Site icon Vistara News

CM Siddaramaiah: ಚಿತ್ರಕಲಾ ಪರಿಷತ್ತಿಗೆ 50 ಲಕ್ಷ ರೂ. ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

Chitrakala Parishad chitrasante

ಬೆಂಗಳೂರು: ಚಿತ್ರಕಲೆಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಾರಿ 50 ಲಕ್ಷ ರೂ.ಗಳ ಅನುದಾನವನ್ನು ಪರಿಷತ್ತಿಗೆ (Chitrakala Parishad) ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಘೋಷಿಸಿದರು.

ಕರ್ನಾಟಕ ಚಿತ್ರಕಲಾ ಪರಿಷತ್ ವತಿಯಿಂದ ಆಯೋಜಿಸಿರುವ 21ನೇ ಚಿತ್ರ ಸಂತೆಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಬಾರಿ 50 ಲಕ್ಷ ರೂಪಾಯಿ ಅನುದಾನವನ್ನು ಒದಗಿಸುವುದಾಗಿ ಹೇಳಿದರು.

ಆರ್ಟ್ ಗ್ಯಾಲರಿ ಸ್ಥಾಪಿಸಲು ನೆರವು

ಎಲ್ಲ ಜಿಲ್ಲೆಗಳಲ್ಲಿ ವಸ್ತು ಸಂಗ್ರಹಾಲಯ ಸ್ಥಾಪನೆ ಹಾಗೂ ಆರ್ಟ್ ಗ್ಯಾಲರಿ ಸ್ಥಾಪಿಸಲು ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಾಯ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Chitrakala Parishad chitrasante

2003ರಿಂದ ಇಂದಿನವರೆಗೆ ಚಿತ್ರಸಂತೆ ಆಚರಣೆಯಾಗುತ್ತಿದೆ. ಈ ವರ್ಷ 21ನೇ ಚಿತ್ರಸಂತೆ ನಡೆದಿದೆ. ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರತಿ ವರ್ಷ ಚಿತ್ರಸಂತೆಯನ್ನು ಉದ್ಘಾಟಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇದೇ ವೇಳೆ ಸ್ಮರಿಸಿದರು.

22 ರಾಜ್ಯಗಳಿಂದ 1600 ಕಲಾವಿದರು

ಪ್ರತಿ ವರ್ಷ 3 ರಿಂದ 4 ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. 22 ರಾಜ್ಯಗಳಿಂದ 1600 ಕಲಾವಿದರು ಪಾಲ್ಗೊಳ್ಳುವುದು ಹೆಮ್ಮೆಯ ವಿಷಯ. ಈ ಬಾರಿ ಚಿತ್ರಸಂತೆಯನ್ನು ಬಾಹ್ಯಾಕಾಶ ವಿಜ್ಞಾನಿಗಳಿಗೆ ಸಮರ್ಪಣೆಯಾಗಿರುವುದು ಅವರಿಗೆ ಸಲ್ಲಿಸಿರುವ ವಿಶೇಷವಾದ ಗೌರವ ಸೂಚಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಚಿತ್ರಸಂತೆಯಲ್ಲಿ ಭಾಗವಹಿಸಿದ ಎಲ್ಲ ಕಲಾವಿದರಿಗೂ ಕರ್ನಾಟಕದ ಪರವಾಗಿ ನಾನು ಸ್ವಾಗತವನ್ನು ಕೋರುತ್ತೇನೆ. ಕಲೆ ಎಂದಿಗೂ ಮುಂದುವರಿಯಬೇಕು. ಆ ನಿಟ್ಟಿನಲ್ಲಿ ನಮ್ಮ ಸರ್ಕಾರದಿಂದ ಸದಾ ಪ್ರೋತ್ಸಾಹ ಹಾಗೂ ಸಹಕಾರ ಇರಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇದೇ ವೇಳೆ ಹೇಳಿದರು.

ಸಚಿವರಾದ ಎಚ್.ಕೆ. ಪಾಟೀಲ್, ಸುಧಾಕರ್, ಶಾಸಕರಾದ ರಿಜ್ವಾನ್ ಅರ್ಷದ್, ಅಜಯ್ ಸಿಂಗ್, ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್ ಶಂಕರ್, ಉಪಾಧ್ಯಕ್ಷ ಪ್ರಭಾಕರ್ ಉಪಸ್ಥಿತರಿದ್ದರು.

ಫೆ.29 ರಿಂದ ಮಾ.7 ರವರೆಗೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಫೆಬ್ರವರಿ 29 ರಿಂದ ಮಾರ್ಚ್ 7 ರವರೆಗೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು (Bengaluru International Film Festival) ಆಯೋಜಿಸಲು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಜ.3) ನಡೆದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 15ನೇ ಆವೃತ್ತಿಯನ್ನು ಫೆಬ್ರವರಿ 29ರ ಸಂಜೆ ಉದ್ಘಾಟನೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಏರ್ಪಡಿಸಲಾಗಿದೆ ಎಂದು ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದರು.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ದೇಶವಿದೇಶಗಳಲ್ಲಿ ಮನ್ನಣೆ ಪಡೆದಿದ್ದು, ವಿದೇಶಿ ಚಿತ್ರಗಳನ್ನು ಪ್ರದರ್ಶಿಸಲಾಗುವುದಲ್ಲದೆ, ಕನ್ನಡ ಸೇರಿದಂತೆ ದೇಶದ ವಿವಿಧ ಭಾಷಾ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಮಾರ್ಚ್ 7 ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ರಾಜ್ಯಪಾಲರು ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ.

ಇದನ್ನೂ ಓದಿ: Ram Janmabhoomi: ಮನೆ ಮನೆಗೆ ಮಂತ್ರಾಕ್ಷತೆ ನೀಡಿದ ಬಿ.ವೈ. ವಿಜಯೇಂದ್ರ; ಜ. 22ರಂದು 5 ಪವಿತ್ರ ದೀಪ ಬೆಳಗಲು ಕರೆ

ಸಂಘಟನಾ ಸಮಿತಿ ಸಭೆಯ ಜತೆಗೆ ಕೋರ್ ಸಮಿತಿಯೂ ರಚನೆಯಾಗಿದ್ದು, ಸಮಾರಂಭ ಯಾವ ರೀತಿ ಏರ್ಪಡಿಸಬೇಕೆಂದು ತೀರ್ಮಾನವಾಗುತ್ತದೆ. ಕೋಮುವಾದದ, ಶಾಂತಿ, ಸಮಾನತೆ, ಲಿಂಗ ಸಮಾನತೆ, ಸೌಹಾರ್ದತೆ, ಮಾನವೀಯತೆಯ ಸಂದೇಶಗಳು ಸಮಾಜಕ್ಕೆ ತಲುಪಬೇಕು. ಬಹುತ್ವಕ್ಕೆ ಹೆಚ್ಚು ಒತ್ತು ಕೊಡುವ ರೀತಿಯಲ್ಲಿ ಚಲನಚಿತ್ರೋತ್ಸವ ನಡೆಯಲಿದೆ. ಹೆಚ್ಚು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಅಗತ್ಯವಿರುವ ಆರ್ಥಿಕ ನೆರವನ್ನು ಸರ್ಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದರು.

Exit mobile version