ನವದೆಹಲಿ: ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ ನಡೆದಿದ್ದ(IPL 2024) ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯದಲ್ಲಿ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಪರ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆಪ್ ಕಾರ್ಯಕರ್ತರನ್ನು ದಿಲ್ಲಿ ಪೊಲೀಸರು ಬಂಧಿಸಿರುವ ಘಟನೆ ತಡವಾಗಿ(Viral News) ಬೆಳಕಿಗೆ ಬಂದಿದೆ.
ಆಮ್ ಆದ್ಮಿ ಪಕ್ಷದ ವಿದ್ಯಾರ್ಥಿ ಘಟಕ ಛಾತ್ರ ಯುವ ಸಂಘರ್ಷ(AAP workers) ಸಮಿತಿಯ ಸದಸ್ಯರು ಕೇಜ್ರಿವಾಲ್ ಬಂಧನವನ್ನು ಪ್ರತಿಭಟಿಸಿ ‘ಜೈಲ್ ಕಾ ಜವಾಬ್ ವೋಟ್ ಸೆ’ (ಬಂಧನಕ್ಕೆ ಉತ್ತರವನ್ನು ಮತದಿಂದ ನೀಡಿ) ಎಂಬ ಘೋಷಣೆಯ ಟೀ ಶರ್ಟ್‌ಗಳನ್ನು ಧರಿಸಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಇದು ಮಾತ್ರವಲ್ಲದೆ ಪಂದ್ಯದ ಸಂದರ್ಭ ಕೇಜ್ರಿವಾಲ್ ಬಂಧನ ಖಂಡಿಸಿ ಘೋಷಣೆಗಳನ್ನು ಕೂಗಿದ್ದರು. ಇದೀಗ ಇವರ ವಿರುದ್ಧ ಸಾರ್ವಜನಿಕವಾಗಿ ಗದ್ದಲವನ್ನು ಸೃಷ್ಟಿಸಿದ ಆರೋಪದಲ್ಲಿ ಬಂಧಿಸಲಾಗಿದೆ. ಸೂಕ್ತ ಕಾನೂನಾತ್ಮಕ ವಿಧಿವಿಧಾನಗಳು ಪೂರ್ಣಗೊಂಡ ಬಳಿಕವಷ್ಟೇ ಬಂಧಿತರನ್ನು ಬಿಡುಗಡೆಗೊಳಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಜಾರಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದ್ದು, ತಿಹಾರ ಜೈಲಿನಲ್ಲಿದ್ದಾರೆ. ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ.5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ಮಾತ್ರವಲ್ಲ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ IPL 2024 Points Table: ಸನ್ರೈಸರ್ಸ್ಗೆ 10 ವಿಕೆಟ್ ಗೆಲುವು; ಅಂಕಪಟ್ಟಿಯಲ್ಲಿ ಕುಸಿದ ಚೆನ್ನೈ
ಅಷ್ಟೇ ಅಲ್ಲ, ದೆಹಲಿ ಜಲ ಮಂಡಳಿ ಗುತ್ತಿಗೆ ಮಂಜೂರು ಮಾಡುವಾಗ ಕೂಡ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಜಾರಿ ನಿರ್ದೇಶನಾಲಯವು ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. ಮತ್ತೊಂದೆಡೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇ.ಡಿ ಸಲ್ಲಿಸಿದ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಇದರಿಂದ ಅವರು ತಾತ್ಕಾಲಿಕವಾಗಿ ರಿಲೀಫ್ ಪಡೆದಿದ್ದರು. ಆದರೆ, ಈಗ ಬಂಧನದಿಂದ ರಕ್ಷಣೆಗೆ ನೀಡದ ಕಾರಣ ಅವರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ನ್ಯಾಯಾಂಗ ಬಂಧನವನ್ನು (Judicial custody) ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದ್ದು, ಅವರು ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಆದೇಶವನ್ನೂ ಕಾಯ್ದಿರಿಸಿದೆ.