ನವದೆಹಲಿ: ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ(ODI World Cup 2023 Loss) ಒಂದೇ ಒಂದು ಪಂದ್ಯ ಸೋಲದೆ ಫೈನಲ್ ಪ್ರವೇಶಿಸಿದ್ದ ಟೀಮ್ ಇಂಡಿಯಾ ಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತು ಕಪ್ ಗೆಲ್ಲುವಲ್ಲಿ ವಿಫಲವಾಗಿತ್ತು. ಈ ಸೋಲಿನ ಆಘಾತ ಈಗಲೂ ಕೂಡ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಕಾಡುತ್ತಲೇ ಇದೆ. ಅಂದಿನ ಭಾರತದ ಸೋಲಿಗೆ ಕಾರಣ ಏನೆಂಬುದನ್ನು ಮಾಜಿ ಡ್ಯಾಶಿಂಗ್ ಬ್ಯಾಟರ್ ವೀರೇಂದ್ರ ಸೆಹವಾಗ್(Virender Sehwag) ವಿವರಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಸೆಹವಾಗ್, ಆಸ್ಟ್ರೇಲಿಯಾ ವಿರುದ್ಧ ಬ್ಯಾಟಿಂಗ್ ಮಾಡುವಾಗ 11ನೇ ಓವರ್ ಮತ್ತು 40ನೇ ಓವರ್ ನಡುವೆ ನಿರ್ಭೀತವಾಗಿ ಬ್ಯಾಟ್ ಬೀಸದೇ ಇದದ್ದು ಭಾರತದ ಸೋಲಿಗೆ ಪ್ರಮುಖ ಕಾರಣ ಎಂದು ಸೆಹವಾಗ್ ಹೇಳಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ಕೆ.ಎಲ್. ರಾಹುಲ್ ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದೇ ತಂಡದ ಹಿನ್ನಡೆಗೆ ಕಾರಣ ಎಂದು ಸೆಹವಾಗ್ ಪರೋಕ್ಷವಾಗಿ ಟೀಕಿಸಿದ್ದಾರೆ. 2007 ಮತ್ತು 2011ರ ನಡುವೆ ನಾವು ಪ್ರತಿ ಪಂದ್ಯವನ್ನು ನಾಕೌಟ್ ಪಂದ್ಯವಾಗಿ ಆಡಿದೆವು. ಹೀಗಾಗಿಯೇ 2011ರಲ್ಲಿ ಏಕದಿನ ವಿಶ್ವಕಪ್ ಗೆದ್ದೆವು ಎಂದು ಹೇಳಿದರು. ಸೆಹವಾಗ್ ಹೇಳಿಕೆಯ ವಿಡಿಯೊ ಇದೀಗ ವೈರಲ್ ಆಗಿದೆ.
ಫೈನಲ್ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ಪಡೆಯಿತು. ಬ್ಯಾಟಿಂಗ್ ವೈಫಲ್ಯ ಎದುರಿಸಿದ ಭಾರತ ತಂಡ ನಿಗದಿತ 50 ಓವರ್ಗಳಲ್ಲಿ 240 ರನ್ಗಳಿಗೆ ಆಲ್ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 43 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 241 ರನ್ ಬಾರಿಸಿ ಗೆಲುವು ಸಾಧಿಸಿತು. ಟ್ರಾವಿಸ್ ಹೆಡ್ 137 ರನ್ ಬಾರಿಸಿ ಭಾರತದ ಗೆಲುವನ್ನು ಕಸಿದರು. ಆಸೀಸ್ ಪಾಲಿಗೆ ಗೆಲುವಿನ ರೂವಾರಿ ಎನಿಸಿಕೊಂಡರು.
ಇದನ್ನೂ ಓದಿ World Cup 2023 : ದ್ರಾವಿಡ್, ರೋಹಿತ್ ಮೇಲೆ ವಿಶ್ವ ಕಪ್ ಫೈನಲ್ ಪಂದ್ಯದ ಪಿಚ್ ತಿರುಚಿದ ಆರೋಪ!
ಟ್ರಾವಿಸ್ ಹೆಡ್ ಅವರು ಫೈನಲ್ ಪಂದ್ಯದಲ್ಲಿ ಭಾರತೀಯ ಬೌಲರ್ಗಳ ದಾಳಿಯನ್ನು ಸಮರ್ಥವಾಗಿ ಎದುರಿಸಿ ನಿಂತು 15 ಮನಮೋಹಕ ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 120 ಎಸೆತಗಳಲ್ಲಿ 137 ರನ್ ಬಾರಿಸಿ ಆಸೀಸ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
2ನೇ ಬಾರಿಯೂ ವಿಫಲ
ತವರು ನೆಲದಲ್ಲಿ ನಡೆದ ವಿಶ್ವ ಕಪ್ ಆವೃತ್ತಿಯಲ್ಲಿ ಟ್ರೋಫಿ ಗೆದ್ದೇ ಗೆಲ್ಲುತ್ತೇವೆ ಎಂಬ ಟೀಮ್ ಇಂಡಿಯಾದ ಹುಮ್ಮಸ್ಸು ಬತ್ತಿ ಹೋಯಿತು. ನರೇಂದ್ರ ಮೋದಿ ಸ್ಟೇಡಿಯಮ್ನಲ್ಲಿ ನಡೆದ ಏಕ ದಿನ ವಿಶ್ವ ಕಪ್ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ತಲೆ ಬಾಗಿದ ಟೀಮ್ ಇಂಡಿಯಾದ ಪ್ರಯತ್ನಗಳು ಭಗ್ನವಾಗಿದೆ. 2003ರ ವಿಶ್ವ ಕಪ್ನ ಫೈನಲ್ ಫಲಿತಾಂಶವು ಮತ್ತೊಂದು ಬಾರಿ ಪುನರಾವರ್ತನೆಯಾಗಿದೆ. ಅಂದು ಭಾರತ ತಂಡ ಆಸ್ಟ್ರೇಲಿಯಾ ತಂಡದ ವಿರುದ್ಧವೇ 125 ರನ್ಗಳಿಂದ ಸೋಲು ಕಂಡಿತ್ತು.