ಮುಂಬಯಿ: ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಕೇರಳದ ಎಸ್. ಶ್ರೀಶಾಂತ್(S. Sreesanth) ಬರೋಬ್ಬರಿ 10 ವರ್ಷಗಳ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ಗೆ(IPL 2023) ಮರಳಲು ಸಜ್ಜಾಗಿದ್ದಾರೆ. ಆದರೆ ಅವರು ಐಪಿಎಲ್ನಲ್ಲಿ ಈ ಬಾರಿ ಆಟಗಾರನಾಗಿ ಕಾಣಿಸಿಕೊಳ್ಳುತ್ತಿಲ್ಲ.
ಬಹುನಿರೀಕ್ಷಿತ ಐಪಿಎಲ್ 2023ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 31ಕ್ಕೆ ನಡೆಯುವ ಉದ್ಘಾಟನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಉಭಯ ತಂಡಗಳ ಈ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಇದೀಗ ಈ ಟೂರ್ನಿಯ ಪ್ರಸಾರಕರಾಗಿರುವ ಸ್ಟಾರ್ ಸ್ಪೋರ್ಟ್ಸ್ ಪ್ಯಾನೆಲ್ ಡಿಸ್ಕಶನ್ ಸದಸ್ಯರ ಹೆಸರುಗಳನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಎಸ್. ಶ್ರೀಶಾಂತ್ ಹೆಸರು ಕೂಡ ಕಾಣಿಸಿಕೊಂಡಿರುವುದು ವಿಶೇಷ. ಈ ಬಾರಿಯ ಐಪಿಎಲ್ನಲ್ಲಿ ಶ್ರೀಶಾಂತ್ ಸ್ಟಾರ್ ಸ್ಪೋರ್ಟ್ಸ್ ಮಲಯಾಳಂ ಚಾನೆಲ್ನಲ್ಲಿ ವೀಕ್ಷಕ ವಿಶ್ಲೇಷಣೆಗಾರರಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ 10 ವರ್ಷಗಳ ಬಳಿಕ ಐಪಿಎಲ್ನಲ್ಲಿ ತಮ್ಮ ದ್ವಿತೀಯ ಇನಿಂಗ್ಸ್ ಆರಂಭಿಸಲು ಎದುರು ನೋಡುತ್ತಿದ್ದಾರೆ.
ಇದನ್ನೂ ಓದಿ IPL 2023 : ಚೆನ್ನೈ ಸೂಪರ್ ಕಿಂಗ್ಸ್ಗೆ ಆನೆ ಬಲ, ದಕ್ಷಿಣ ಆಫ್ರಿಕಾದ ದೈತ್ಯ ಬೌಲರ್ ಸೇರ್ಪಡೆ
ಐಪಿಎಲ್ನಲ್ಲಿ ಪಂಜಾಬ್ ಕಿಂಗ್ಸ್, ಕೊಚ್ಚಿ ಟಸ್ಕರ್ಸ್ ಕೇರಳ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ಪರ ಒಟ್ಟು 44 ಪಂದ್ಯಗಳನ್ನಾಡಿದ್ದ ಶ್ರೀಶಾಂತ್ 40 ವಿಕೆಟ್ ಕಬಳಿಸಿ ಮಿಂಚಿದ್ದರು. 2013 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುವಾಗ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದಿ ಕಾರಣ ಅವರನ್ನು ಐಪಿಎಲ್ನಿಂದ ಬ್ಯಾನ್ ಮಾಡಲಾಗಿತ್ತು. ಕಳೆದ ವರ್ಷ ಈ ಆರೋಪದಿಂದ ದೋಷಮುಕ್ತರಾಗಿದ್ದ ಶ್ರೀಶಾಂತ್, ಐಪಿಎಲ್ ಹರಾಜಿನಲ್ಲಿ ತಮ್ಮ ಹೆಸರು ನೊಂದಾಯಿಸಿದ್ದರು. ಆದರೆ ಅವರನ್ನು ಯಾವುದೇ ತಂಡ ಕೊಂಡುಕೊಳ್ಳಲು ಆಸಕ್ತಿ ತೋರಿರಲಿಲ್ಲ. ಇದೀಗ ಇದೀಗ ಸ್ಟಾರ್ ಸ್ಪೋರ್ಟ್ಸ್ ಚಾನೆಲ್ ಮೂಲಕ ಮತ್ತೆ ಐಪಿಎಲ್ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.