ನವದೆಹಲಿ: ಕಾರು ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿರುವ(Rishabh Pant Car Accident) ಟೀಮ್ ಇಂಡಿಯಾ ಕ್ರಿಕೆಟಿಗ ರಿಷಭ್ ಪಂತ್ (Rishabh Pant) ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.
ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಂತ್ ಆರೋಗ್ಯದ ಬಗ್ಗೆ ಮಾಧ್ಯಮ ಪ್ರಕಟನೆ ನೀಡಿದ ಬಿಸಿಸಿಐ, ಪಂತ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.
ಇದಕ್ಕೂ ಮುನ್ನ ಮ್ಯಾಕ್ಸ್ ಆಸ್ಪತ್ರೆಯ ಡಾ.ಆಶಿಶ್ ಯಾಗ್ನಿಕ್ ಅವರು ರಿಷಬ್ ಪಂತ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಅವರ ಸೊಂಟದ ಸುತ್ತ ಗಾಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಾಯದಿಂದ ಪಾರಾಗಿದ್ದಾರೆ ಮತ್ತು ಪ್ರಜ್ಞೆಯಿಂದ ಇದ್ದಾರೆ ಎಂದು ಮಾಹಿತಿ ನೀಡಿದ್ದರು. ಇದೀಗ ಬಿಸಿಸಿಐ ಮತ್ತು ಜಯ್ ಶಾ ಟ್ವೀಟ್ ಮೂಲಕ ಪಂತ್ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ,” ಪಂತ್ ಅವರ ಕುಟುಂಬ ಮತ್ತು ಚಿಕಿತ್ಸೆ ನೀಡುವ ವೈದ್ಯರೊಂದಿಗೆ ಮಾತನಾಡಿದ್ದೇನೆ. ರಿಷಭ್ ಆರೋಗ್ಯ ಸ್ಥಿರವಾಗಿದ್ದು, ಸ್ಕ್ಯಾನ್ ಮಾಡಲಾಗುತ್ತಿದೆ. ನಾವು ಅವರ ಪ್ರಗತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅವರಿಗೆ ಅಗತ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತೇವೆ” ಎಂದು ಹೇಳಿದ್ದಾರೆ.
ಸಂಜೆಯ ವೇಳೆಗೆ ಪಂತ್ ಆರೋಗ್ಯ ಸ್ಥಿತಿ ಬಗ್ಗೆ ಇನ್ನಷ್ಟು ಮಾಹಿತಿ ನೀಡಲಾಗುವುದು ಎಂದು ಮ್ಯಾಕ್ಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಪಂತ್ ಅವರು ಶುಕ್ರವಾರ ಬೆಳಗ್ಗೆ ಡೆಲ್ಲಿಯಿಂದ ತಮ್ಮೂರು ಉತ್ತರಾಖಂಡದ ರೂರ್ಕಿಗೆ ಕಾರಿನಲ್ಲಿ ಹೋಗುವಾಗ ಅಪಘಾತಕ್ಕೆ ಒಳಗಾಗಿದ್ದರು.
ಇದನ್ನೂ ಓದಿ | Rishabh Pant Car Accident | ಗಾಯಗೊಂಡು ನರಳುತ್ತಿದ್ದ ಪಂತ್ ನೆರವಿಗೆ ಬಾರದೆ ಹಣ ಕದ್ದು ಪರಾರಿಯಾದ ದುರುಳರು!