಧಿವೇಶನದ Live ಇಲ್ಲಿ ನೋಡಿ

Parliament Session

ನವದೆಹಲಿ: ಸಂಸತ್‌ನಲ್ಲಿ ನಡೆಯುತ್ತಿರುವ ಅಧಿವೇಶನ (Parliament Session)ದಲ್ಲಿ ಇಂದು ವಕ್ಫ್ ಮಂಡಳಿಗಳನ್ನು ನಿಯಂತ್ರಿಸುವ ಕಾನೂನನ್ನು ತಿದ್ದುಪಡಿ ಮಾಡುವ ವಕ್ಫ್ (ತಿದ್ದುಪಡಿ) ಮಸೂದೆ ಪರಿಚಯಿಸುವ ಸಾಧ್ಯತೆಯಿದೆ. ಈ ಮಸೂದೆಯು 1995ರ ವಕ್ಫ್ ಕಾಯ್ದೆಯನ್ನು ಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ ಕಾಯ್ದೆ 1995 ಎಂದು ಮರುನಾಮಕರಣ ಮಾಡುವ ಗುರಿಯನ್ನು ಹೊಂದಿದೆ. 11 ಗಂಟೆಗೆ ಉಭಯ ಸದನಗಳ ಕಲಾಪ ಆರಂಭವಾಗಲಿದ್ದು, ಈ ವೇಳೆ ಗಂಭೀರ ಚರ್ಚೆ ನಡೆಯುವ ಸಾಧ್ಯತೆ ಇದೆ.

ಚರ್ಚೆ ಹುಟ್ಟು ಹಾಕಿದ ವಕ್ಫ್‌ ಕಾಯ್ದೆ ತಿದ್ದುಪಡಿ ಪ್ರಸ್ತಾವ

ಸದ್ಯ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮುಂದಾದ ಕೇಂದ್ರ ಸರ್ಕಾರದ ನಿರ್ಧಾರ ವ್ಯಾಪಕ ಚರ್ಚೆ ಹುಟ್ಟು ಹಾಕಿದೆ. ʼʼಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ತರಲು ಕಾನೂನನ್ನು ತಿದ್ದುಪಡಿ ಮಾಡಬೇಕೆಂದು ಮುಸ್ಲಿಂ ಸಮುದಾಯದಿಂದ ಬೇಡಿಕೆಗಳು ಬಂದಿವೆ. ಪ್ರಸ್ತುತ ವಕ್ಫ್ ಮಂಡಳಿಗಳು ತೆಗೆದುಕೊಂಡ ನಿರ್ಧಾರವನ್ನು ನ್ಯಾಯಾಲಯಗಳಲ್ಲಿ ಪ್ರಶ್ನಿಸಲು ಸಾಧ್ಯವಿಲ್ಲ ಎನ್ನುವ ನಿಯಮವಿದೆ. ಈಗ ತಿದ್ದುಪಡಿ ಮಸೂದೆಯು ಅದನ್ನು ಸರಿಪಡಿಸಲು ಪ್ರಯತ್ನಿಸುತ್ತದೆ” ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಏನೆಲ್ಲ ತಿದ್ದುಪಡಿ?

ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಮಂಡಳಿಗೆ ಸೇರಿಸಲು ಪಾರದರ್ಶಕ ನಿಯಮಗಳ ಪಾಲನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅದರಲ್ಲೂ, ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಘೋಷಿಸುವ ಪರಮಾಧಿಕಾರ ತೆಗೆಯಲಿದೆ. ಇನ್ನು, ವಕ್ಫ್‌ ಆಸ್ತಿಗಳ ಮೇಲೆ ನಿಗಾ ಇರಿಸುವ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಇದುವರೆಗೆ ವಕ್ಫ್‌ ಮಂಡಳಿಯಲ್ಲಿ ಹೆಣ್ಣುಮಕ್ಕಳ ಸಹಭಾಗಿತ್ವವೇ ಇರಲಿಲ್ಲ. ಹಾಗಾಗಿ, ಪ್ರತಿಯೊಂದು ರಾಜ್ಯಗಳ ವಕ್ಫ್‌ ಮಂಡಳಿಗಳಲ್ಲಿ ಹೆಣ್ಣುಮಕ್ಕಳಿಗೂ ಸ್ಥಾನ ನೀಡುವುದು. ರಾಜ್ಯಗಳ ಮಂಡಳಿಗಳಲ್ಲಿ ಕನಿಷ್ಠ ಇಬ್ಬರು ಮಹಿಳೆಯರಿಗೆ ಸ್ಥಾನ ನೀಡುವುದು. ಕೇಂದ್ರ ಸಮಿತಿಗಳಲ್ಲೂ ಇಬ್ಬರೂ ಹೆಣ್ಣುಮಕ್ಕಳು ಇರಬೇಕು ಎಂಬ ನಿಯಮ ಜಾರಿಗೆ ತರುವುದು. ಮುಸ್ಲಿಮರು ಕೂಡ ವಕ್ಫ್‌ ಆಸ್ತಿಯನ್ನು ಸೃಷ್ಟಿಸಬಹುದು ಎಂಬ ನಿಯಮ ಜಾರಿಗೊಳಿಸುವುದು ಸೇರಿ ಹಲವು ತಿದ್ದುಪಡಿಗಳಿಗೆ ಪ್ರಸ್ತಾವನೆ ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬಾಂಗ್ಲಾದೇಶ ಗಲಭೆ ಬಗ್ಗೆ ಕಳವಳ

ನೆರೆ ರಾಷ್ಟ್ರ ಬಾಂಗ್ಲಾದೇಶದಲ್ಲಿ ಗಲಭೆ ಹೆಚ್ಚಾಗಿದ್ದು, ಈ ಬಗ್ಗೆ ಮಂಗಳವಾರ ಅಧಿವೇಶನದಲ್ಲಿ ಚರ್ಚೆ ನಡೆಸಲಾಯಿತು. ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ದೇಶದಿಂದ ಪಲಾಯನ ಮಾಡಿ ಭಾರತದಲ್ಲಿ ಆಶ್ರಯ ಪಡೆದ ಒಂದು ದಿನದ ನಂತರ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದರು.

ನೆರೆಯ ದೇಶದಲ್ಲಿನ ಹಿಂಸಾಚಾರ ಮತ್ತು ರಾಜಕೀಯ ಬೆಳವಣಿಗೆಗಳ ಮಧ್ಯೆ ಭಾರತವು ಅಲ್ಲಿನ ಅಧಿಕಾರಿಗಳು ಮತ್ತು ಅಲ್ಲಿರುವ ಭಾರತೀಯ ಸಮುದಾಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ ಎಂದು ತಿಳಿಸಿದರು. “ಜುಲೈ ಉದ್ದಕ್ಕೂ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರಿದಿದ್ದರಿಂದ ನಾವು ಪದೇ ಪದೆ ಸಂಯಮ ಪಾಲಿಸುವಂತೆ ಪ್ರತಿಭನಾಕಾರರಿಗೆ ಸೂಚಿಸಿದ್ದೇವೆ ಮತ್ತು ಮಾತುಕತೆಯ ಮೂಲಕ ಪರಿಸ್ಥಿತಿಯನ್ನು ನಿಯಂತ್ರಿಸುವಂತೆ ಸಲಹೆ ನೀಡಿದ್ದೇವೆʼʼ ಎಂದು ಹೇಳಿದರು.

“ನಮ್ಮ ರಾಜತಾಂತ್ರಿಕ ಕಾರ್ಯಾಚರಣೆಗಳ ಮೂಲಕ ನಾವು ಬಾಂಗ್ಲಾದೇಶದಲ್ಲಿರುವ ಭಾರತೀಯ ಸಮುದಾಯದೊಂದಿಗೆ ನಿಕಟ ಮತ್ತು ನಿರಂತರ ಸಂಪರ್ಕದಲ್ಲಿದ್ದೇವೆ. ಬಾಂಗ್ಲಾದೇಶದಲ್ಲಿ ಸುಮಾರು 20 ಸಾವಿರ ಭಾರತೀಯರಿದ್ದು, ಈ ಪೈಕಿ ಸುಮಾರು 8 ಸಾವಿರ ಮಂದಿ ಮರಳಿದ್ದಾರೆʼʼ ಎಂದೂ ಅವರು ತಿಳಿಸಿದರು.

ಇದನ್ನೂ ಓದಿ: Waqf Act: ವಕ್ಫ್‌ ಮಂಡಳಿ ಪರಮಾಧಿಕಾರಕ್ಕೆ ಮೋದಿ ಮೂಗುದಾರ; ಏನೆಲ್ಲ ತಿದ್ದುಪಡಿ? 9.4 ಲಕ್ಷ ಎಕರೆ ಯಾರ ಪಾಲು?

Exit mobile version