ಲಂಡನ್: ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯವನ್ನಾಡಲು ಟೀಮ್ ಇಂಡಿಯಾದ ಆಟಗಾರರು ಲಂಡನ್ನಲ್ಲಿ ಭರ್ಜರಿ ಅಭ್ಯಾಸ ಆರಂಭಿಸಿದ್ದಾರೆ. ಇದೇ ವೇಳೆ ವಿರಾಟ್ ಕೊಹ್ಲಿ ಅವರು ಯುವ ಆಟಗಾರ ಯಶಸ್ವಿ ಜೈಸ್ವಾಲ್ಗೆ ಉಪಯುಕ್ತ ಬ್ಯಾಟಿಂಗ್ ಸಲಹೆಯನ್ನು ನೀಡಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ.
ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಈ ಪ್ರಶಸ್ತಿ ಸಮರ ಜೂನ್ 7 ರಿಂದ 11ರವರೆಗೆ ಲಂಡನ್ನ ದಿ ಓವಲ್ ಮೈದಾನದಲ್ಲಿ ನಡೆಯಲಿದೆ. ಈ ಮಹತ್ವದ ಪಂದ್ಯಕ್ಕೆ ಸಜ್ಜಾಗುತ್ತಿರುವ ಆಟಗಾರರು ಕೋಚ್ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಬ್ಯಾಟಿಂಗ್ ಅಭ್ಯಾಸ ನಡೆಸಿದರು. ಈ ಸಂದರ್ಭದಲ್ಲಿ ಕೊಹ್ಲಿ ಅವರು ತಮ್ಮ ಅನುಭವದ ಬ್ಯಾಟಿಂಗ್ ತಂತ್ರಗಾರಿಕೆಯನ್ನು ಜೈಸ್ವಾಲ್ ಅವರಿಗೆ ಕಲಿಸಿಕೊಟ್ಟಿದ್ದಾರೆ.
ಕೆಲ ಕಾಲ ಕೊಹ್ಲಿ ಅವರು ನೇರವಾಗಿ ವಿಕೆಟ್ಗೆ ಬರುವ ಚೆಂಡನ್ನು ಯಾವ ರೀತಿ ಎದುರಿಸಬೇಕು. ದೇಹದ ಭಾಗ ಎಷ್ಟು ಬಾಗಬೇಕು ಇನ್ನಿತರ ಬ್ಯಾಟಿಂಗ್ ತಂತ್ರಗಾರಿಕೆಯನ್ನು ಹೇಳಿಕೊಟ್ಟರು. ಬಳಿಕ ಜೈಸ್ವಾಲ್ ಅವರು ನೆಟ್ಸ್ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸಿದರು.
ಇದನ್ನೂ ಓದಿ WTC Final 2023: ಮತ್ತೆ ಮೈಕ್ ಹಿಡಿಯಲು ಸಜ್ಜಾದ ದಿನೇಶ್ ಕಾರ್ತಿಕ್
ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದ ಋತುರಾಜ್ ಗಾಯಕ್ವಾಡ್ ಅವರು ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಕಾರಣ ಈ ಪಂದ್ಯದಿಂದ ಹೊರಗುಳಿದರು. ಹೀಗಾಗಿ ಅವರ ಬದಲಿಗೆ ಜೈಸ್ವಾಲ್ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸದ್ಯ ಮೀಸಲು ಆಟಗಾರನಾಗಿ ಕಾಣಿಸಿಕೊಂಡಿರುವ ಅವರಿಗೆ ಆಡುವ ಬಳಗದಲ್ಲಿ ಅವಕಾಶ ಸಿಗುವುದು ಅನುಮಾನ. ಈ ಬಾರಿಯ ಐಪಿಎಲ್ನಲ್ಲಿ ಅಮೋಘ ಪ್ರದರ್ಶನ ತೋರಿದ ಜೈಸ್ವಾಲ್ ಉತ್ತಮ ಬ್ಯಾಟಿಂಗ್ ಪ್ರದರ್ಶನದ ಜತೆಗೆ ಶತಕವನ್ನು ಬಾರಿಸಿ ಮಿಂಚಿದ್ದರು. ರಣಜಿ ಕ್ರಿಕೆಟ್ನಲ್ಲಿಯೂ ಹಲವು ಶತಕ ಮತ್ತು ದ್ವಿಶತಕ ಬಾರಿಸಿ ಮಿಂಚಿದ್ದಾರೆ. ಆಸೀಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಅವಕಾಶ ಸಿಗದಿದ್ದರೂ ಮುಂದಿನ ದಿನಗಳಲ್ಲಿ ಅವರಿಗೆ ಭಾರತ ತಂಡದಲ್ಲಿ ಆಡುವ ಅವಕಾಶ ಸಿಗುವುದು ಖಚಿತ.
ಇದನ್ನೂ ಓದಿ WTC Final 2023: ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ ವಿರಾಟ್,ರೋಹಿತ್
When Virat Kohli speaks,everyone respect and hear it just like Yashasvi Jaiswal. ❤️pic.twitter.com/QDTVk97zsN
— Akshat (@AkshatOM10) May 31, 2023
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯ್ದೇವ್ ಉನಾದ್ಕತ್, ಇಶಾನ್ ಕಿಶನ್ (ವಿಕೆಟ್ ಕೀಪರ್). ಸ್ಟ್ಯಾಂಡ್ ಬೈ ಆಟಗಾರರು: ಯಶಸ್ವಿ ಜೈಸ್ವಾಲ್, ಮುಖೇಶ್ ಕುಮಾರ್, ಸೂರ್ಯಕುಮಾರ್ ಯಾದವ್.