ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ತಿಹಾರ ಜೈಲು ಸೇರಿದ್ದಾರೆ. ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಸುಪ್ರೀಂ ಕೋರ್ಟ್ ಕೂಡ ತುರ್ತು ವಿಚಾರಣೆಗೆ ನಕಾರ ವ್ಯಕ್ತಪಡಿಸಿದೆ. ಇದರ ಬೆನ್ನಲ್ಲೇ, ಅರವಿಂದ್ ಕೇಜ್ರಿವಾಲ್ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ. ಇದರ ಬೆನ್ನಲ್ಲೇ, ದೆಹಲಿಯ ಆಪ್ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜೈಲು ಸೇರಿದರೂ ಅರವಿಂದ್ ಕೇಜ್ರಿವಾಲ್ ಅವರು ರಾಜೀನಾಮೆ ನೀಡಿಲ್ಲ ಎಂದು ಆಪ್ ಸಚಿವ ರಾಜ್ ಕುಮಾರ್ ಆನಂದ್ (Raaj Kumar Anand) ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಜತೆಗೆ ಪಕ್ಷವನ್ನೂ ತೊರೆದಿದ್ದಾರೆ.
“ದೆಹಲಿಯ ಸಮಾಜ ಕಲ್ಯಾಣ ಖಾತೆ ಸಚಿವ ಸ್ಥಾನ ಹಾಗೂ ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ರಾಜೀನಾಮೆ ನೀಡಿದ್ದೇನೆ. ಮಾರ್ಚ್ 21ರಂದೇ ಅರವಿಂದ್ ಕೇಜ್ರಿವಾಲ್ ಅವರ ಬಂಧನವಾಗಿದೆ. ಇದುವರೆಗೆ ಅವರು ರಾಜೀನಾಮೆ ನೀಡಿಲ್ಲ. ಆಮ್ ಆದ್ಮಿ ಪಕ್ಷವು ಭ್ರಷ್ಟಾಚಾರದಲ್ಲಿ ಮುಳುಗಿದೆ. ನಾನು ಭ್ರಷ್ಟರ ಜತೆ ಕೆಲಸ ಮಾಡಲು ಇಷ್ಟಪಡುವುದಿಲ್ಲ. ಹಾಗಾಗಿ ಪಕ್ಷದಿಂದ ಹೊರಬಂದಿರುವೆ” ಎಂದು ರಾಜ್ ಕುಮಾರ್ ಆನಂದ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
#WATCH | Delhi Social Welfare Minister Raaj Kumar Anand resigns from his post as minister and also from Aam Aadmi Party pic.twitter.com/QF52GyjhiW
— ANI (@ANI) April 10, 2024
ದಲಿತರಿಗೆ ಗೌರವ ಇಲ್ಲ
ಆಮ್ ಆದ್ಮಿ ಪಕ್ಷದ ಕುರಿತು ರಾಜ್ ಕುಮಾರ್ ಆನಂದ್ ಅವರು ಹಲವು ಆರೋಪ ಮಾಡಿದರು. “ಆಪ್‌ನಲ್ಲಿ ದಲಿತ ಸಚಿವರು, ಶಾಸಕರು ಹಾಗೂ ಕೌನ್ಸಿಲರ್‌ಗಳಿಗೆ ಗೌರವ ಇಲ್ಲ. ಪಕ್ಷದಲ್ಲಿ ದಲಿತರಿಗೆ ಮೋಸ ಮಾಡಲಾಗುತ್ತಿದೆ. ಇಂತಹ ವಾತಾವರಣದಲ್ಲಿ ನನಗೆ ಕೆಲಸ ಮಾಡಲು ಆಗುವುದಿಲ್ಲ. ನಾನು ರಾಜೀನಾಮೆ ನೀಡಿರುವ ಸಂದರ್ಭದ ಕುರಿತು ಮಾತನಾಡಬೇಕಿಲ್ಲ. ಯಾವಾಗ ಹೈಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿತೋ, ದೊಡ್ಡ ಪ್ರಮಾದವೇ ನಡೆದಿದೆ ಎಂಬುದು ತಿಳಿಯಿತು. ಹಾಗಾಗಾಗಿ ರಾಜೀನಾಮೆ ನೀಡಿದ್ದೇನೆ” ಎಂದು ತಿಳಿಸಿದರು.
ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ.5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಕೆ. ಕವಿತಾ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ದೆಹಲಿ ಜಲ ಮಂಡಳಿ ಗುತ್ತಿಗೆ ಮಂಜೂರು ಮಾಡುವಾಗ ಕೂಡ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಜಾರಿ ನಿರ್ದೇಶನಾಲಯವು ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. ಮತ್ತೊಂದೆಡೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇ.ಡಿ ಸಲ್ಲಿಸಿದ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಇದರಿಂದ ಅವರು ತಾತ್ಕಾಲಿಕವಾಗಿ ರಿಲೀಫ್ ಪಡೆದಿದ್ದರು. ಆದರೆ, ಈಗ ಬಂಧನದಿಂದ ರಕ್ಷಣೆಗೆ ನೀಡದ ಕಾರಣ ಅವರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ಗೆ 14×8 ಅಳತೆಯ ಕೋಣೆ; ಪತ್ನಿ ಭೇಟಿಗೆ ಅವಕಾಶ; ವಿಐಪಿ ಟ್ರೀಟ್‌ಮೆಂಟ್ ಇದೆಯಾ?