ವೆಲ್ಲಿಂಗ್ಟನ್: ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಮಾರ್ಟಿನ್ ಗಪ್ಟಿಲ್(Martin Guptill) ಅವರನ್ನು ಕೇಂದ್ರ ಒಪ್ಪಂದದಿಂದ ಬಿಡುಗಡೆ ಮಾಡಲಾಗಿದೆ ಎಂದು ನ್ಯೂಜಿಲ್ಯಾಂಡ್ ಕ್ರಿಕೆಟ್ ಬುಧವಾರ ಖಚಿತಪಡಿಸಿದೆ. ಗಪ್ಟಿಲ್ ಅವರ ವಿನಂತಿಯ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು ತಕ್ಷಣವೇ ಜಾರಿಗೆ ಬರುವಂತೆ ಅವರನ್ನು ಕೇಂದ್ರ ಒಪ್ಪಂದದಿಂದ ಕೈ ಬಿಡಲಾಗಿದೆ ಎಂದು ತಿಳಿಸಿದೆ.
ಟಿ20 ಕ್ರಿಕೆಟ್ ಲೀಗ್ ಟೂರ್ನಿಯಲ್ಲಿ ಹೆಚ್ಚು ಗಮನ ಹರಿಸುವ ಸಲುವಾಗಿ ಗಪ್ಟಿಲ್ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದು ನ್ಯೂಜಿಲ್ಯಾಂಡ್ ಆಟಗಾರನೊಬ್ಬ ಈ ವರ್ಷ ಬಿಡುಗಡೆಗೆ ವಿನಂತಿಸಿದ ಮೂರನೇ ನಿದರ್ಶನವಾಗಿದೆ. ಇದಕ್ಕೂ ಮೊದಲು ಟ್ರೆಂಟ್ ಬೌಲ್ಟ್ ಮತ್ತು ಕಾಲಿನ್ ಡಿ ಗ್ರ್ಯಾಂಡ್ ಹೋಮ್ ಕೂಡಾ ಇದೇ ರೀತಿ ಮಾಡಿದ್ದರು.
ನ್ಯೂಜಿಲ್ಯಾಂಡ್ ಕೇಂದ್ರೀಯ ಗುತ್ತಿಗೆಯಿಂದ ಈಗಾಗಲೇ ಹೊರಬಿದ್ದಿರುವ ಟ್ರೆಂಟ್ ಬೌಲ್ಟ್, ಬಿಗ್‌ಬ್ಯಾಶ್ ಲೀಗ್ ಟೂರ್ನಿಯಲ್ಲಿ ಮೆಲ್ಬರ್ನ್ ಸ್ಟಾರ್ಸ್ ತಂಡದ ಜತೆ ಆಡಲು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಇನ್ನೊಂದೆಡೆ ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಅಡಿಲೇಡ್ ಸ್ಟ್ರೈಕರ್ಸ್ ತಂಡದ ಜತೆ ಆಡಲು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಇದೀಗ ಗಪ್ಟಿಲ್ ಯಾವ ತಂಡದ ಪರ ಒಪ್ಪಂದ ಮಾಡಲಿದ್ದಾರೆ ಎನ್ನುವುದು ಮುಂದಿನ ದಿನಗಳಲ್ಲಿ ನಿರ್ಧಾರವಾಗಲಿದೆ.
ಮಾರ್ಟಿನ್ ಗಪ್ಟಿಲ್ ಇತ್ತೀಚೆಗಷ್ಟೇ ಆಸ್ಟ್ರೇಲಿಯಾದಲ್ಲಿ ನಡೆದ ಐಸಿಸಿ ಟಿ20 ವಿಶ್ವ ಕಪ್ ಟೂರ್ನಿಯಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದರೂ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದರು.
ಇದನ್ನೂ ಓದಿ | IND VS NZ | ಭಾರತ ಮತ್ತು ನ್ಯೂಜಿಲ್ಯಾಂಡ್ ವಿರುದ್ಧದ ಅಂತಿಮ ಟಿ20 ಪಂದ್ಯ ಟೈನಲ್ಲಿ ಅಂತ್ಯ; ಸರಣಿ ಗೆದ್ದ ಭಾರತ