ಮುಂಬಯಿ: ಮುಂದಿನ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ(ICC Champions Trophy) ಭಾರತ(champions trophy ind vs pak) ತಂಡ ಪಾಲ್ಗೊಳ್ಳಲಿದೆಯಾ? ಇಲ್ಲವಾ? ಎಂಬ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಇದುವರೆಗೂ ಈ ವಿಚಾರದಲ್ಲಿ ಯಾವುದೇ ಅಧಿಕೃತ ಮಾಹಿತಿ ಲಭಿಸಿಲ್ಲ. ಇದೇ ವಿಚಾರವಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ(jay shah) ಮೊದಲ ಬಾರಿಗೆ ಮೌನ ಮುರಿದಿದ್ದಾರೆ.
ಸಂದರ್ಶನವೊಂದರಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಯ್ ಶಾ, ಭಾರತ ತಂಡ ಪಾಕಿಸ್ತಾನಕ್ಕೆ(ind vs pak) ತೆರಳುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಟೂರ್ನಿ ಆರಂಭಕ್ಕೆ ಕೆಲವು ದಿನ ಮೊದಲು ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ಪಾಕಿಸ್ತಾನ ಮಾತ್ರ ಭಾರತ ತಂಡದ ಆಗಮನದ ನಿರೀಕ್ಷೆಯಲ್ಲಿದೆ. ಇದೇ ಕಾರಣಕ್ಕೆ ತಾತ್ಕಾಲಿಕ ವೇಳಾಪಟ್ಟಿಯನ್ನು ಕೂಡ ಪ್ರಕಟಿಸಿದೆ. ಈ ವೇಳಾಪಟ್ಟಿ ಪ್ರಕಾರ ಭಾರತ ಮತ್ತು ಪಾಕ್ ನಡುವಣ ಪಂದ್ಯ ಮಾರ್ಚ್ 1 ರಂದು ಲಾಹೋರ್ನಲ್ಲಿ ನಡೆಯಬೇಕಿದೆ.
ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ತೆರಳದಿದ್ದರೆ ಆ ದೇಶದ ಕ್ರಿಕೆಟ್ ಮಂಡಳಿಗೆ ಭಾರಿ ನಷ್ಟವಾಗುವ ಸಾಧ್ಯತೆ ಇದೆ. ಈಗಾಗಲೇ ಪಾಕಿಸ್ತಾನ ನಷ್ಟದ ಹಾದಿಯಲ್ಲಿದೆ. ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾಗೆ ಇರುವ ಕ್ರೇಜ್ ಮತ್ತು ಬೇಡಿಕೆ ಬೇರೆ ಯಾವ ದೇಶಕ್ಕೂ ಇಲ್ಲ. ಹೀಗಾಗಿ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಹೋದಲ್ಲಿ ಅದರಿಂದ ಆರ್ಥಿಕವಾಗಿಯೂ ಲಾಭವಾಗಲಿದೆ ಮತ್ತು ಪಾಕ್ ಮೇಲೆ ಇರುವ ಕಳಂಕವೂ ದೂರವಾಗಲಿದೆ. ಅಲ್ಲದೆ, ಉಭಯ ದೇಶಗಳ ನಡುವಿನ ಸಂಬಂಧವೂ ಕೂಡ ಮತ್ತೆ ಚಿಗುರಲಿದೆ ಎಂಬ ನಿರೀಕ್ಷೆಯಲ್ಲಿದೆ.
ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ಪಿಸಿಬಿಯ ಮನವಿಗೆ ಐಸಿಸಿ ಸ್ಪಂದಿಸಿದ್ದು, ಹೈಬ್ರಿಡ್ ಮಾದರಿಯ ಪಂದ್ಯಗಳಿಗೆ ಐಸಿಸಿ ಅನುಮತಿಸಿಲ್ಲ ಎಂದು ವರದಿಯಾಗಿದೆ. ಈ ವಿಚಾವಾಗಿ ಈಗಾಗಲೇ ಬಿಸಿಸಿಐ ಜತೆ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಒಟ್ಟಾರೆ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಭಾರತ ಚಾಂಪಿಯನ್ಸ್ ಟ್ರೋಫಿ ಆಡುವ ಬಗ್ಗೆ ನಿರ್ಧಾರವಾಗಲಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಮಾಹಿತಿ ಹೊರಬೀಳಬೇಕಿದೆ.
ಇದನ್ನೂ ಓದಿ Champions Trophy 2025 : ಚಾಂಪಿಯನ್ಸ್ ಟ್ರೋಫಿಗಾಗಿ 544 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಐಸಿಸಿ
ಒಂದೊಮ್ಮೆ ಟೂರ್ನಿ ಪಾಕ್ನಲ್ಲಿಯೇ ನಡೆದು, ಭಾರತ ತಂಡ ಪಾಲ್ಗೊಳ್ಳಲಿದ್ದರೆ ಆಗ ಯಾವ ತಂಡಕ್ಕೆ ಅವಕಾಶ ಸಿಗಲಿದೆ ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳಲ್ಲಿ ಮೂಡಿದೆ. ಇದಕ್ಕೆ ಉತ್ತರ ಇಲ್ಲಿದೆ. ಐಸಿಸಿ ನಿಯಮಗಳ ಪ್ರಕಾರ 2023ರ ಸಾಲಿನ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಅಂಕಪಟ್ಟಿಯ ಅಗ್ರ 7ರಲ್ಲಿ ಸ್ಥಾನ ಪಡೆಯುವ ತಂಡಗಳು ನೇರವಾಗಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಅರ್ಹತೆ ಪಡೆದುಕೊಂಡಿದೆ. ಟೂರ್ನಿಯ ಆತಿಥೇಯ ದೇಶಕ್ಕೆ ನೇರವಾಗಿ ಅರ್ಹತೆ ಸಿಗುತ್ತದೆ. ಒಟ್ಟು 8 ತಂಡಗಳು ಅರ್ಹತೆ ಪಡೆದಿದೆ.
ಭಾರತ ತಂಡ ಟೂರ್ನಿಯಿಂದ ಹಿಂದೆ ಸರಿದರೆ, 9ನೇ ಸ್ಥಾನಿಯಾಗಿರುವ ಶ್ರೀಲಂಕಾಗೆ ಅವಕಾಶ ಸಿಗಲಿದೆ. ಯಾವುದೇ ತಂಡವು ಐಸಿಸಿ ಟೂರ್ನಿಯಿಂದ ಹಿಂದೆ ಸರಿದರೆ ಅಂಕಪಟ್ಟಿಯಲ್ಲಿ ನಂತರದ ಸ್ಥಾನ ಪಡೆದಿರುವ ತಂಡ ತಂಡಕ್ಕೆ ಅರ್ಹತೆ ನೀಡಲಾಗುತ್ತದೆ. ಪ್ರಸ್ತುತ ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ಇಂಗ್ಲೆಂಡ್, ಅಫಘಾನಿಸ್ತಾನ, ದಕ್ಷಿಣ ಆಫ್ರಿಕಾ, ನ್ಯೂಜಿಲ್ಯಾಂಡ್ ಮತ್ತು ಬಾಂಗ್ಲಾದೇಶ ಅರ್ಹತೆ ಪಡೆದ ತಂಡಗಳಾಗಿವೆ.