Site icon Vistara News

NEET UG : ನೀಟ್​ ಪರೀಕ್ಷೆ ಅಕ್ರಮಗಳ ತನಿಖೆ ಹೊಣೆ ಸಿಬಿಐಗೆ ಒಪ್ಪಿಸಿದ ಕೇಂದ್ರ ಸರ್ಕಾರ

NEET UG

ನವದೆಹಲಿ: ಪದವಿಪೂರ್ವ ವೈದ್ಯಕೀಯ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸ್ಪರ್ಧಾತ್ಮಕ ನೀಟ್ ಪರೀಕ್ಷೆಯಲ್ಲಿ (NEET UG) ನಡೆದಿರುವ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ತನಿಖೆ ಹೊಣೆಯನ್ನು ಕೇಂದ್ರ ಸರ್ಕಾರ ಸಿಬಿಐ ಒಪ್ಪಿಸಿ ಶನಿವಾರ ಆದೇಶಿಸಿದೆ. ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ “ಕೆಲವು ಅಕ್ರಮಗಳು, ವಂಚನೆ ಮತ್ತು ದುಷ್ಕೃತ್ಯಗಳ ಪ್ರಕರಣಗಳು ವರದಿಯಾಗಿವೆ ಮತ್ತು ಪರೀಕ್ಷಾ ಪ್ರಕ್ರಿಯೆಯ ನಿರ್ವಹಣೆಯಲ್ಲಿ ಪಾರದರ್ಶಕತೆಗಾಗಿ, ಶಿಕ್ಷಣ ಸಚಿವಾಲಯದ ಪರಿಶೀಲನೆಯ ನಂತರ ಈ ಬಗ್ಗೆ ಸಮಗ್ರ ತನಿಖೆಗಾಗಿ ಸಿಬಿಐಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪರೀಕ್ಷೆಗಳ ಪಾವಿತ್ರ್ಯವನ್ನು ಖಚಿತಪಡಿಸಿಕೊಳ್ಳಲು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸಲು ಸರ್ಕಾರ ಬದ್ಧ. ಮೋಸದಲ್ಲಿ ಭಾಗಿಯಾಗಿರುವ ಯಾವುದೇ ವ್ಯಕ್ತಿ, ಸಂಸ್ಥೆ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಂದು ಸಚಿವಾಲಯ ಹೇಳಿದೆ.

ಮೇ 5 ರಂದು ದೇಶದ 4,750 ಕೇಂದ್ರಗಳಲ್ಲಿ ನೀಟ್-ಯುಜಿ ನಡೆದಿದ್ದು, ಸುಮಾರು 24 ಲಕ್ಷ ಅಭ್ಯರ್ಥಿಗಳು ಭಾಗವಹಿಸಿದ್ದರು. ನಿರೀಕ್ಷಿತ ದಿನಾಂಕಕ್ಕಿಂತ ಹತ್ತು ದಿನ ಮುಂಚಿತವಾಗಿ ಜೂನ್ 4 ರಂದು ಫಲಿತಾಂಶಗಳನ್ನು ಘೋಷಿಸಲಾಗಿತ್ತು. ಫಲಿತಾಂಶದ ನಂತರ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ದುಷ್ಕೃತ್ಯಗಳ ಆರೋಪಗಳು ಕೇಳಿಬಂದವು, ಏಕೆಂದರೆ 67 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗರಿಷ್ಠ ಅಂಕಗಳನ್ನು (720ಕ್ಕೆ 720) ಗಳಿಸಿದ್ದರು. ಅವರಲ್ಲಿ ಕೆಲವರು ಒಂದೇ ಪರೀಕ್ಷಾ ಕೇಂದ್ರಗಳಿಂದ ಬಂದವರು. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬಿಹಾರದಲ್ಲಿ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಕಂಡುಬಂದಿದೆ. ಕೆಲವು ಅಭ್ಯರ್ಥಿಗಳು ಪರೀಕ್ಷೆಯ ಮುನ್ನಾದಿನದಂದು ಪ್ರಶ್ನೆ ಪತ್ರಿಕೆಗಳನ್ನು ಸ್ವೀಕರಿಸಿದ್ದರು.

ಇದನ್ನೂ ಓದಿ: NEET PG : ಪರೀಕ್ಷಾ ಅಕ್ರಮ; ನಾಳೆ ನಿಗದಿಯಾಗಿದ್ದ ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ

ಈ ಆರೋಪಗಳು ಹಲವಾರು ನಗರಗಳಲ್ಲಿ ಪ್ರತಿಭಟನೆಗೆ ಕಾರಣವಾಗಿವೆ. ಕೋರ್ಟ್​ಗಳಲ್ಲಿ ಅರ್ಜಿಗಳನ್ನು ಸಲ್ಲಿಕೆಯಾಗಿವೆ. ಈ ವರ್ಷದ ಜೂನ್ 18 ರಂದು ನಡೆದ ಯುಜಿಸಿ ನೆಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆಯೂ ಸಿಬಿಐ ತನಿಖೆ ನಡೆಸುತ್ತಿದೆ. ಈ ಸಂಬಂಧ ಸಿಬಿಐ ಜೂನ್ 20ರಂದು ಎಫ್ಐಆರ್ ದಾಖಲಾಗಿದೆ.

ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರತೆಯ ಬಗ್ಗೆ ಇತ್ತೀಚಿನ ಆರೋಪಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ 23 ರಂದು ನಡೆಯಬೇಕಿದ್ದ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಮುಂದೂಡಿದೆ

Exit mobile version