Site icon Vistara News

ಲೈಂಗಿಕ ದೌರ್ಜನ್ಯ ಆರೋಪ; ಡಬ್ಲ್ಯುಎಫ್‍ಐ ಅಧ್ಯಕ್ಷ ಬ್ರಿಜ್‌ ಭೂಷಣ್‌ಗೆ ಕ್ಲೀನ್‌ಚಿಟ್‌; ವರದಿ

Brij Bhushan alleges that wrestlers' protest is politically motivated

ನವದೆಹಲಿ: ಲೈಂಗಿಕ ಕಿರುಕುಳ ಆರೋಪ(Sexual harassment allegations) ಎದುರಿಸುತ್ತಿರುವ ಭಾರತದ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‍ಐ) ಅಧ್ಯಕ್ಷ ಬ್ರಿಜ್​ ಭೂಷಣ್ ಶರಣ್ ಸಿಂಗ್(Brij Bhushan Sharan Singh)​ ಅವರಿಗೆ ಕ್ಲೀನ್‌ಚಿಟ್ ಸಿಗಲಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಬ್ರಿಜ್​ ಭೂಷಣ್​ ಅವರನ್ನು ಆರೋಪಮುಕ್ತ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕಾಮನ್‌ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ವಿನೇಶ್ ಪೋಗಟ್ ಅವರು ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡುತ್ತಿದ್ದಾರೆ ಹಾಗೂ ಭಾರತೀಯ ಕುಸ್ತಿ ಫೆಡರೇಶನ್ ಅಧಿಕಾರಿಗಳು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅಧ್ಯಕ್ಷರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದರು. ಇದೇ ವಿಚಾರವಾಗಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಒಲಿಂಪಿಕ್ ಪದಕ ವಿಜೇತರಾದ ಭಜರಂಗ್ ಪೂನಿಯಾ, ಸಾಕ್ಷಿ ಮಲಿಕ್, ರವಿ ದಹಿಯಾ ಸೇರಿದಂತೆ ಪ್ರಮುಖ ಕುಸ್ತಿಪಟುಗಳು ಮೂರು ದಿನಗಳ ಕಾಲ ಬೃಹತ್​ ಪ್ರತಿಭಟನೆ ನಡೆಸಿದ್ದರು.

ಕುಸ್ತಿಪಟುಗಳ ಆರೋಪದ ಬಗ್ಗೆ ತನಿಖೆ ನಡೆಸಲು ಕೇಂದ್ರ ಕ್ರೀಡಾ ಸಚಿವಾಲಯವು ಮಹಿಳಾ ಬಾಕ್ಸರ್‌ ಎಂ.ಸಿ.ಮೇರಿ ಕೋಮ್‌ ನೇತೃತ್ವದ ಐವರು ಸದಸ್ಯರ ಸಮಿತಿಯನ್ನು ಮಾಡಿತ್ತು. ಇದಾದ ಬಳಿಕ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಹಿಂದೆಗೆದುಕೊಂಡಿದ್ದರು. ಆದರೆ ಕೆಲ ದಿನಗಳ ಬಳಿಕ ಈ ತನಿಖಾ ಸಮಿತಿಯ ಮೇಲೆ ನಮಗೆ ಯಾವುದೇ ನಂಬಿಕೆ ಇಲ್ಲ ಎಂದು ಮತ್ತೆ ಕುಸ್ತಿಪಟುಗಳು ಪಟ್ಟುಹಿಡಿದಿದ್ದರು. ಬಳಿಕ ಕುಸ್ತಿಪಟುಗಳ ಒತ್ತಾಯದ ಮೇರೆಗೆ ಬಬಿತಾ ಪೋಗಾಟ್‌ ಅವರನ್ನು ಸಮಿತಿಗೆ ಸೇರ್ಪಡೆಗೊಳಿಸಿ 2 ವಾರ ಹೆಚ್ಚುವರಿ ಸಮಯ ನೀಡಿತ್ತು. ಇದೀಗ ಸಮಿತಿಯು ಏಪ್ರಿಲ್‌ ಮೊದಲ ವಾರದಲ್ಲಿ ಸಚಿವಾಲಯಕ್ಕೆ ವರದಿ ಸಲ್ಲಿಸಿದ್ದು, ಅದರಲ್ಲಿ ಭೂಷಣ್‌ರಿಂದ ಯಾವುದೇ ರೀತಿಯ ಕಿರುಕುಳ ಆಗಿರುವ ಬಗ್ಗೆ ಉಲ್ಲೇಖವಿಲ್ಲ ಎಂದು ಮೂಲಗಳು ಮಾಹಿತಿ ನೀಡಿರುವುದಾಗಿ ಸುದ್ದಿಸಂಸ್ಥೆಯೊಂದು ತಿಳಿಸಿದೆ.

ಇದನ್ನೂ ಓದಿ Wrestling: ಪ್ರಮುಖ ಟೂರ್ನಿಯಿಂದ ಹಿಂದೆ ಸರಿಯುತ್ತಿರುವ ಕುಸ್ತಿ ಪಟುಗಳ ವರ್ತನೆಗೆ ಕ್ರೀಡಾ ಸಚಿವಾಲಯ ಬೇಸರ

ಕುಸ್ತಿಪಟುಗಳು ಮಾಡಿದ ಆರೋಪಗಳಿಗೆ ಯಾವುದೇ ಸಾಕ್ಷ್ಯಾಧಾರ ನೀಡಿಲ್ಲ. ಜತೆಗೆ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿರುವುದು ಸಹ ಕಂಡು ಬಂದಿದೆ. ಇದೇ ಕಾರಣಕ್ಕೆ ಬ್ರಿಜ್​ ಭೂಷಣ್ ಶರಣ್ ಸಿಂಗ್​ ಅವರಿಗೆ ಕ್ಲೀನ್‌ಚಿಟ್ ಸಿಗಲಿದೆ ಎಂದು ತಿಳಿದು ಬಂದಿದೆ. ಸದ್ಯದಲ್ಲೇ ಈ ವರದಿಯನ್ನು ಸಚಿವಾಲಯ ಸಮಿತಿಯು ಬಹಿರಂಗಪಡಿಸಲಿದೆ ಎಂದು ವರದಿಯಾಗಿದೆ.

Exit mobile version