Site icon Vistara News

Gruha Lakshmi : ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ರಾಹುಲ್‌ ಆಗಮನ, ಸೋನಿಯಾ ಗಾಂಧಿಗೂ ಆಹ್ವಾನ

Gruha Lakshmi inauguration preparaion

ಬೆಳಗಾವಿ: ಆಗಸ್ಟ್‌ 27ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್‌ ಸರ್ಕಾರದ (Congress Government) ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ (Gruha Lakshmi) ಉದ್ಘಾಟನೆಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ (Congress Leader Rahul Gandhi_ ಆಗಮಿಸಲಿದ್ದಾರೆ, ಸೋನಿಯಾ ಗಾಂಧಿ (Sonia Gandhi) ಅವರಿಗೂ ಆಹ್ವಾನ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

ಕಾರ್ಯಕ್ರಮ ನಡೆಯಲಿರುವ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಈ ಜಾಗ ಗುರುತಿಸಲಾಗಿದೆ. ರಾಹುಲ್ ಗಾಂಧಿ ಅವರು ಆಗಮಿಸುತ್ತಿದ್ದಾರೆ. ಸೋನಿಯಾ ಗಾಂಧಿ ಅವರಿಗೂ ಆಹ್ವಾನ ನೀಡಿದ್ದೇವೆ. ಒಂದು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ವಿಭಾಗವಾರು ಗ್ಯಾರಂಟಿ ಉದ್ಘಾಟನೆ

ಒಂದೊಂದು ವಿಭಾಗದಲ್ಲಿ ಒಂದೊಂದು ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಶಕ್ತಿ ಯೋಜನೆ, ಕಲಬುರ್ಗಿಯಲ್ಲಿ ಗೃಹ ಜ್ಯೋತಿ, ಮೈಸೂರಿನಲ್ಲಿ ಅನ್ನಭಾಗ್ಯ ಯೋಜನೆ, ಈಗ ಬೆಳಗಾವಿಯಲ್ಲಿ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು. ಯುವನಿಧಿ ಯೋಜನೆಯನ್ನು ಡಿಸೆಂಬರ್ ಇಲ್ಲವೇ ಜನವರಿಯಲ್ಲಿ‌ ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಗೃಹ ಲಕ್ಷ್ಮಿ ಯೋಜನೆಗೆ 1.06 ಕೋಟಿ ಜನರಿಂದ ನೋಂದಣಿ

ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗಲು ಅರ್ಹರಿರುವ 1 ಕೋಟಿ 33 ಲಕ್ಷ ಕುಟುಂಬಗಳ ಪೈಕಿ ಈಗಾಗಲೇ 1 ಕೋಟಿ‌ 6 ಲಕ್ಷ ನೊಂದಣಿಯಾಗಿದೆ. ಬಡವರು, ಮಹಿಳೆಯರಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಸಿಎಂ ಹೇಳಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಮಾಡಬೇಕಾದ ಸಿದ್ಧತೆಗಳ ಕುರಿತು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕ ಆಸೀಫ್ ಸೇಠ್ ಮತ್ತಿತರರು ಇದ್ದರು. ಇದಕ್ಕೂ ಮೊದಲು ಸಿಪಿಎಡ್ ಮೈದಾನವನ್ನು ಸಹ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪರಿಶೀಲಿಸಿದರು.

ಇದನ್ನೂ ಓದಿ: Gruha Lakshmi Scheme : ಆಗಸ್ಟ್‌ 27ಕ್ಕೆ ಎಲ್ಲರ ಮನೆಗೆ ಗೃಹಲಕ್ಷ್ಮಿ; ಸಿಗಲಿದೆ ಪಿಂಕ್‌ ಸ್ಮಾರ್ಟ್‌ ಕಾರ್ಡ್‌!

ಅಥಣಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

ಅದಕ್ಕೂ ಮೊದಲು ಅಥಣಿಯಲ್ಲಿ ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿಯೂ ಲಕ್ಷ್ಮಿ ಹೆಬ್ಬಾಳ್ಕರ್‌ ಗೃಹಲಕ್ಷ್ಮಿ ಯೋಜನೆಯ ಪ್ರಸ್ತಾಪ ಮಾಡಿದರು.

ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಗಳಾದ ನಂತರ ಮೊದಲ ಬಾರಿಗೆ ಸಿದ್ದರಾಮಯ್ಯ ಬೆಳಗಾವಿ ಜಿಲ್ಲೆಗೆ, ಅಥಣಿಗೆ ಆಗಮಿಸಿದ್ದಾರೆ. ಬಸವಣ್ಣನವರ ತತ್ವಗಳನ್ನು ಅಳವಡಿಸಿಕೊಂಡು ಸರಕಾರವನ್ನು ಮುನ್ನಡೆಸುತ್ತಿರುವ ಸಿದ್ದರಾಮಯ್ಯ ಅವರು ಬಡವರಿಗಾಗಿ, ರಾಜ್ಯದ ಜನರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ನುಡಿದಂತೆ ನಡೆಯುತ್ತಿದ್ದಾರೆ ಎಂದು ಪ್ರಶಂಸಿಸಿದರು.

ಇದೇ 27ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟೂ 11.88 ಲಕ್ಷ ಫಲಾನುಭವಿಗಳಿದ್ದು, 9 ಲಕ್ಷ ಮಹಿಳೆಯರು ಈಗಾಗಲೆ ನೊಂದಣಿ ಮಾಡಿಕೊಂಡಿದ್ದಾರೆ. ಈ ವೇದಿಕೆಯನ್ನು ಉಪಯೋಗಿಸಿಕೊಂಡು ತಮಗೆಲ್ಲ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡುತ್ತಿದ್ದೇನೆ. ಎಲ್ಲರೂ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಿ ಎಂದು ಅವರು ವಿನಂತಿಸಿದರು.

Exit mobile version