ಬೆಂಗಳೂರು: ಪ್ರತಿಷ್ಠಿತ ಪ್ಯಾರಿಸ್ ಒಲಿಂಪಿಕ್ಸ್(Paris Olympics) ಕ್ರೀಡಾಕೂಟ ಜುಲೈ 26ರಿಂದ ಆರಂಭಗೊಳ್ಳಲಿದೆ. ಈಗಾಗಲೇ ಕೂಟದ ಸಂಘಟಕರು ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ. ವಿಶೇಷವೆಂದರೆ ಭಯೋತ್ಪಾದನಾ ದಾಳಿ ತಡೆ ಭದ್ರತಾ ಕಾರ್ಯಕ್ಕಾಗಿ ಭಾರತೀಯ ಸೇನೆಯಲ್ಲಿ ತರಬೇತುಗೊಂಡ ಶ್ವಾನದಳವನ್ನು ನಿಯೋಜಿಸಲಾಗಿದೆ. ಈ ಶ್ವಾನಪಡೆಯ ಸಾಮರ್ಥ್ಯ ಪರೀಕ್ಷೆ ನಡೆದದ್ದು ಬೆಂಗಳೂರಿನಲ್ಲಿ.
ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಮತ್ತು ವಿಶೇಷ ಕಮಾಂಡೊ ಪಡೆಯ ಭಾರತೀಯ ಕೆ9 (ಕೆನೈನ್) ಹತ್ತು ಶ್ವಾನಗಳ ಪಡೆಯನ್ನು ಪ್ಯಾರಿಸ್‌ಗೆ ಕಳುಹಿಸಲಾಗಿದೆ. ಬೆಂಗಳೂರು ಸಮೀಪದ ತರಳುವಿನಲ್ಲಿರುವ ಸಿಆರ್‌ಪಿಎಫ್ ಶ್ವಾನ ತಳಿ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಈ ಶ್ವಾನಪಡೆಯ ಸಾಮರ್ಥ್ಯ ಪರೀಕ್ಷೆ ನಡೆಸಿದ ಬಳಿಕ ಪ್ಯಾರಿಸ್‌ಗೆ ಕಳುಹಿಸಲಾಗಿದೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿರುವ ಭದ್ರತಾ ಪಡೆಗಳೊಂದಿಗೆ ಈ ಶ್ವಾನಪಡೆಯು ಕಾರ್ಯನಿರ್ವಹಿಸಲಿದೆ.
10 ವಾರ ತರಬೇತಿ
ಈ ಶ್ವಾನಗಳಿಗೆ ಹತ್ತು ವಾರಗಳ ಕಾಲ ವಿಶೇಷ ತರಬೇತಿ ನೀಡಲಾಗಿದೆ. ಸಿಎಪಿಎಫ್, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ), ಇಂಡೋ ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಪಡೆಗಳಿಂದ ಈ ಶ್ವಾನ ಮತ್ತು ನಿರ್ವಹಾಕರನ್ನು ಆಯ್ಕೆ ಮಾಡಲಾಗಿದೆ. ಈ ಶ್ವಾನಪಡೆಯಲ್ಲಿರುವ ಬೆಲ್ಜಿಯನ್ ಮೆಲಿನೊಸ್ ತಳಿಯು ಪ್ರಮುಖವಾಗಿದೆ. ಬಾಂಬ್ ಪತ್ತೆ ಕಾರ್ಯಾಚರಣೆಯಲ್ಲಿ ಅತ್ಯಂತ ಚುರುಕಾದ ತಳಿ ಇದಾಗಿದೆ.
ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪದಕ ಗೆಲ್ಲುವುದು ಭಾರತದ ಪ್ರಮುಖ ಗುರಿಯಾಗಿದೆ. ಟೋಕಿಯೊದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ. 29 ಸದಸ್ಯರನ್ನು ಒಳಗೊಂಡ ಟ್ರ್ಯಾಕ್ ಆ್ಯಂಡ್ ಫೀಲ್ಡ್ ತಂಡಕ್ಕೆ ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ವಿಜೇತ, ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ನಾಯಕನಾಗಿದ್ದಾರೆ.
ಈ ಬಾರಿಯ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ವಾತಾವರಣವನ್ನು ಕಲ್ಪಿಸುವ ಉದ್ದೇಶದಿಂದ ರಿಲಯನ್ಸ್ ಸಂಸ್ಥೆ “ಇಂಡಿಯಾ ಹೌಸ್”(India House) ಎಂಬ ವಿಶೇಷ ವ್ಯವಸ್ಥೆಯೊಂದನ್ನು ಮಾಡಿದೆ. ಭಾರತೀಯ ಕ್ರೀಡಾಪಟುಗಳು ಇದರಲ್ಲೇ ಉಳಿದುಕೊಳ್ಳಲಿದ್ದಾರೆ.
ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತದ ಅಥ್ಲೀಟ್‌ಗಳು ಉತ್ತಮ ಪ್ರದರ್ಶನ ನೀಡುವ ಮೂಲಕ ದೇಶಕ್ಕೆ ಹೆಮ್ಮೆ ತರುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ವಿಶ್ವಾಸ ವ್ಯಕ್ತಪಡಿಸಿದ್ದಾರೆ.