ನವದೆಹಲಿ: ಕ್ರೀಡಾ ಸಂಸ್ಥೆಯ ತರಬೇತುದಾರರು ಹಾಗೂ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆ ಕ್ರೀಡಾ ಸಚಿವಾಲಯವು ಮುಂದಿನ 72 ಗಂಟೆಗಳ ಒಳಗೆ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ನಿಂದ ಪ್ರತಿಕ್ರಿಯೆಯನ್ನು ಕೋರಿದೆ.
ಬುಧವಾರ ಭಾರತ ಸ್ಟಾರ್ ಕುಸ್ತಿಪಟು ವಿನೇಶ್ ಪೋಗಟ್, ಒಲಿಂಪಿಕ್ ಪದಕ ವಿಜೇತರಾದ ಭಜರಂಗ್ ಪೂನಿಯಾ ಹಾಗೂ ಸಾಕ್ಷಿ ಮಲಿಕ್ ಸೇರಿದಂತೆ ಪ್ರಮುಖ ಕುಸ್ತಿಪಟುಗಳು ಕೋಚ್ ಮತ್ತು ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿ, ಹೊಸದಿಲ್ಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದರು. ತಕ್ಷಣ ಜಾರಿಗೆ ಬರುವಂತೆ ಅಧ್ಯಕ್ಷ ಬ್ರಿಜ್ ಭೂಷಣ್ ಅವರನ್ನು ಈ ಹುದ್ದೆಯಿಂದ ವಜಾಗೊಳಿಸಿ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದರು.
ಇದೀಗ ಕೇಂದ್ರ ಸರ್ಕಾರ ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಂದಿನ 72 ಗಂಟೆಗಳ ಒಳಗೆ ಭಾರತೀಯ ಕುಸ್ತಿ ಫೆಡರೇಶನ್ ಈ ಬಗ್ಗೆ ಸೂಕ್ತ ಮಾಹಿತಿ ನೀಡಬೇಕೆಂದು ಖಡಕ್ ಆದೇಶ ನೀಡಿದೆ.
ಕಾಮನ್‌ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್ ಎರಡರಲ್ಲೂ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್, “ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡುತ್ತಿದ್ದಾರೆ ಹಾಗೂ ಭಾರತೀಯ ಕುಸ್ತಿ ಫೆಡರೇಶನ್ ಅಧಿಕಾರಿಗಳು ನನಗೆ ಜೀವ ಬೆದರಿಕೆ ಹಾಕಿದ್ದಾರೆ” ಎಂದು ಆರೋಪಿಸಿದ್ದರು.
ಆರೋಪ ಕೇಳಿ ಬಂದ ಬಳಿಕ ಪ್ರತಿಕ್ರಿಯೆ ನೀಡಿದ್ದ ಬ್ರಿಜ್ ಭೂಷಣ್ ಒಂದೊಮ್ಮೆ ಈ ಆರೋಪ ಸಾಬೀತಾದಲ್ಲಿ ತಾನು ಗಲ್ಲು ಶಿಕ್ಷೆಗೂ ಸಿದ್ಧನಿದ್ದೇನೆ. ಜತೆಗೆ ತನ್ನ ಮೇಲಿನ ಆರೋಪದ ಬಗೆಗಿನ ತನಿಖೆಗೆ ನಾನು ಮುಕ್ತವಾಗಿ ಸಹರಿಸಲಿದ್ದೇನೆ ಎಂದು ಹೇಳಿದ್ದರು.
ಇದನ್ನೂ ಓದಿ | Vinesh Phogat | ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ: ವಿನೇಶ್ ಪೋಗಟ್ ಗಂಭೀರ ಆರೋಪ