ಬೆಂಗಳೂರು: ಕೃಷ್ಣಾ ಮೇಲ್ದಂಡೆ (Upper Krishna Project) ಅಚ್ಚುಕಟ್ಟು ಪ್ರದೇಶದ ಮೆಣಸಿನಕಾಯಿ ಬೆಳೆ ಉಳಿಸಲು ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಿಂದ (Alamatti and Narayanapura reservoirs) 2.75 ಟಿಎಂಸಿ ನೀರನ್ನು ಹರಿಸಲು ತೀರ್ಮಾನಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ತಿಳಿಸಿದರು.
ಸದಾಶಿವನಗರ ನಿವಾಸದಲ್ಲಿ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್, ತಕ್ಷಣದಿಂದಲೇ ನೀರು ಬಿಡುಗಡೆ ಮಾಡಲಾಗುವುದು. 75 ಕಿ.ಮೀ. ನೀರು ಹರಿಯಬೇಕಿದೆ. ಎರಡು ಮೂರು ದಿನದಲ್ಲಿ ನೀರು ತಲುಪಬಹುದು ಎಂದು ಹೇಳಿದರು.
ಶನಿವಾರ ರಾತ್ರಿ ಕಲಬುರಗಿ, ರಾಯಚೂರು, ಬಾಗಲಕೋಟೆ, ಯಾದಗಿರಿ ಭಾಗದ ಜಿಲ್ಲಾ ಮಂತ್ರಿಗಳು, ಎಲ್ಲ ಪಕ್ಷದ ಶಾಸಕರು, ರೈತ ಮುಖಂಡರ ಜತೆ ಸಭೆ ಮಾಡಲಾಯಿತು. ಈ ಸಭೆಯಲ್ಲಿ ಜನಪ್ರತಿನಿಧಿಗಳು ವಾಸ್ತವ ಪರಿಸ್ಥಿತಿ ವಿವರಿಸಿ, ನೀರು ಬಿಡಲು ಒತ್ತಾಯಿಸಿದ್ದರು. ಹೀಗಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು.
ರೈತರ ರಕ್ಷಣೆ ಉದ್ದೇಶದಿಂದ ಬೆಳೆಗಳಿಗೆ ನೀರು
ರಾಜ್ಯದ ಇತಿಹಾಸದಲ್ಲೇ ಈ ಬಾರಿ ಅತ್ಯಂತ ದೊಡ್ಡ ಪ್ರಮಾಣದ ಬರಗಾಲ ಎದುರಾಗಿದೆ. ಅತಿ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಬರ ಪರಿಸ್ಥಿತಿಯಲ್ಲಿ ಬೆಳೆ ಹಾಕಬೇಡಿ ಎಂದು ಮನವಿ ಮಾಡಿದ್ದರೂ ಕೆಲವು ರೈತರು ಭತ್ತದ ಬದಲು ಮೆಣಸಿನಕಾಯಿ ಬೆಳೆ ಹಾಕಿಕೊಂಡಿದ್ದಾರೆ. ಈ ಬೆಳೆ ನಾಶವಾದರೆ 2 ಸಾವಿರ ಕೋಟಿ ರೂಪಾಯಿಯಷ್ಟು ನಷ್ಟವಾಗುವ ಸಾಧ್ಯತೆ ಇದೆ. ರೈತರ ರಕ್ಷಣೆ ಉದ್ದೇಶದಿಂದ ಬೆಳೆಗಳಿಗೆ ಅಂತಿಮ ಬಾರಿಗೆ 2.75 ಟಿಎಂಸಿ ನೀರು ಬಿಡಲು ಶನಿವಾರ ರಾತ್ರಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪ್ರತಿಭಟನಾ ನಿರತ ರೈತರು, ಮನವಿ ಮಾಡಿರುವ ಶಾಸಕರುಗಳೇ ಮೆಣಸಿನಕಾಯಿ ಬೆಳೆಗಳಿಗೆ ಮಾತ್ರ ಈ ನೀರನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಈ ಜವಾಬ್ದಾರಿಯನ್ನು ಆ ಭಾಗದ ರೈತರಿಗೆ ವಹಿಸಿ ನೀರು ಬಿಡುತ್ತಿದ್ದೇವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಈ ಹಿಂದೆ ಮಂಡ್ಯ ರೈತರ ರಕ್ಷಣೆ ಮಾಡಿದ್ದೆವು. ಈ ಮಧ್ಯೆ ಭದ್ರಾ ನೀರಿನ ವಿಚಾರದಲ್ಲಿ ಸಮಸ್ಯೆ ಎದುರಿಸಿದಾಗಲೂ ನಾವು ಸಮಸ್ಯೆ ನಿವಾರಣೆ ಮಾಡಿದ್ದೆವು. ಈಗ ಕೃಷ್ಣಾ ಮೇಲ್ದಂಡೆ ವ್ಯಾಪ್ತಿ ರೈತರ ರಕ್ಷಣೆ ಮಾಡಲಾಗುತ್ತಿದೆ. ಇದಾದ ನಂತರ ಕೃಷಿ ಉದ್ದೇಶಕ್ಕೆ ನೀರು ಬಿಡುವುದಿಲ್ಲ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರು ಹಾಗೂ ಜನಪ್ರತಿನಿಧಿಗಳು ಸರ್ಕಾರದ ಜೊತೆ ಸಹಕಾರ ನೀಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
47 ಟಿಎಂಸಿ ನೀರು ಲಭ್ಯ ಇದೆ
ಹಾಲಿ ನೀರಿನ ಸಂಗ್ರಹ ಎಷ್ಟು ಇದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, “ಆಲಮಟ್ಟಿ ಮತ್ತು ನಾರಾಯಣಪುರ ಅಣೆಕಟ್ಟು ಸೇರಿ 47 ಟಿಎಂಸಿ ನೀರು ಲಭ್ಯ ಇದೆ. ಕುಡಿಯುವ ನೀರಿಗೆ 37 ಟಿಎಂಸಿ ನೀರು, ಇತರೆ ಉದ್ದೇಶಕ್ಕೆ 3 ಟಿಎಂಸಿ ನೀರು ಬೇಕು. ನೀರು ಹರಿಸುವ ವೇಳೆ 1.5 ಟಿಎಂಸಿ ನೀರು ನಷ್ಟವಾಗುತ್ತದೆ. ಈ ಭಾಗದವರ ಒತ್ತಡಕ್ಕೆ ಈಗ 2.75 ಟಿಎಂಸಿ ನೀರು ಬಿಡುಗಡೆ ಮಾಡಲು ತೀರ್ಮಾನಿಸಿದ್ದೇವೆ. ಇನ್ನೂ ಆರು ತಿಂಗಳು ನೀರು ನಿರ್ವಹಣೆ ಮಾಡಬೇಕಿದೆ. ಹೀಗಾಗಿ ಈ ಬಾರಿ ಕೊನೆಯದಾಗಿ ನಾವು ರೈತರ ಜಮೀನಿಗೆ ನೀರು ಹರಿಸುತ್ತಿದ್ದೇವೆ ಎಂದು ಉತ್ತರಿಸಿದರು.
ಎಲ್ಲ ಪಕ್ಷದ ಶಾಸಕರು ಹಾಗೂ ನಮ್ಮ ಸಚಿವರು ನನ್ನ ಮೇಲೆ ಹೆಚ್ಚು ಒತ್ತಡ ಹಾಕಿದ್ದಾರೆ. ಹೀಗಾಗಿ ಅವರೆಲ್ಲರ ಜತೆಗೂಡಿ ಅಧಿಕಾರಿಗಳ ಜತೆ ಚರ್ಚೆ ಮಾಡಿ ಈ ತೀರ್ಮಾನ ಕೈಗೊಂಡಿದ್ದೇವೆ” ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಜನಪ್ರತಿನಿಧಿಗಳು, ರೈತರೇ ಜವಾಬ್ದಾರರು!
ಈಗ ಬಿಡುಗಡೆ ಮಾಡಿರುವ ನೀರಿನ ಬಳಕೆ ಬಗ್ಗೆ ಮೇಲ್ವಿಚಾರಣೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಇದರ ಮೇಲ್ವಿಚಾರಣೆಗೆ ಪೊಲೀಸರನ್ನು ಬಳಸಿಕೊಳ್ಳಲು ಆಗುವುದಿಲ್ಲ. ಹೀಗಾಗಿ ಈ ಜವಾಬ್ದಾರಿಯನ್ನು ಜನಪ್ರತಿನಿಧಿ ಹಾಗೂ ರೈತ ಸಂಘಟನೆಗಳಿಗೇ ನೀಡುತ್ತೇನೆ. ನೀವೇ ಪೊಲೀಸರಾಗಿ ಈ ನೀರಿನ ಸದ್ಬಳಕೆ ಮಾಡಿಕೊಳ್ಳಬೇಕು. ನಮ್ಮ ಅಧಿಕಾರಿಗಳಿಗೂ ನಾವು ಸೂಚನೆ ನೀಡಿದ್ದೇವೆ. ಆದರೆ, ಅಧಿಕಾರಿಗಳು ರೈತರ ಜತೆ ಜಗಳ ಮಾಡಲು ಆಗುವುದಿಲ್ಲ. ಆ ರೀತಿ ಆದರೆ ಮಾಧ್ಯಮಗಳು ಅದನ್ನೇ ದೊಡ್ಡ ವಿಷಯ ಮಾಡುತ್ತವೆ. ಮಾಧ್ಯಮಗಳು ಕೂಡ ರೈತರ ಜವಾಬ್ದಾರಿ ಬಗ್ಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
31 ಸಂಸದರ ತಂಡ ರಾಜ್ಯಕ್ಕೆ ಭೇಟಿ
ಈ ರೀತಿಯ ಸಮಸ್ಯೆಗಳು ಎದುರಾದಾಗ ಅನುಕೂಲ ಆಗುವ ನದಿ ಜೋಡಣೆ ವಿಚಾರ ಪ್ರಸ್ತಾಪದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, “ಇದು ಕೇಂದ್ರ ಸರ್ಕಾರದ ಯೋಜನೆ. ಇದೊಂದು ದೊಡ್ಡ ಯೋಜನೆಯಾಗಿದ್ದು ಈಗ ವಿಷಯಾಂತರ ಮಾಡುವುದು ಬೇಡ. ಈ ಬಗ್ಗೆ ನಾಳೆ, ನಾಡಿದ್ದು ಕೇಂದ್ರದ 31 ಸಂಸದರ ತಂಡ ಕಾವೇರಿ ವೀಕ್ಷಣೆಗೆ ಬರುತ್ತಿದೆ. ನಮ್ಮ ನೀರಾವರಿ ಸಮಸ್ಯೆ ಬಗ್ಗೆ ಚರ್ಚೆ ಮಾಡಲಾಗುವುದು” ಎಂದು ತಿಳಿಸಿದರು.
ಇದನ್ನೂ ಓದಿ: CM Siddaramaiah: ಚಿತ್ರಕಲಾ ಪರಿಷತ್ತಿಗೆ 50 ಲಕ್ಷ ರೂ. ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಫೆಬ್ರವರಿಯಲ್ಲಿ ಬಜೆಟ್ ಮಂಡನೆಯಾಗಲಿದ್ದು, ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡಲಾಗುತ್ತಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, “ಬಜೆಟ್ ವಿಚಾರವನ್ನು ಮುಖ್ಯಮಂತ್ರಿಗಳ ಬಳಿ ಚರ್ಚೆ ಮಾಡಿ. ನಾವು ನಮ್ಮ ಪ್ರಸ್ತಾವನೆ ನೀಡುತ್ತೇವೆ ಎಂದು ತಿಳಿಸಿದರು.