ಲಂಡನ್: ಲಾರ್ಡ್ ಎಂಬ ಹೆಸರಿನಿಂದ ಪ್ರಸಿದ್ಧವಾಗಿರುವ ಭಾರತ ತಂಡದ ಆಲ್‌ರೌಂಡರ್ ಶಾರ್ದೂಲ್ ಠಾಕೂರ್(Shardul Thakur) ಅವರ ಪಾದದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ(Shardul Thakur foot surgery) ನಡೆದಿದ್ದು, ಕನಿಷ್ಠ ಮೂರು ತಿಂಗಳುಗಳ ಕಾಲ ಅವರು ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ ಎಂದು ತಿಳಿದುಬಂದಿದೆ.
32 ವರ್ಷ ವರ್ಷದ ಶಾರ್ದೂಲ್ ಬುಧವಾರ ಲಂಡನ್ನಲ್ಲಿ ತಮ್ಮ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದ ಫೋಟೊವನ್ನು ಶಾರ್ದೂಲ್ ತಮ್ಮ ಇನ್ಸ್ಟಾಗ್ರಾಮ್ ಮತ್ತು ಟ್ವಿಟರ್ ಎಕ್ಸ್ನಲ್ಲಿ ಹಂಚಿಕೊಂಡಿದ್ದು ಶೀಘ್ರದಲ್ಲೇ ಗುಣಮುಖರಾಗಿ ಮತ್ತೆ ನಿಮ್ಮ ಮುಂದೆ ಆಡಲಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಕೇಂದ್ರಿಯ ಗುತ್ತಿಗೆಯಲ್ಲಿ ಅವರು ‘ಸಿ’ ಗ್ರೇಡ್ ವ್ಯಾಪ್ತಿಯಲ್ಲಿರುವ ಕಾರಣ ಅವರ ಚಿಕಿತ್ಸೆಯ ವೆಚ್ಚವನ್ನು ಬಿಸಿಸಿಐ ಭರಿಸಲಿದೆ.
2019ರಲ್ಲೂ ಶಾರ್ದೂಲ್ ತಮ್ಮ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅಂದು ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಪಾದದ ನೋವು ಕಾಣಿಸಿಕೊಂಡಿತ್ತು. ಕಳೆದ ತಿಂಗಳು ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದ ಅವರು 9 ಪಂದ್ಯಗಳಲ್ಲಿ ಕೇವಲ ಐದು ವಿಕೆಟ್‌ಗಳನ್ನಷ್ಟೇ ಪಡೆದಿದ್ದರು. ಶಾರ್ದೂಲ್ ಭಾರತ ಪರ 11 ಟೆಸ್ಟ್, 47 ಏಕದಿನ ಮತ್ತು 25 ಟಿ20 ಪಂದ್ಯಗಳನ್ನಾಡಿ ಒಟ್ಟು 129 ವಿಕೆಟ್ ಪಡೆದಿದ್ದಾರೆ. ಬ್ಯಾಟಿಂಗ್ನಲ್ಲಿಯೂ ಉತ್ತಮ ಪ್ರದರ್ಶನ ತೋರಿರುವ ಅವರು ಒಟ್ಟು 729 ರನ್ ಬಾರಿಸಿದ್ದಾರೆ. ಇದರಲ್ಲಿ 5 ಅರ್ಧಶತಕ ಒಳಗೊಂಡಿದೆ.
ಟೀಮ್ ಇಂಡಿಯಾದ ಪ್ರಧಾನ ವೇಗಿ ಮೊಹಮ್ಮದ್ ಶಮಿ ಕೂಡ ಕೆಲ ತಿಂಗಳ ಹಿಂದೆ ಲಂಡನ್ನಲ್ಲಿ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿ ಈಗ ವಿಶ್ರಾಂತಿಯಲ್ಲಿದ್ದಾರೆ. ಚೇತರಿಕೆಯ ಹಾದಿಯಲ್ಲಿರುವ ಶಮಿ ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಗೆ ಪುನರಾಗಮನ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಗಾಯದಿಂದಾಗಿ ಶಮಿಗೆ ಈ ಬಾರಿ ಐಪಿಎಲ್ ಸೇರಿ ಮಹತ್ವದ ಟಿ20 ವಿಶ್ವಕಪ್ ಟೂರ್ನಿ ಕೈತಪ್ಪಿತು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್ ವೇಳೆ ಗಾಯಗೊಂಡಿದ್ದ ಶಮಿ, ಈ ಗಾಯವನ್ನು ಮರೆಮಾಚಿ ವಿಶ್ವಕಪ್ನಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ತೋರಿದ್ದರು.
ಇದನ್ನೂ ಓದಿ IND vs USA: ಭಾರತಕ್ಕೆ 5 ಪೆನಾಲ್ಟಿ ರನ್ ಲಭಿಸಿದ್ದು ಹೇಗೆ?
ಗಾಯದಿಂದಾಗಿ ಶಮಿ ಅವರು ಈ ಬಾರಿಯ ಐಪಿಎಲ್ ಸೇರಿ ಟಿ20 ವಿಶ್ವಕಪ್ ಆಡುವ ಅವಕಾಶ ಕಳೆದುಕೊಂಡರು. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಶಮಿ ಅವರು ತಮ್ಮ ಮೊನಚಾದ ಬೌಲಿಂಗ್ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್ ಉರುಳಿಸಿದ್ದರು. ಅವರ ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದರು. ಮೊಹಮ್ಮದ್ ಶಮಿ ಭಾರತ ಪರ 64 ಟೆಸ್ಟ್ ಪಂದ್ಯಗಳಲ್ಲಿ 229 ವಿಕೆಟ್ ಪಡೆದಿದ್ದಾರೆ. 101 ಏಕದಿನ ಪಂದ್ಯಗಳಲ್ಲಿ 195 ವಿಕೆಟ್ ಪಡೆದಿದ್ದಾರೆ. 23 ಟಿ20 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ.