ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೀಡು ಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸಾಲು ಸಾಲು ಸಭೆ ನಡೆಸುತ್ತಿದ್ದಾರೆ. ಇದರ ಮಧ್ಯೆಯೇ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದು, ಕರ್ನಾಟಕದ 5 ನಗರಗಳಲ್ಲಿ ಸೇಫ್ ಸಿಟಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು. ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್ ಸಿಟಿ ಯೋಜನೆಯನ್ನು ತಲಾ 200 ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡಬೇಕು ಎಂದು ಅವರು ಕೋರಿದರು.
Had a constructive meeting with the Hon'ble Union Minister for Home Affairs Shri @AmitShah in New Delhi today.
— Siddaramaiah (@siddaramaiah) June 28, 2024
Submitted a letter outlining Karnataka's key demands for strengthening our state's security and development. pic.twitter.com/Dca3KoU1SC
ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ India Reserve Battalion ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೋರಿದರು. ಹೈಕೋರ್ಟಿನ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ Body worn camera ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 Body worn camera ಖರೀದಿಸುವ ಅಗತ್ಯವಿದ್ದು, 100 ಕೋಟಿ ರೂ. ನೆರವು ನೀಡುವಂತೆ ಮನವಿ ಸಲ್ಲಿಸಲಾಯಿತು.
ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ/ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್ ಶಾ ಅವರನ್ನು ಕೋರಲಾಯಿತು. ಪೊಲೀಸ್ ಕ್ಯಾಂಟೀನ್ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು.
ಇದನ್ನೂ ಓದಿ: CM Siddaramaiah: ನಿತಿನ್ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ