ಗುವಾಹಟಿ: ಇಲ್ಲಿ ನಡೆದ ಐಪಿಎಲ್ನ(IPL 2023) 11ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೋಲ್ಡನ್ ಡಕ್ ಸಂಕಟಕ್ಕೆ ಸಿಲುಕಿದ ಮನೀಷ್ ಪಾಂಡೆ ಐಪಿಎಲ್ನಲ್ಲಿ ನೂತನ ದಾಖಲೆಯೊಂದನ್ನು ಬರೆದಿದ್ದಾರೆ. ಐಪಿಎಲ್ನ ಎಲ್ಲ ಆವೃತ್ತಿಗಳಲ್ಲಿ ಆಡಿದ ಏಳನೇ ಭಾರತೀಯ ಆಟಗಾರ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ(Barsapara Cricket Stadium) ನಡೆದ ಶನಿವಾರದ ಐಪಿಎಲ್ನ ಡಬಲ್ ಹೆಡರ್ನ ಮೊದಲ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ರಾಜಸ್ಥಾನ್ ರಾಯಲ್ಸ್ ಯಶಸ್ವಿ ಜೈಸ್ವಾಲ್(60) ಮತ್ತು ಜಾಸ್ ಬಟ್ಲರ್(79) ಅವರ ಸೊಗಸಾದ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿತು. ಜವಾಬಿತ್ತ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಪಾಲಿನ ಆಟದಲ್ಲಿ 9 ವಿಕೆಟ್ ಕಳೆದುಕೊಂಡು 142 ರನ್ ಗಳಿಸಲಷ್ಟೇ ಶಕ್ತವಾಯಿತು.
ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿಗೆ ಖಾತೆ ತೆರೆಯುವ ಮುನ್ನವೇ ಕಿವೀಸ್ ವೇಗಿ ಟ್ರೆಂಟ್ ಬೌಲ್ಟ್ ಅವಳಿ ಆಘಾತವಿಕ್ಕಿದರು. ಕನ್ನಡಿಗ ಮನೀಷ್ ಪಾಂಡೆ(0), ಪೃಥ್ವಿ ಶಾ(0) ವಿಕೆಟ್ ಕಿತ್ತು ಆರಂಭಿಕ ಶಾಕ್ ನೀಡಿದರು. ಪಂದ್ಯದಲ್ಲಿ ನಿರೀಕ್ಷಿತ ಮಟ್ಟದ ಬ್ಯಾಟಿಂಗ್ ನಡೆಸದಿದ್ದರೂ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮನೀಷ್ ಪಾಂಡೆ ನೂತನ ಮೈಲುಗಲ್ಲೊಂದನ್ನು ಸ್ಥಾಪಿಸಿದರು. ವಿಶ್ವದ ಕ್ಯಾಶ್ ರಿಚ್ ಕ್ರಿಕೆಟ್ ಟೂರ್ನಿಯಾದ ಐಪಿಎಲ್ನ ಪ್ರತಿಯೊಂದು ಆವೃತ್ತಿಯಲ್ಲೂ ಆಡಿದ 7ನೇ ಆಟಗಾರನಾಗಿ ಮೂಡಿಬಂದರು. ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ದಿನೇಶ್ ಕಾರ್ತಿಕ್ ಹಾಗೂ ವೃದ್ಧಿಮಾನ್ ಸಹಾ ಈ ಮೈಲುಗಲ್ಲು ಸ್ಥಾಪಿಸಿದ ಇತರ ಆಟಗಾರರಾಗಿದ್ದಾರೆ.
ಇದನ್ನೂ ಓದಿ IPL 2023: ಚೆನ್ನೈ ತಂಡದ ಘಾತಕ ಬೌಲಿಂಗ್ ದಾಳಿಗೆ ಕುಸಿದ ಮುಂಬೈ ಇಂಡಿಯನ್ಸ್
2009ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಮನೀಷ್ ಪಾಂಡೆ, ಚೊಚ್ಚಲ ಶತಕ ಸಿಡಿಸಿದ ಮೊದಲ ಆನ್‌ಕ್ಯಾಪ್ಡ್ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದರು. ಇದುವರೆಗೂ 160 ಐಪಿಎಲ್ ಪಂದ್ಯಗಳನ್ನಾಡಿದ ಅವರು ಒಂದು ಶತಕ ಹಾಗೂ 21 ಅರ್ಧಶತಕ ಬಾರಿಸಿದ್ದಾರೆ. ಒಟ್ಟು 3, 648 ರನ್ ಗಳಿಸಿದ್ದಾರೆ. ಇದರಲ್ಲಿ ಅಜೇಯ 114 ರನ್ ಗರಿಷ್ಠ ಮೊತ್ತವಾಗಿದೆ. ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್ಜೈಂಟ್ಸ್ ಪರ ಆಡಿದ್ದ ಅವರನ್ನು ಈ ಬಾರಿಯ ಆವೃತ್ತಿಯಲ್ಲಿ ತಂಡದಿಂದ ಕೈ ಬಿಡಾಲಾಗಿತ್ತು. ಹೀಗಾಗಿ ಅವರು ಡೆಲ್ಲಿ ಪಾಳಯ ಸೇರಿದ್ದರು. ಆಡಿದ ಮೊದಲ ಪಂದ್ಯದಲ್ಲಿ ಶೂನ್ಯ ಸುತ್ತಿದ ಅವರು ಮುಂದಿನ ಪಂದ್ಯದಲ್ಲಿ ಆಡುವ ಅವಕಾಶ ಪಡೆಯಲಿದ್ದಾರಾ ಎಂದು ಕಾದು ನೋಡಬೇಕಿದೆ.