Site icon Vistara News

ಇದು ಮುಂದುವರಿಯಬಾರದು, ದಯವಿಟ್ಟು ಮುಂದುವರಿಯಬಾರದು: ದೇವನೂರು ಮಹಾದೇವ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ಮಾಡುವ ಸರ್ಕಾರದ ವಿರುದ್ಧ ಸಾಹಿತಿಗಳ ಸಮರ ಇನ್ನೂ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಪಠ್ಯದಲ್ಲಿ ಅಳವಡಿಸಿರುವ ತಮ್ಮ ಬರಹವನ್ನು ಬೋಧಿಸಲು ನೀಡಿದ್ದ ಒಪ್ಪಿಗೆಯನ್ನು ಹಿಂತೆಗೆದುಕೊಳ್ಳುತ್ತೇನೆ ಎಂದು ಹಿರಿಯ ಸಾಹಿತಿ ದೇವನೂರು ಮಹಾದೇವ ಮೇ 26ರಂದೇ ಪತ್ರ ಬರೆದಿದ್ದರು. ಇದೀಗ ಮತ್ತೊಮ್ಮೆ ಪತ್ರ ಬರೆದು ಶಿಕ್ಷಣ ಸಚಿವರಿಗೆ ನೆನಪಿಸಿದ್ದಾರೆ.

ಹತ್ತನೇ ತರಗತಿಯ ಪುಸ್ತಕದಲ್ಲಿರುವ ನನ್ನ ಪಠ್ಯವನ್ನು ಕೈಬಿಡಬೇಕು ಎಂದು ವಿನಂತಿಸಿ ಈ ಹಿಂದೆ ಪತ್ರ ಬರೆದು ಕೊರಿಯರ್‌ ಮೂಲಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ,ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಕಳಿಸಿಕೊಟ್ಟಿದ್ದೆ. ಹೀಗಿದ್ದೂ ನನ್ನ ಮನವಿಯನ್ನು ತಾವು ಪರಿಗಣಿಸದೆ, ಪರಿಷ್ಕೃತ ಮುದ್ರಣವೇ ಜಾರಿಗೆ ಬರುತ್ತದೆ ಎಂದಿದ್ದೀರಿ. ಕ್ಷಮಿಸಿ, ನಿಮ್ಮ ಈ ಧೋರಣೆ ನನಗೆ ದಬ್ಬಾಳಿಕೆ ಅನ್ನಿಸಿಬಿಟ್ಟಿತು ಎಂದು ಸಚಿವ ಬಿ.ಸಿ. ನಾಗೇಶ್‌ ಅವರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ | “ಅಂಥವರ ಪಠ್ಯವನ್ನೇ ತೆಗೆದ ಮೇಲೆ ನನ್ನದು ಏತಕ್ಕೆ?”: ತಮ್ಮ ಬರಹದ ಪಾಠ ಮಾಡದಂತೆ ದೇವನೂರು ಆಗ್ರಹ

ಚತುವರ್ಣ ವಿರೋಧಿ ಬಸವಣ್ಣನವರ ಪಾಠವನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಕತ್ತು ಹಿಚುಕಿರುವುದು, ಕುವೆಂಪು, ಅಂಬೇಡ್ಕರ್‌ ಅವರನ್ನು ಗೇಲಿ ಮಾಡುವ ಮನಸ್ಥಿತಿಯ ವ್ಯಕ್ತಿಯನ್ನೇ ಪಠ್ಯಪುಸ್ತಕ ಪರಿಷ್ಕರಣೆಗೆ ಅಧ್ಯಕ್ಷನನ್ನಾಗಿಸಲಾಗಿದೆ. ಹಾಗೂ ಒಂದು ಒಕ್ಕೂಟ ಸರ್ಕಾರದಲ್ಲಿ ಆ ಒಕ್ಕೂಟದ ಅಂಗವಾಗಿರುವ ಕರ್ನಾಟಕ ರಾಜ್ಯವು ನನಗೂ ಒಂದು ಧ್ವಜ ಬೇಕು ಎಂದು ದನಿ ಎತ್ತಿದ ಸಂದರ್ಭದಲ್ಲಿ ಆ ಪರಿಕಲ್ಪನೆಯನ್ನು ತನ್ನ ಲಂಗೋಟಿಗೆ ಹೋಲಿಕೆ ಮಾಡಿದ ಹೀನ ಅಭಿರುಚಿಯ ವ್ಯಕ್ತಿಯನ್ನು ಮಕ್ಕಳ ಪಠ್ಯ ಪರಿಷ್ಕರಣೆ ಮಾಡಲು ಅಧ್ಯಕ್ಷನನ್ನಾಗಿಸಲಾಗಿದೆ. ಅಧ್ಯಕ್ಷನನ್ನಾಗಿಸುವುದಷ್ಟೆ ಅಲ್ಲದೆ ಆತನನ್ನು ಸಮರ್ಥಿಸುವುದು, ಭಿನ್ನಾಭಿಪ್ರಾಯಗಳನ್ನು ಟೂಲ್‌ಕಿಟ್‌ ಎಂದು ರಾಜಕೀಯಗೊಳಿಸಿ ಪರಾರಿಯಾಗಲು ನೋಡುವುದು ಇವೆಲ್ಲ ಹಾಗೂ ನಾಡಿನ ಗಣ್ಯರು, ಮಠಾಧಿಪತಿಗಳು, ಲೇಖಕರು, ಪ್ರಜ್ಞಾವಂತರು ತಮ್ಮ ನೋವನ್ನು ವ್ಯಕ್ತಪಡಿಸಿ ಹಿಂದಿನ ಪಠ್ಯಪುಸ್ತಕವನ್ನೇ ಮುಂದುವರಿಸಿ ಎಂದು ಕೇಳಿಕೊಂಡರೂ ತಾವು ಅದನ್ನು ಕಾಲುಕಸ ಮಾಡಿ ಲೆಕ್ಕಿಸದಿರುವುದನ್ನು ನೋಡಿದಾಗ ಇದು ನಾಡಿಗೆ ಕೇಡಿನ ಲಕ್ಷಣಗಳು ಎಂದೆನ್ನಿಸುತ್ತದೆ.

ಕೊನೆಯದಾಗಿ ತಮ್ಮಲ್ಲಿ ಒಂದು ವಿನಂತಿ- ಇದು ಮುಂದುವರಿಯಬಾರದು, ದಯವಿಟ್ಟು ಮುಂದುವರಿಯಬಾರದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರಿಗೆ ದೇವನೂರು ಮಹಾದೇವ ಪತ್ರ ಬರೆದಿದ್ದಾರೆ.

ಇದನ್ನೂ ಓದಿ | ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಶೀಘ್ರ ತೀರ್ಮಾನ : CM ಬಸವರಾಜ ಬೊಮ್ಮಾಯಿ

Exit mobile version