ಬೆಂಗಳೂರು: 5, 8 ಮತ್ತು 9ನೇ ತರಗತಿಯ (5, 8, 9 class exam) ಎಲ್ಲ ಮಕ್ಕಳನ್ನು ಉತ್ತೀರ್ಣಗೊಳಿಸಿ ಶಿಕ್ಷಣ ಇಲಾಖೆ (Education department) ಆದೇಶ ನೀಡಿದೆ. ಈ ತರಗತಿಗಳ ಪಬ್ಲಿಕ್ ಪರೀಕ್ಷೆ ಫಲಿತಾಂಶ (board exam result) ಪ್ರಕಟಕ್ಕೆ ಸುಪ್ರೀಂ ಕೋರ್ಟ್ (supreme court) ತಡೆ ನೀಡಿರುವ ಹಿನ್ನೆಲೆಯಲ್ಲಿ ಈ ತರಗತಿಯ ಮಕ್ಕಳ ಮುಂದಿನ ಶೈಕ್ಷಣಿಕ ವರ್ಷದ (academic year) ಭವಿಷ್ಯ ಅತಂತ್ರಕ್ಕೆ ಸಿಲುಕಿತ್ತು. ಇಲಾಖೆಯ ನೂತನ ಆದೇಶದಂತೆ ಈ ಎಲ್ಲಾ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅವಕಾಶ ಪಡೆದುಕೊಂಡಿದ್ದಾರೆ.
5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಈ ಸಂತಸದ ಸುದ್ದಿಯನ್ನು ನೀಡಿದೆ. ತರಗತಿವಾರು ಮೌಲ್ಯಾಂಕನದ ವಿಶ್ಲೇಷಣೆ ಮಾಡಿ, ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ದಾಖಲಿಸುವಂತೆ ಅವಕಾಶ ಕಲ್ಪಿಸಿ ಇಲಾಖೆ ಆದೇಶಿಸಿದೆ.
2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನ ಕಾರ್ಯ ಮುಗಿದಿದ್ದು, ರಾಜ್ಯದ ಎಲ್ಲ ಶಾಲೆಗಳಲ್ಲಿ 8.4.2024ರಂದು ಫಲಿತಾಂಶವನ್ನು ಪ್ರಕಟಿಸಲು ತಿಳಿಸಲಾಗಿತ್ತು. ನಂತರದಲ್ಲಿ ಫಲಿತಾಂಶವನ್ನು ಪ್ರಕಟಿಸಲು ಸರ್ವೋಚ್ಛ ನ್ಯಾಯಾಲಯವು ತಡೆಯಾಜ್ಞೆ ನೀಡಿತ್ತು. ಈ ಬಗ್ಗೆ ಅಂತಿಮ ತೀರ್ಪು ಬಾಕಿ ಇದೆ. ಇದರಿಂದಾಗಿ ಅತಂತ್ರಕ್ಕೆ ಸಿಲುಕಿದ್ದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ರಿಲೀಫ್ ನೀಡಿದ್ದು, ಮುಂದಿನ ತರಗತಿಗಳಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಿದೆ.
ಪ್ರಸ್ತುತ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಅಂತ್ಯಗೊಂಡಿದ್ದು, 29-05-2024ರಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದೇ ಇದ್ದರೆ ಅವರನ್ನು ಮುಂದಿನ ಶೈಕ್ಷಣಿಕ ವರ್ಷಕ್ಕೆ/ತರಗತಿಗೆ ಶಾಲಾ ಪ್ರವೇಶ/ದಾಖಲಾತಿ ಮಾಡಲು, ಪ್ರವೇಶ ಶುಲ್ಕ ಪಾವತಿಸಲು ಹಾಗೂ ಬೇರೆ ಸ್ಥಳಗಳಿಗೆ ವರ್ಗಾವಣೆ ಹೊಂದಿರುವ ಪ್ರಯುಕ್ತ ಮಕ್ಕಳ ವರ್ಗಾವಣೆ ಪ್ರಮಾಣಪತ್ರ, ಪ್ರಗತಿ ಪತ್ರ ಮತ್ತು ವ್ಯಾಸಂಗ ಪ್ರಮಾಣಪತ್ರಗಳನ್ನು ವಿತರಿಸಲು ಸಾಧ್ಯವಾಗದು. ಈ ಹಿನ್ನೆಲೆಯಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಅಗತ್ಯ ಕ್ರಮ ವಹಿಸುವಂತೆ ಪೋಷಕರು ಮನವಿ ಮಾಡಿದ್ದರು. ಅದರಂತೆ ಮಕ್ಕಳ ಶೈಕ್ಷಣಿಕ ಭವಿಷ್ಯ ಸುಗಮಗೊಳಿಸಲು ಕ್ರಮವಹಿಸಿ ಇಲಾಖೆ ಆದೇಶ ಹೊರಡಿಸಿದೆ.
ಸರ್ವೋಚ್ಛ ನ್ಯಾಯಾಲಯದ ಮಧ್ಯಂತರ ತೀರ್ಪಿನಂತೆ, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನವನ್ನು ತಡೆ ಹಿಡಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆದಿರುವ FA-1, FA-2, FA-3, FA-4, SA-1 ಗಳ ಮೌಲ್ಯಾಂಕನ ಆಧಾರದ ಮೇಲೆ ಮಕ್ಕಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ಮುಂದುವರೆಸಲು ಅವಕಾಶ ಕಲ್ಪಿಸುವಂತೆ ಶಿಕ್ಷಣ ಇಲಾಖೆಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಸೂಚಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ: Public Exam: 5, 8, 9ನೇ ತರಗತಿ ಪಬ್ಲಿಕ್ ಪರೀಕ್ಷೆ ಮೌಲ್ಯಮಾಪನದಲ್ಲಿ ಲೋಪ; ವಿವರ ಸಲ್ಲಿಕೆಗೆ ಸರ್ಕಾರ ಸೂಚನೆ