ಬೆಂಗಳೂರು: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ (Development of Minorities Colony) ಸಾವಿರ ಕೋಟಿ ರೂ. ಗಳ ಕ್ರಿಯಾ ಯೋಜನೆ (action plan) ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೂಚಿಸಿದರು.
ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ಕ್ರಿಯಾಯೋಜನೆ ತಯಾರಿಸುವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ, ಅನುದಾನ ಹಂಚಿಕೆ ಮಾಡುವಂತೆ ಸೂಚಿಸಿದರು.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದ್ದು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ. ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದ್ದು, ಇಲಾಖೆಗೆ ಲಭ್ಯ ಅನುದಾನದಲ್ಲಿಯೇ ಮರು ಹಂಚಿಕೆ ಮಾಡಿ ಹೆಚ್ಚುವರಿ 40 ಕೋಟಿ ರೂ. ಭರಿಸಲು ಸೂಚಿಸಿದರು.
ಅಲ್ಪಸಂಖ್ಯಾತರಿಗೆ ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಭಾರಿ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗಿದ್ದು, ಮುಂದಿನ ವರ್ಷ ಇದಕ್ಕೆ ಹೆಚ್ಚಿನ ಅನುದಾನ ಒದಗಿಸಲು ತೀರ್ಮಾನಿಸಲಾಯಿತು.
ಮಾರ್ಚ್ ಒಳಗೆ ಪೂರ್ಣಕ್ಕೆ ವಸತಿ ಇಲಾಖೆಗೆ ಸೂಚನೆ
ವಿವಿಧ ವಸತಿ ಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿಗೆ ಎದುರಾಗಿ ಈವರೆಗೆ 1.31 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಮುಕ್ತಾಯದ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು ಮಾರ್ಚ್ ಒಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಈ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಂಬಂಧಿಸಿದ ಎಂಜಿನಿಯರ್‌ಗಳ ಸಭೆ ನಡೆಸಿ, ಲಿಂಟೆಲ್ ಮತ್ತು ಛಾವಣಿ ಹಂತದಲ್ಲಿರುವ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಮನೆಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ತಿಳಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ಕೊಳೆಗೇರಿ ಅಭಿವೃದ್ಧಿ ಮಂಡಳಿಗೆ ಗುರಿ ನಿಗದಿ
ಕೊಳೆಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ 1.8 ಲಕ್ಷ ಮನೆಗಳು ಪ್ರಗತಿಯಲ್ಲಿದೆ. ಫಲಾನುಭವಿಗಳ ವಂತಿಗೆ ಸೇರಿದಂತೆ 5 ಲಕ್ಷ ರೂ. ಗಳನ್ನು ಭರಿಸಲು ಹಾಗೂ ಇದಕ್ಕಾಗಿ ಮತ್ತು ಬಡಾವಣೆಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲು ಸಚಿವ ಸಂಪುಟ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಮುಕ್ತಾಯದ ಹಂತದಲ್ಲಿರುವ 25 ಸಾವಿರ ಮನೆಗಳನ್ನು ಫೆಬ್ರವರಿ ಅಂತ್ಯದ ವೇಳೆ ಪೂರ್ಣಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ರಾಜೀವ್ ಗಾಂಧಿ ವಸತಿ ನಿಗಮದ ಮುಕ್ತಾಯದ ಹಂತದಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಅಲ್ಲದೆ, ನಿಗಮದ ವ್ಯಾಪ್ತಿಯಲ್ಲಿ 2133 ಕೋಟಿ ರೂ. ಲಭ್ಯವಿದ್ದು, ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಸೂಚಿಸಿದರು.
ಇದನ್ನೂ ಓದಿ: HD Kumaraswamy: ನಾಫೆಡ್ ಮೂಲಕ 1.5 ಲಕ್ಷ ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸಿ: ಮೋದಿಗೆ ಎಚ್‌ಡಿಕೆ ಮನವಿ
ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಹಜ್ ಸಚಿವ ಜಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ..ಸಿ. ಜಾಫರ್, ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.