ದಾವಣಗೆರೆ: ಕಾಂಗ್ರೆಸ್‌ನಲ್ಲಿ 135 ಶಾಸಕರಿದ್ದಾರೆ, ಅವರಿಗೆ ನಮ್ಮ ಅವಶ್ಯಕತೆ ಇಲ್ಲ. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರುವುದಿಲ್ಲ. ನನ್ನನ್ನು ಅವರೂ ಕರೆದಿಲ್ಲ, ನಾನು ಹೋಗುತ್ತೇನೆ ಎಂದು ಕೂಡ ಹೇಳಿಲ್ಲ ಎಂದು ಪಕ್ಷಾಂತರದ (Operation Hasta) ಬಗ್ಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸ್ಪಷ್ಟನೆ ನೀಡಿದ್ದಾರೆ.
ಹೊನ್ನಾಳಿಯಲ್ಲಿ ಶನಿವಾರ ಮಾತನಾಡಿದ ಅವರು, ಹೊನ್ನಾಳಿ ನ್ಯಾಮತಿ ಅವಳಿ ತಾಲೂಕನ್ನು ಬರಪಟ್ಟಿಗೆ ಸೇರಿಸುವಂತೆ ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿ ಮಾಡಿದ್ದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಮಾಜಿ ಶಾಸಕನಾಗಿ ನನ್ನ ಕರ್ತವ್ಯವನ್ನು ಮಾಡಿದ್ದೇನೆ. ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವುದಿಲ್ಲ ಎಂದು ತಿಳಿಸಿದ್ದಾರೆ.
ನಾನೊಬ್ಬ ಮಾಜಿ ಸಚಿವ, ಮಾಜಿ ಶಾಸಕ. ಹೀಗಾಗಿ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಸಿಎಂ, ಡಿಸಿಎಂ ಅವರನ್ನು ಭೇಟಿಯಾಗಿದ್ದಾನೆ. ನಮ್ಮ ಅವಶ್ಯಕತೆ ಅವರಿಗಿಲ್ಲ, ರಾಜಕೀಯ ಮೀರಿ ವಿಶ್ವಾಸ ಇರುವುದರಿಂದ ಅವರನ್ನು ಭೇಟಿಯಾಗಿದ್ದೇನೆ. ರಾಜಕಾರಣವೇ ಬೇರೆ, ಸ್ನೇಹವೇ ಬೇರೆ ಎಂದ ಅವರು, ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿಯ ಪ್ರಬಲ ಆಕ್ಷಾಂಕ್ಷಿ ಎಂದು ನಾನು ಈಗಾಗಲೇ ಹೇಳಿದ್ದೇನೆ. ನನಗೆ ಲೋಕಸಭೆಗೆ ಟಿಕೆಟ್ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಆಯ್ಕೆಯಾಗದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಲ್ಲಿ ಏನು ನಡೆಯುತ್ತಿದೆ ಎಂದು ಜನರು ಕೇಳುತ್ತಿದ್ದಾರೆ. ಪಕ್ಷದ ಅಧ್ಯಕ್ಷರನ್ನು ಯಾಕೆ ಆಯ್ಕೆ ಮಾಡುತ್ತಿಲ್ಲ, ಯಡಿಯೂರಪ್ಪರನ್ನು ಕಡೆಗಣಿಸಿದ್ದು ಪಕ್ಷಕ್ಕೆ ಶಾಪ, ಎಲ್ಲೋ ಕುಳಿತುಕೊಂಡು ರಾಜ್ಯ ಬಿಜೆಪಿಯನ್ನು ನಿಯಂತ್ರಣ ಮಾಡಲು ಸಾಧ್ಯವೇ ಎಂದು ಜನರು ಕೇಳುತ್ತಿದ್ದಾರೆ ಎಂದು ಪಕ್ಷದ ಹೈಕಮಾಂಡ್ ಬಗ್ಗೆ ಅಸಮಾಧಾನ ಹೊರಹಾಕಿದರು.
ಇದನ್ನೂ ಓದಿ | Modi in Bangalore: ಶಿಷ್ಟಾಚಾರ ಉಲ್ಲಂಘನೆಗೆ ಬಿಜೆಪಿ ಕಿಡಿ; ಪ್ರಧಾನಿ ಕಾರ್ಯಾಲಯವೇ ಬರಬೇಡಿ ಎಂದಿತ್ತು ಎಂದ ಡಿಕೆಶಿ
ಸಿಎಂ, ಡಿಸಿಎಂ ಭೇಟಿಯಾಗಿದ್ದ ರೇಣುಕಾಚಾರ್ಯ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಪರೇಷನ್ ಹಸ್ತದ ಮೂಲಕ ಪ್ರಭಾವಿ ನಾಯಕರಿಗೆ ಕಾಂಗ್ರೆಸ್ (Karnataka Congress) ಗಾಳ ಹಾಕುತ್ತಿದೆ. ಈ ನಡುವೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ (Former Honnali MLA MP Renukacharya) ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DCM DK Shivakumar) ಅವರನ್ನು ಶುಕ್ರವಾರ ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಇದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿತ್ತು. ಅಲ್ಲದೆ, ದಾವಣಗೆರೆಯಿಂದ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಯಾಗುವ (Davanagere Congress Lok Sabha candidate) ನಿಟ್ಟಿನಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ. ಹೀಗಾಗಿ ಪಕ್ಷಾಂತರ ಬಗ್ಗೆ ಮಾಜಿ ಸಚಿವ ರೇಣುಕಾಚಾರ್ಯ ಸ್ಪಷ್ಟನೆ ನೀಡಿದ್ದಾರೆ.