ನವದೆಹಲಿ: ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಸೇರಿ ಕೋಚ್ಗಳ ವಿರುದ್ಧ ಕುಸ್ತಿಪಟುಗಳು ಮಾಡಿರುವ ಲೈಂಗಿಕ ಆರೋಪದ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ(Priyanka Gandhi) ವಾದ್ರಾ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಿಯಾಂಕಾ, ನಮ್ಮ ಕ್ರೀಡಾಪಟುಗಳು ದೇಶದ ಹೆಮ್ಮೆ. ಜಾಗತಿಕ ಮಟ್ಟದಲ್ಲಿ ತಮ್ಮ ಸಾಧನೆಯಿಂದ ದೇಶಕ್ಕೆ ಕೀರ್ತಿ ತಂದಿದ್ದಾರೆ. ಇವರ ಲೈಂಗಿಕ ಕಿರುಕುಳದ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ನ್ಯಾಯ ಒದಗಿಸಬೇಕೆಂದು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
ಈಗಾಗಲೇ ಈ ಆರೋಪದ ಬಗ್ಗೆ ಕ್ರೀಡಾ ಸಚಿವಾಲಯವು ಮುಂದಿನ 72 ಗಂಟೆಗಳ ಒಳಗೆ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ನಿಂದ ಪ್ರತಿಕ್ರಿಯೆಯನ್ನು ಕೋರಿದೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಪ್ರಿಯಾಂಕಾ ಆರೋಪದ ಬಗ್ಗೆ ತಕ್ಷಣ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಕಾಮನ್‌ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್ ಎರಡರಲ್ಲೂ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ ಅವರು ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡುತ್ತಿದ್ದಾರೆ ಹಾಗೂ ಭಾರತೀಯ ಕುಸ್ತಿ ಫೆಡರೇಶನ್ ಅಧಿಕಾರಿಗಳು ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದರು. ಇದೇ ವಿಚಾರವಾಗಿ ಹೊಸದಿಲ್ಲಿಯ ಜಂತರ್ ಮಂತರ್‌ನಲ್ಲಿ ಒಲಿಂಪಿಕ್ ಪದಕ ವಿಜೇತರಾದ ಭಜರಂಗ್ ಪೂನಿಯಾ, ಸಾಕ್ಷಿ ಮಲಿಕ್ ಸೇರಿದಂತೆ ಪ್ರಮುಖ ಕುಸ್ತಿಪಟುಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | Vinesh Phogat | ಲೈಂಗಿಕ ಕಿರುಕುಳ ಆರೋಪ; ಮುಂದಿನ 72 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಕುಸ್ತಿ ಫೆಡರೇಶನ್ಗೆ ಕೇಂದ್ರ ಸೂಚನೆ