ಪ್ಯಾರಿಸ್: ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ(Neeraj Chopra) ಅವರು ಪ್ಯಾರಿಸ್ ಒಲಿಂಪಿಕ್ಸ್(Paris Olympics) ಟೂರ್ನಿಯಲ್ಲಿ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ. ಇಂದು(ಮಂಗಳವಾರ) ನಡೆದ ಜಾವೆಲಿನ್ ಅರ್ಹತಾ ಸುತ್ತಿನ ಪಂದ್ಯದಲ್ಲಿ 89.34 ಮೀ. ದೂರ ಜಾವೆಲಿನ್ ಎಸೆದು ಫೈನಲ್ ಪ್ರವೇಶಿಸಿದ್ದಾರೆ. ಆದರೆ ಭಾರತದ ಮತ್ತೋರ್ವ ಜಾವೆಲಿನ್ ಎಸೆತಗಾರ ಕಿಶೋರ್ ಜೇನಾ 9ನೇ ಸ್ಥಾನಿಯಾಗಿ ನಿರಾಸೆ ಮೂಡಿಸಿದರು.
‘ಬಿ’ ವಿಭಾಗದ ಅರ್ಹತಾ ಸುತ್ತಿನಲ್ಲಿ ಕಣಕ್ಕಿಳಿದ ನೀರಜ್ ತಮ್ಮ ಮೊದಲ ಎಸೆತವನ್ನೇ 89.34 ಮೀ. ದೂರ ಎಸೆದು ನೇರವಾಗಿ ಫೈನಲ್ ಪ್ರವೇಶಿಸಿದರು. ಇವರ ಜತೆ ಪಾಕಿಸ್ತಾನದ ಅರ್ಷದ್ ನದೀಮ್ 86.59 ಮೀ. ಸಾಧನೆಯೊಂದಿಗೆ ಫೈನಲ್ ಟಿಕೆಟ್ ಪಡೆದರು.
89.34 ಮೀ. ದೂರ ಜಾವೆಲಿನ್ ಎಸೆದದ್ದು ನೀರಜ್ ಅವರ 2ನೇ ಶ್ರೇಷ್ಠ ಸಾಧನೆಯಾಗಿದೆ. ಅವರ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್ಹೋಮ್ ಡೈಮಂಡ್ ಲೀಗ್ನಲ್ಲಿ ಎಸೆದಿದ್ದರು. ಟೋಕಿಯೊದಲ್ಲಿ 87.58 ಮೀ. ಸಾಧನೆಯೊಂದಿಗೆ ಚಿನ್ನ ಗೆದ್ದಿದ್ದರು. ಆಗಸ್ಟ್ 8ರಂದು ನಡೆಯುವ ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಇರಾದೆಯೊಂದಿಗೆ ಕಣಕ್ಕಿಳಿಯಲಿದ್ದಾರೆ. ‘ಎ’ ವಿಭಾಗದಲ್ಲಿ ಜರ್ಮನಿಯ ಜೂಲಿಯನ್ ವೆಬರ್ 87.76 ಮೀ. ದೂರ ಎಸೆದು ಮೊದಲ ಸ್ಥಾನದೊಂದಿಗೆ ಫೈನಲ್ ಪ್ರವೇಶಿಸಿದ್ದರು.
ಕಾಶಿನಾಥ್ ನಾಯ್ಕ್ ಅವರು ನೀರಜ್ ಪ್ಯಾರಿಸ್ನಲ್ಲಿ ನಡೆಯುವ ಒಲಿಂಪಿಕ್ಸ್ನಲ್ಲಿಯೂ(neeraj chopra paris olympics) ಚಿನ್ನದ ಪದಕ ಗೆಲ್ಲಲಿದ್ದಾರೆ ಎಂದು ಆತ್ಮವಿಶ್ವಾಸದಿಂದ ಈ ಮಾತನ್ನು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಕಾಶಿನಾಥ್, “ನಾನು 2015 ರಿಂದ ನೀರಜ್ ಜತೆ ಕೆಲಸ ಮಾಡುತ್ತಿದ್ದೇನೆ. ಅವರ ಛಲವನ್ನು ಮೆಚ್ಚಲೇ ಬೇಕು. ಸಾಧಿಸುವ ಛಲವೇ ಅವರನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ಅತ್ಯಂತ ಶಿಸ್ತಿನ ಕ್ರೀಡಾಪಟು ಕೂಡ ಆಗಿದ್ದಾರೆ. 90 ಮೀ. ದೂರ ಜಾವೆಲಿನ್ ಎಸೆಯುವದು ಪ್ರಮುಖ ಗುರಿ ಎಂದು ನೀರಜ್ ಈಗಾಗಲೇ ಹೇಳಿದ್ದಾರೆ. ಹೇಳಿದಂತೆ ಅವರು ಈ ದೂರವನ್ನು ಕ್ರಮಿಸುವ ವಿಶ್ವಾಸ ನನ್ನಲ್ಲಿದೆ” ಎಂದು ಹೇಳಿದ್ದಾರೆ.
ಕ್ವಾರ್ಟರ್ ಫೈನಲ್ ಪ್ರವೇಶಿಸಿದ ವಿನೇಶ್
ಭಾರತ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ 50 ಕೆಜಿ ವಿಭಾಗದಲ್ಲಿ ಇಂದು ನಡೆದ ಪ್ರೀ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಜಪಾನ್‌ನ ಯುಯಿ ಸುಸಾಕಿ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಇಂದೇ ನಡೆಯುವ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ವಿನೇಶ್ ಉಕ್ರೇನ್ನ ಒಕ್ಸಾನಾ ಲಿವಾಚ್ ವಿರುದ್ಧ ಸೆಣಸಾಡಲಿದ್ದಾರೆ.