Site icon Vistara News

Zameer Ahmed Khan : ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಜಮೀರ್‌; ಕನ್ನಡ ಹೋರಾಟಗಾರರ ಆಕ್ರೋಶ

zameer ahmed khan takes oath in english as minister

#image_title

ಬೆಂಗಳೂರು: ಸಚಿವ ಜಮೀರ್‌ ಅಹ್ಮದ್‌ ಖಾನ್‌ (Zameer Ahmed Khan) ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದಕ್ಕೆ ಕನ್ನಡ ಪರ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡುತ್ತಿರುವ ಕನ್ನಡ ಹೋರಾಟಗಾರರು, ಜಮೀರ್‌ ಅಹ್ಮದ್‌ ಖಾನ್‌ ಅವರಿಗೆ ಕನ್ನಡದಲ್ಲಿಯೇ ಮಾತನಾಡಲು ಬರುತ್ತಿದ್ದರೂ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದೇಕೆ ಎಂದು ಪ್ರಶ್ನಿಸುತ್ತಿದ್ದಾರೆ.

ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಖಾನ್‌ (Zameer Ahmed Khan) ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಎಲ್ಲ ಸಚಿವರೂ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಇವರೊಬ್ಬರು ಮಾತ್ರ ಇಂಗ್ಲಿಷ್‌ನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದು, ಗಮನ ಸೆಳೆದಿತ್ತು.

ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ, ಜಮೀರ್‌ ಅಹ್ಮದ್‌ ಖಾನ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಜಮೀರ್ ಅಹ್ಮದ್ ಖಾನ್ ಅವರು ಇನ್ನೂ ಕನ್ನಡ ಕಲಿಯದಿರುವುದು ನಾಚಿಕೆಗೇಡು ಎಂದು ಟೀಕಿಸಿದ್ದಾರೆ. ಎಲ್ಲ ಸಚಿವರೂ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಜಮೀರ್ ಅಹಮದ್ ಅವರು ಇಂಗ್ಲಿಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಕಾರಣಕ್ಕೆ ಬಂದು ಇಷ್ಟು ವರ್ಷಗಳಾದರೂ ಕನ್ನಡ ಕಲಿಯದಿರುವುದು ಎಷ್ಟು ಸರಿ? ಎಂದು ಅವರು ಪ್ರಶ್ನಿಸಿದ್ದಾರೆ.

ಇಂಗ್ಲಿಷ್‌ನಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿರುವ ಜಮೀರ್‌ ಅಹ್ಮದ್‌ ಖಾನ್‌

ಬಿಗ್‌ಬಾಸ್‌ ಖ್ಯಾತಿಯ ಕನ್ನಡ ಹೋರಾಟಗಾರ ರೂಪೇಶ್‌ ರಾಜಣ್ಣ ಕೂಡ ಜಮೀರ್‌ ಅಹ್ಮದ್‌ ಖಾನ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ʻʻ ಕರ್ನಾಟಕಕ್ಕೆ ಬರುವ ರಾಷ್ಟ್ರೀಯ ನಾಯಕರೇ ಕನ್ನಡದಲ್ಲಿ ಮಾತನಾಡಲು ಪ್ರಯತ್ನ ಮಾಡುತ್ತಿರುವಾಗ ಈ ನಾಡಿನಲ್ಲೇ ಹುಟ್ಟಿರೋ ಜಮೀರ್‌ ಅಹ್ಮದ್‌ ಖಾನ್‌ ಅವರೇ ಇಷ್ಟು ವರ್ಷದಿಂದ ಇಲ್ಲೇ ಇದ್ದು ಕರ್ನಾಟಕದಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡೋಲ್ಲ ಅಂದ್ರೆ ನಿಮಗೇನು ಹೇಳೋದುʼʼ ಎಂದು ಪ್ರಶ್ನಿಸಿದ್ದಾರೆ.

ಅಷ್ಟೆಲ್ಲಾ ಕನ್ನಡ ಮಾತಾಡೋ ಜಮೀರ್ ಅಹ್ಮದ್ ರಿಗೆ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಲು ಏನು ಬೇನೆ? ಕನ್ನಡ ಓದಲು ಬರುವುದಿಲ್ಲವೇ? ಎಂದು ರಾಮಚಂದ್ರ ಎಮ್‌ ಎನ್ನುವವರು ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : Karnataka CM: … ಎಂಬ ಹೆಸರಿನವನಾದ ನಾನು…: ರಾಜ್ಯದ ನೂತನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ಸಚಿವರ ಪ್ರಮಾಣ

Exit mobile version