ನವದೆಹಲಿ: ಕೊನೆಯ ಕ್ಷಣದಲ್ಲಿ ವೀಸಾ ಪಡೆದು ಮ್ಯಾಡ್ರಿಡ್ನಲ್ಲಿ ನಡೆದ ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್(Grand Prix) ಕುಸ್ತಿ ಟೂರ್ನಿಯಲ್ಲಿ ಸ್ಪರ್ಧಿಸಿದ್ದ ಭಾರತದ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) 50 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಎದುರಾಳಿ ಮರೀರಾ ತ್ಯುಮೆರ್ಕೋವಾ ವಿರುದ್ಧ 10-5 ಅಂಕಗಳ ಭರ್ಜರಿ ಗೆಲುವು ಸಾಧಿಸಿ ಚಿನ್ನಕ್ಕೆ ಕೊಳರೊಡ್ಡಿದರು. ಇದೇ ತಿಂಗಳು 26ರಿಂದ ಆರಂಭಗೊಳ್ಳಲಿರುವ ಪ್ಯಾರಿಸ್ ಒಲಿಂಪಿಕ್ಸ್(Paris Olympics) ಕ್ರೀಡಾಕೂಟಕ್ಕೆ ಮುನ್ನ ನೀಡಿದ ಉತ್ತಮ ಪ್ರದರ್ಶನವಾಗಿದೆ.
ಭಾರತೀಯ ಕುಸ್ತಿ ಒಕ್ಕೂಟದ ವಿರುದ್ಧ ತೊಡೆತಟ್ಟಿ ದೇಶದ ಪರಮೋಚ್ಚ ಕ್ರೀಡಾ ಪ್ರಶಸ್ತಿಯಾದ ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನ ಮತ್ತು ಅರ್ಜುನ್ ಪ್ರಶಸ್ತಿಯನ್ನು ಹಿಂದಿರುಗಿಸಿದ ವಿಚಾರದಲ್ಲಿ ವಿನೇಶ್ ಫೋಗಟ್ ದೊಡ್ಡ ಸುದ್ದಿಯಾಗಿದ್ದರು. ಈ ಹಿಂದೆ 55 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದ ವಿನೇಶ್ ಈಗ 50 ಕೆ.ಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದಾರೆ.
29 ವರ್ಷದ ವಿನೇಶ್ ಸೆಮಿಫೈನಲ್ ಪಂದ್ಯದಲ್ಲಿ ಕೆನಡಾದ ಕೇಟಿ ಡುಚಾಕ್ ಅವರನ್ನು 9-4 ಅಂಕಗಳಿಂದ ಸೋಲಿಸಿ ಫೈನಲ್ಗೆ ಲಗ್ಗೆ ಇಟ್ಟಿದ್ದರು. ಫೈನಲ್ನಲ್ಲಿಯೂ ಶ್ರೇಷ್ಠ ಪ್ರದರ್ಶನ ತೋರುವ ಮೂಲಕ ಚಿನ್ನದ ಪದಕ ತಮ್ಮದಾಗಿಸಿಕೊಂಡರು. ಪ್ಯಾರಿಸ್ ಒಲಿಂಪಿಕ್ಸ್ಗೆ ತಯಾರಿ ನಡೆಸುವ ಸಲುವಾಗಿ ವಿನೇಶ್ ಫ್ರಾನ್ಸ್ಗೆ ತೆರಳಲಿದ್ದಾರೆ. 20 ದಿನಗಳ ಕಾಲ ಅವರು ಇಲ್ಲಿ ಅಭ್ಯಾಸ ನಡೆಸಲಿದ್ದಾರೆ.
ಇತ್ತೀಚೆಗೆ ವಿನೇಶ್ ಫೋಗಟ್(Vinesh Phogat) ಸೀನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಷಿಪ್‌ನ 55 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದರು. 55 ಕೆಜಿ ವಿಭಾಗದಲ್ಲಿ ವಿನೇಶ್ ಅವರು ಮಧ್ಯಪ್ರದೇಶದ ಜ್ಯೋತಿ ಅವರನ್ನು 4-0 ಅಂತರದಿಂದ ಸೋಲಿಸಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರು. ರೈಲ್ವೆ ಸ್ಪೋರ್ಟ್ಸ್ ಪ್ರಮೋಷನ್ ಬೋರ್ಡ್ (ಆರ್‌ಎಸ್‌ಪಿಬಿ) ತಂಡದ ಪರ 29 ವರ್ಷದ ವಿನೇಶ್ ಕಣಕ್ಕಿಳಿದಿದ್ದರು.
ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಾಕ್ಷಿ ಮಲಿಕ್ ಸೇರಿದಂತೆ ದೇಶದ ಉನ್ನತ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ರಾಜೀನಾಮೆ ನೀಡಬೇಕಾಯಿತು. ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಸೇರಿದಂತೆ ಅಗ್ರ ಕುಸ್ತಿಪಟುಗಳು ಕಳೆದ ವರ್ಷ ಜನವರಿಯಲ್ಲಿ ಬಿಜೆಪಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬೀದಿಗಿಳಿದಿದ್ದರು. ಈ ಪ್ರತಿಭಟನೆಯ ಪ್ರಮುಖ ರುವಾರಿ ಕೂಡ ವಿನೇಶ್ ಅವರೇ ಆಗಿದ್ದರು.