ಮುಂಬಯಿ: ಆಸ್ಟ್ರೇಲಿಯಾ(IND VS AUS) ವಿರುದ್ಧದ ಬಾರ್ಡರ್-ಗಾವಸ್ಕರ್ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ಆಟಗಾರ ಶ್ರೇಯಸ್ ಅಯ್ಯರ್ ಮೊದಲ ಪಂದ್ಯದಿಂದ ಹೊರಬಿದ್ದಿದ್ದಾರೆ.
ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನ ಬೆನ್ನು ನೋವಿನ ಕಾರಣದಿಂದ ಅಯ್ಯರ್ ಅವರು ಈ ಸರಣಿಯಿಂದ ಹೊರಬಿದ್ದಿದ್ದರು. ಆದರೆ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ವೇಳೆ ತಂಡಕ್ಕೆ ಮರಳಬಹುದೆಂದು ನಿರೀಕ್ಷಿಸಲಾಗಿತ್ತು. ಇದೀಗ ಅವರು ಆಸೀಸ್ ವಿರುದ್ಧದ ಮೊದಲ ಪಂದ್ಯದಿಂದ ಹೊರಬಿದ್ದಿದ್ದಾರೆ.
“ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿರಯವ ಶ್ರೇಯಸ್ ಅಯ್ಯರ್ ಅವರು ಬೆನ್ನು ನೋವಿನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಅವರಿಗೆ ಇನ್ನೂ ಎರಡು ವಾರಗಳ ಕಾಲ ವಿಶ್ರಾಂತಿ ಬೇಕಾಗಿದೆ. ಹೀಗಾಗಿ ಅವರು ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಎರಡನೇ ಪಂದ್ಯ ಆಡುವ ಕುರಿತು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು” ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ.
ಟೆಸ್ಟ್ ಪದಾರ್ಪಣೆ ನಿರೀಕ್ಷೆಯಲ್ಲಿ ಸೂರ್ಯಕುಮಾರ್
ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದ ಶ್ರೇಯಸ್ ಅಯ್ಯರ್ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಆಡುವ ಸಾಧ್ಯತೆಯಿದೆ. ಈ ಮೂಲಕ ಅವರು ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಸೂರ್ಯಕುಮಾರ್ ಯಾದವ್ ದೇಶಿಯ ಕ್ರಿಕೆಟ್ ರಣಜಿ ಟೂರ್ನಿಯಲ್ಲಿ ಉತ್ತಮ ರೆಕಾರ್ಡ್ ಹೊಂದಿದ್ದಾರೆ. ಹೀಗಾಗಿ ಅವರಿಗೆ ಮೊದಲ ಪಂದ್ಯದಲ್ಲಿ ಆಡುವ ಅವಕಾಶ ಸಿಕ್ಕರು ಅಚ್ಚರಿಯಿಲ್ಲ. ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಫೆ.9ರಿಂದ ಆರಂಭವಾಗಲಿದೆ.