ಕುಮಟಾ (ಕಾರವಾರ): ಲೋಕಸಭಾ ಚುನಾವಣೆ (Parliament Elections 2024) ಸನ್ನಿಹಿತವಾಗುತ್ತಿದ್ದಂತೆಯೇ ಮತ್ತೆ ಪ್ರಚೋದನಾತ್ಮಕ ಹೇಳಿಕೆಗಳನ್ನು (Provocative Statements) ನೀಡಲು ಆರಂಭಿಸಿರುವ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ (MP Anantkumar Hegade) ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ಅವರನ್ನು ಏಕವಚನದಲ್ಲಿ ನಿಂದಿಸಿದ್ದರು. ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕುಮಟಾ ಪೊಲೀಸರು ಸುಮೊಟೊ ಕೇಸ್ ದಾಖಲು ಮಾಡಿಕೊಂಡಿದ್ದಾರೆ.
ಕುಮಟಾ ಠಾಣೆಯಲ್ಲಿ ಸ್ವಯಂ ದೂರು ದಾಖಲಿಸಿಕೊಂಡ ಪೊಲೀಸರು, ದ್ವೇಷ ಭಾಷಣ ಹಾಗೂ ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಯತ್ನಿಸಿದ್ದಾಗಿ ಎಫ್‌ಐಆರ್ (FIR) ಉಲ್ಲೇಖಿಸಿದ್ದಾರೆ. ಸೆಕ್ಷನ್ 505 ಹಾಗೂ 153ಎ ಅಡಿಯಲ್ಲಿ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ.
ಸಂಸದ ಅನಂತಕುಮಾರ ಹೆಗಡೆ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾದ ಬಳಿಕ ಈಗ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ. ಸಂಸದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿಂದ ಆಗ್ರಹಗಳು ಕೇಳಿ ಬಂದಿದ್ದವು.
ಸಿಎಂ ವಿರುದ್ಧ ಏಕವಚನದಲ್ಲಿ ದಾಳಿ ನಡೆಸಿದ್ದ ಅನಂತ್‌ಕುಮಾರ್ ಹೆಗಡೆ
ಕುಮಟಾದಲ್ಲಿ ಶನಿವಾರ ನಡೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಅನಂತಕುಮಾರ್ ಹೆಗಡೆ, ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಾಶವಾಗಲಿದೆ ಎಂದು ಎಚ್ಚರಿಸಿದ್ದರು. ಇದನ್ನು ಬೇಕಾದರೆ ಬೆದರಿಕೆ ಅಂತ ಬೇಕಾದರೂ ತಿಳಿಯಿರಿ. ಇದು ಹಿಂದೂ ಸಮಾಜದ ತೀರ್ಮಾನವೇ ವಿನಃ ಅನಂತಕುಮಾರ್ ಹೆಗಡೆ ತೀರ್ಮಾನ ಅಲ್ಲ. ಶಿರಸಿಯ ಸಿಪಿ ಬಜಾರ್ನಲ್ಲಿಯೂ ಮಸೀದಿ ಇದೆ. ಅದು ಈ ಹಿಂದೆ ವಿಜಯ ವಿಠ್ಠಲ ದೇವಸ್ಥಾನ ಆಗಿತ್ತು. ಶ್ರೀರಂಗಪಟ್ಟಣದಲ್ಲಿರುವ ದೊಡ್ಡ ಮಸೀದಿ ಮಾರುತಿ ದೇವಸ್ಥಾನವಾಗಿತ್ತು. ಇವತ್ತೂ ಅಲ್ಲಿಗೆ ಹೋದರೆ ಮಾರುತಿ ದೇವಸ್ಥಾನ ಕಾಣುತ್ತದೆ ಎಂದು ಹೇಳಿದ್ದರು.
ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ
ಈ ಕಾರ್ಯಕ್ರಮದಲ್ಲೇ ಸಿದ್ದರಾಮಯ್ಯ ವಿರುದ್ಧವೂ ಸಂಸದ ಅನಂತ್ ಕುಮಾರ್ ಹೆಗಡೆ ತೀವ್ರವಾಗಿ ವಾಗ್ದಾಳಿ ನಡೆಸಿದ್ದರು. ಹಿಂದು ಸಮಾಜವನ್ನು ಶತಮಾನಗಳಿಂದಲೂ ಒಡೆಯುತ್ತಲೇ ಬರುತ್ತಿದ್ದಾರೆ ಎಂದು ಹೇಳಿದ ಅವರು, ಕಾಂಗ್ರೆಸ್ ನಮ್ಮ ವಿರೋಧಿ ಅಲ್ಲ. ಅದು ಹಿಂದು ವಿರೋಧಿ, ಸನಾತನ ಧರ್ಮ ವಿರೋಧಿ. ಕಾಂಗ್ರೆಸ್ ನಮ್ಮ ವಿರೋಧಿ ಅಲ್ಲ, ಸಿಎಂ ಸಿದ್ದರಾಮಯ್ಯ ನಮ್ಮ ವಿರೋಧಿ. ಅಲ್ಪಸಂಖ್ಯಾತರ ಮತಕ್ಕಾಗಿ ಹರಾಜಾಗಿ ಹೊದವರು ನಮ್ಮ ವಿರೋಧಿಗಳು ಎಂದು ಹೇಳಿದ್ದರು.
ಇದನ್ನೂ ಓದಿ: Lok Sabha Election 2024: ಮೈಸೂರು ಲೋಕಸಭೆಗೆ ಯದುವೀರ್ ಒಡೆಯರ್ ಎಂಟ್ರಿ? ಟಿಕೆಟ್ ಕೊಡಲು ಬಿಜೆಪಿ, ಕಾಂಗ್ರೆಸ್ ಪೈಪೋಟಿ!
ಸಿದ್ದರಾಮಯ್ಯ ಅವರು ಮೊದಲು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಯ ಆಹ್ವಾನ ಬಂದಿಲ್ಲ ಎಂದು ಹೇಳಿದರು. ಆಹ್ವಾನ ಬಂದ ಮೇಲೆ ನಾನು ಹೋಗುವುದಿಲ್ಲ ಎಂದು ಹೇಳೀದರು. ʻʻನೀನು ಬಾ ಅಥವಾ ಬಿಡು. ಆದರೆ, ರಾಮ ಜನ್ಮಭೂಮಿಯಲ್ಲಿ ನಡೆಯೋದು ಏನೂ ನಿಲ್ಲೋದಿಲ್ಲ ಮಗನೇʼʼ ಎಂದು ಅನಂತ ಕುಮಾರ್ ಹೆಗಡೆ ಏಕವಚನದಲ್ಲಿ ನಿಂದಿಸಿದ್ದರು. ಈ ಹಿಂದೆ ಅಯೋಧ್ಯೆಗೆ ಹೋಗುವುದಿಲ್ಲ ಎಂದಿದ್ದ ಸಿದ್ದರಾಮಯ್ಯ, ಬಳಿಕ, ಜನವರಿ 22ರ ಬಳಿಕ ಯಾವಾಗಲಾದರೂ ಹೋಗುತ್ತೇನೆ ಎಂದು ಹೇಳಿದ್ದಾರೆ. ಇದು ಹಿಂದೂ ಸಮಾಜದ ತಾಕತ್ತು ಎಂದು ಅನಂತ ಕುಮಾರ್ ಹೆಗಡೆ ಹೇಳಿದ್ದರು.