ಬೆಂಗಳೂರು: “ಅಕ್ರಮ ಆಸ್ತಿ ಹೆಸರಿನಲ್ಲಿ ಬಿಜೆಪಿಯವರ ಷಡ್ಯಂತ್ರ ಏನೇ ಇರಬಹುದು, ನ್ಯಾಯಾಲಯ ಮತ್ತು ನನ್ನ ಆಸ್ತಿ ಪಟ್ಟಿ ಎಲ್ಲಾ ಉತ್ತರ ಕೊಡುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳದ್ದಾರೆ.
2020ರ ಅಕ್ಟೋಬರ್‌ನಲ್ಲಿ ದಾಖಲಾದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ (Disappropriate asset Case) ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ (High Court green Signal) ನೀಡಿರುವ ಬಗ್ಗೆ ಡಿ.ಕೆ. ಶಿವಕುಮಾರ್ ಅವರು ದೇವನಹಳ್ಳಿ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಶೇ. 90ರಷ್ಟು ತನಿಖೆ ಮುಗಿದಿದ್ದು ಹೇಗೆ?: ಡಿಕೆಶಿ ಪ್ರಶ್ನೆ
“ಶೇ. 90 ರಷ್ಟು ತನಿಖೆ ನಡೆಸಿದ್ದೇವೆ ಎಂದು ಸಿಬಿಐ ಹೇಳಿದೆ. ನಾನು, ನನ್ನ ಹೆಂಡತಿ ಹಾಗೂ ಕುಟುಂಬದವರು ನನ್ನ ಆಸ್ತಿ ಯಾವುದು, ನನ್ನ ಹೆಂಡತಿಯ ಆಸ್ತಿ ಯಾವುದು ಎಂದು ಹೇಳಬೇಕು. ನನ್ನನ್ನೇ ಕರೆಸದೆ, ಕೇಳದೆ ಅದು ಹೇಗೆ ಶೇಕಡಾ 90ರಷ್ಟು ತನಿಖೆ ಮಾಡಿದರೋ ಗೊತ್ತಿಲ್ಲ” ಎಂದು ಡಿ.ಕೆ. ಹೇಳಿದರು.
“ನಾವು ನ್ಯಾಯಾಲಯಕ್ಕೆ ಸಿಬಿಐ ದಾಖಲಿಸಿರುವ ಎಫ್‌ಐಆರ್ ಸರಿ ಇಲ್ಲ ಎಂದು ಮೇಲ್ಮನವಿ ಸಲ್ಲಿಸಿದ್ದೆವು. ರಾಜಕೀಯ ಉದ್ದೇಶದಿಂದ ಯಡಿಯೂರಪ್ಪ ಅವರ ಸರ್ಕಾರ ಇದ್ದ ವೇಳೆ ತನಿಖೆಗೆ ಆದೇಶ ನೀಡಿದ್ದರು” ಎಂದು ಹೇಳಿದರು ಡಿ.ಕೆ. ಶಿವಕುಮಾರ್.
“ನನಗೆ ನ್ಯಾಯಲಯದ ಬಗ್ಗೆ ಗೌರವ, ನಂಬಿಕೆಯಿದೆ. ಅಗತ್ಯ ಸಂದರ್ಭದಲ್ಲಿ ಸೂಕ್ತ ಉತ್ತರ ಕೊಡುತ್ತೇನೆ. ಏನೇ ಪ್ರೇರಣೆ ಇರಬಹುದು, ಆದರೆ ನಾನು ಕಾನೂನು ಚೌಕಟ್ಟಿನಲ್ಲೇ ಹೋರಾಟ ಮಾಡುತ್ತೇನೆ” ಎಂದು ತಿಳಿಸಿದರು.
ಡಿ.ಕೆ. ಶಿವಕುಮಾರ್ ರಾಜೀನಾಮೆಗೆ ಬಿಜೆಪಿ ಆಗ್ರಹ
ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ತಕ್ಷಣ ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಿಬಿಐ ತನಿಖೆ ಮುಂದುವರಿಯುವ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಅವರು ತಡಮಾಡದೆ ರಾಜೀನಾಮೆ ಸಲ್ಲಿಸಬೇಕು. ಸಿಬಿಐ ತನಿಖೆ ನಡೆಯಲಿದೆ. ಉನ್ನತ ಹುದ್ದೆಯಲ್ಲಿರುವ ಡಿ.ಕೆ.ಶಿವಕುಮಾರ್ ಅವರು ಸಾಕ್ಷ್ಯಾಧಾರಗಳನ್ನು ಮುಚ್ಚಿ ಹಾಕುವ ಎಲ್ಲ ಸಾಧ್ಯತೆ- ಸಂದರ್ಭಗಳಿವೆ. ಅವರು ಪ್ರಭಾವಿ ವ್ಯಕ್ತಿಯಾದ ಕಾರಣ ಸಾಕ್ಷಿ ನಾಶ ಮಾಡುವ ಸಾಧ್ಯತೆ ಎದ್ದು ಕಾಣುತ್ತದೆ ಎಂದು ನುಡಿದರು.
ಇದನ್ನೂ ಓದಿ: DK Shivakumar : ಡಿಕೆಶಿಗೆ ಬಿಗ್ ಶಾಕ್; ಅಕ್ರಮ ಅಸ್ತಿ ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು
ʻʻಶಿವಕುಮಾರ್ ಅವರು ರಾಜೀನಾಮೆ ಕೊಡದಿದ್ದರೆ ಸಿಎಂ ಅವರ ರಾಜೀನಾಮೆ ಪಡೆಯಲಿ. ಇಲ್ಲವಾದರೆ ನಾವು ರಾಜ್ಯಪಾಲರನ್ನೂ ಭೇಟಿ ಮಾಡುತ್ತೇವೆ. ಇವತ್ತಿನ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಕೊಡದಿದ್ದರೆ ನಾವು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಕೊಟ್ಟು ಒತ್ತಾಯಿಸಲಿದ್ದೇವೆʼʼ ಎಂದು ವಿವರಿಸಿದರು.