Site icon Vistara News

Karnataka Budget 2024 : ಎಲ್ಲ ಜಿಲ್ಲೆಗಳಲ್ಲಿ ಕ್ರಿಟಿಕಲ್ ಕೇರ್​ ಆಸ್ಪತ್ರೆ; ಬಜೆಟ್​ನಲ್ಲಿ ಸಿಎಂ ಘೋಷಣೆ

Arogya Budget

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್​ನಲ್ಲಿ (Karnataka Budget 2024) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಲವಾರು ಕೊಡುಗೆಗಳನ್ನು ಘೋಷಿಸಲಾಗಿದೆ. ತಾಲೂಕು ಮಟ್ಟದಲ್ಲ ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ ಹಾಗೂ ತಾಯಿ ಮತ್ತು ಮಕ್ಕಳ ಆರೋಗ್ಯದ ಕಾಳಜಿಯನ್ನು ವಹಿಸಲಾಗಿದೆ.

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್​ಗಳನ್ನು ಸ್ಥಾಪಿಸುವುದಾಗಿ ಬಜೆಟ್​ನಲ್ಲಿ ಘೋಷಿಸಲಾಗಿದೆ. ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ಹೇಳಿದ್ದಾರೆ. ಮುಂದಿನ ಸಾಲಿನಲ್ಲಿ ಉಳಿದ 9 ಜಿಲ್ಲೆಗಳಲ್ಲಿಯೂ ಕ್ರಿಟಿಕಲ್ ಕೇರ್ ಬ್ಲ್ಯಾಕ್​ಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಿದ್ದಾರೆ. ಇದೇ ರೀತಿ ಇನ್ನೂ ಅನೇಕ ಆರೋಗ್ಯ ಕ್ಷೇತ್ರದ ಯೋಜನೆಗಳನ್ನು ಘೋಷಿಸಲಾಗಿದೆ. ಅವುಗಳ ವಿವರ ಈ ಕೆಳಗಿನಂತಿದೆ.

ವಿಸ್ತಾರ ನ್ಯೂಸ್​ನಲ್ಲಿ ಬಜೆಟ್​ ಲೈವ್ ವೀಕ್ಷಿಸಿ

ತಾಲೂಕು ಆಸ್ಪತ್ರೆಗಳಿಲ್ಲದ ಆನೇಕಲ್, ನೆಲಮಂಗಲ, ಹೊಸಕೋಟೆ, ಶೃಂಗೇರಿ, ಖಾನಾಪುರ, ಶಿರಹಟ್ಟಿ ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ಪ್ರಸಕ್ತ ಸಾಲಿನಲ್ಲಿ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು 280 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ.

ಆರೋಗ್ಯ ಇಲಾಖೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ಉನ್ನತೀಕರಣಕ್ಕೆ 75 ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ಮೂಲಸೌಕರ್ಯಕ್ಕೆ 150 ಕೋಟಿ ರೂಪಾಯಿ

ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಮೂಲಸೌಕರ್ಯ ಕಾಮಗಾರಿಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ.

ಗ್ರಾಮೀಣ ಪ್ರದೇಶದ ಜನರಿಗೆ 24×7 ತುರ್ತು ಆರೋಗ್ಯ ಸೇವೆ ನೀಡಲು ಮುಂದಿನ 2 ವರ್ಷಗಳಲ್ಲಿ 350 ಕೋಟಿ ರೂ.ಗಳ ವೆಚ್ಚದಲ್ಲಿ 25 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸುವ ಭರವಸೆಯನ್ನು ಬಜೆಟ್​ನಲ್ಲಿ ನೀಡಲಾಗಿದೆ.

ಕಲ್ಯಾಣ ಕರ್ನಾಟಕದಲ್ಲಿ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರ

ಕಲ್ಯಾಣ ಕರ್ನಾಟಕ ಭಾಗದಲ್ಲಿ 46 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 221 ಕೋಟಿ ರೂ.ಗಳ ವೆಚ್ಚದಲ್ಲಿ KKRDB ಮೂಲಕ ಸ್ಥಾಪಿಸಲಾಗುವುದು ಎಂದು ಬಜೆಟ್​​ನಲ್ಲಿ ಘೋಷಿಸಲಾಗಿದೆ. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡಲು 6,493 ಆರೋಗ್ಯ ಕ್ಷೇಮ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 199 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಕಟ್ಟಡ ಕಾಮಗಾರಿಗಾಗಿ130 ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗುವುದು ಎಂದು ಬಜೆಟ್​ನಲ್ಲಿ ಭರವಸೆ ನೀಡಲಾಗಿದೆ.

ಇದನ್ನೂ ಓದಿ : Moxy Hotels: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಕ್ಸಿ ಹೋಟೆಲ್ ಆರಂಭ!

ಜಿಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿರುವ ಮಕ್ಕಳ ತಜ್ಞರು, ಮತ್ತು ಕ್ರಿಟಿಕಲ್ ಕೇರ್ ಮೆಡಿಸಿನ್ ತಜ್ಞ ಮತ್ತಿತರ ತಜ್ಞ ವೈದ್ಯರುಗಳ ಸೇವೆಯನ್ನು ಟೆಲಿ-ಐಸಿಯು ವ್ಯವಸ್ಥೆಯ ಮೂಲಕ ತಾಲೂಕು ಆಸ್ಪತ್ರೆಗಳಿಗೆ ಒದಗಿಸಲಾಗುವುದು ಎಂದು ಬಜೆಟ್​ನಲ್ಲಿ ಹೇಳಲಾಗಿದೆ.

ಕಿಮೋಥೆರಪಿ ಕೇಂದ್ರಗಳ ಸ್ಥಾಪನೆ

ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರವನ್ನು ಸ್ಥಾಪನೆ. ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರಗಳು, ಕೆ.ಸಿ. ಜನರಲ್ ಆಸ್ಪತ್ರೆ ಬೆಂಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ Colposcopy ಉಪಕರಣಗಳ ಖರೀದಿಗೆ ಒಟ್ಟಾರೆಯಾಗಿ 21 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ.

ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ STEMI (ತೀವ್ರ ಹೃದ್ರೋಗ) ಚಿಕಿತ್ಸೆಯನ್ನು ಇದಲ್ಲದೇ STEMI and Stroke ಚಿಕಿತ್ಸೆಗಾಗಿ ಥ್ರಂಬೋಲಿಟಿಕ್ ಔಷಧಗಳ (Thrombolytic Drugs) ಸಂಗ್ರಹಣೆಗಾಗಿ 32 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ.

ಕ್ಷಯ ರೋಗ ನಿರ್ಮೂಲನೆಗೆ

2025 ರೊಳಗೆ ಕ್ಷಯರೋಗ ನಿರ್ಮೂಲನೆಗೊಳಿಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕ್ಷಯರೋಗ ತಪಾಸಣೆಗಾಗಿ 87 True-Nat Machines ಗಳನ್ನು ಖರೀದಿಸಲು 6 ಕೋಟಿ ರೂ. ಗಳ ಅನುದಾನ ಒದಗಿಸಲಾಗುವುದು ಎಂದ ಬಜೆಟ್​ ಮೂಲಕ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ Haemophilia ಮತ್ತು Thalassemia ರೋಗಿಗಳಿಗೆ ಸೂಕ್ತ ಚಿಕಿತ್ಸಾ ಸೌಲಭ್ಯಗಳ ಕೊರತೆಯಿರುವುದರಿಂದ ಕಲಬುರಗಿ ಮತ್ತು ಕೊಪ್ಪಳದ ICDT ಕೇಂದ್ರಗಳ ಬಲವರ್ಧನೆಗೆ
7 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ರೋಗಿಗಳಿಗೆ ತುರ್ತು ಸಮಯದಲ್ಲಿ ರಕ್ತ ಪೂರೈಸಲು 50 ಹೊಸ ರಕ್ತ ಶೇಖರಣಾ ಘಟಕಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ಸಂಯೋಜಿತ ಆರೋಗ್ಯ ಪ್ರಯೋಗಾಲಯ

ಮುಂದಿನ 4 ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು (IPHL) ಸ್ಥಾಪಿಸಲಾಗುವುದು. ಹಾಲಿ ವರ್ಷ ಚಿಕ್ಕಮಗಳೂರು, ವಿಜಯನಗರ, ಶಿವಮೊಗ್ಗ, ಬೆಳಗಾವಿ, ಮಂಡ್ಯ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮತ್ತು 2025-26 ನೇ ಸಾಲಿನಲ್ಲಿ ಚಿತ್ರದುರ್ಗ, ಬಾಗಲಕೋಟೆ, ಚಾಮರಾಜನಗರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಉತ್ತರ ಕನ್ನಡ ಮತ್ತು ಗದಗ ಜಿಲ್ಲೆಗಳಲ್ಲಿ ಪ್ರಯೋಗಾಲಯವನ್ನು (IPHL) ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಹುನಗುಂದ, ಸಿರಾ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. ಇದಕ್ಕೆ ಒಟ್ಟಾರೆಯಾಗಿ 11 ಕೋಟಿ ರೂ.ಗಳ ಅನುದಾನವನ್ನು ನೀಡಲಾಗುವುದು ಎಂದು ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಪ್ರಯೋಗಾಲಯ

ಬೆಂಗಳೂರಿನಲ್ಲಿ ಬಡಜನತೆಗೆ ಉಚಿತ ಪ್ರಯೋಗಾಲಯ ಸೇವೆಯನ್ನು ಒದಗಿಸಲು Hub and Spoke ಮಾದರಿಯಲ್ಲಿ 430 ಪ್ರಯೋಗಾಲಯಗಳ ಸ್ಥಾಪನೆಗೆ ಮುಂದಿನ ಎರಡು ವರ್ಷಗಳಲ್ಲಿ 20 ಕೋಟಿ ರೂ. ಗಳ ಅನುದಾನವನ್ನು ನೀಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ.

ಮಧುಮೇಹ ನಿಯಂತ್ರಣಕ್ಕಾಗಿ ಸಾರ್ವಜನಿಕರಿಗೆ ಆಯುಷ್ ಚಿಕಿತ್ಸೆ ನೀಡಲು ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದು ಆಯುರ್ವೇದ ಮಧುಮೇಹ ಘಟಕವನ್ನು ಸ್ಥಾಪಿಸಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ.

Exit mobile version