ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿಗೆ ತರುವಾಗ ನೂರಾರು ಕೋಟಿ ರೂಪಾಯಿ ಹಗರಣ (Delhi Excise Policy Case) ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಇ.ಡಿ ಅಧಿಕಾರಿಗಳು ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ಇನ್ನು, ದೆಹಲಿ ಅಬಕಾರಿ ನೀತಿ ಹಗರಣದ ಕಿಂಗ್ ಪಿಂಗ್ ಅರವಿಂದ್ ಕೇಜ್ರಿವಾಲ್ ಎಂದು ಕೋರ್ಟ್‌ಗೆ ಇ.ಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಲ್ಲದೆ, 10 ದಿನಗಳವರೆಗೆ ಕಸ್ಟಡಿಗೆ ನೀಡಬೇಕು ಎಂದು ಮನವಿ ಮಾಡಿದ್ದು, ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ.
ಇ.ಡಿ ಅಧಿಕಾರಿಗಳು ಕೋರ್ಟ್‌ಗೆ ತಿಳಿಸಿದ್ದೇನು?
- ಅಬಕಾರಿ ನೀತಿ ಜಾರಿ ವೇಳೆ ಸುಮಾರು 100 ಕೋಟಿ ರೂಪಾಯಿ ಅಕ್ರಮ ನಡೆದಿದೆ
- ಅಬಕಾರಿ ನೀತಿ ಜಾರಿ ಹಗರಣದ ಕಿಂಗ್‌ಪಿನ್ ಎಂದರೆ ಅರವಿಂದ್ ಕೇಜ್ರಿವಾಲ್
- ಹವಾಲ ದಂಧೆ ಮೂಲಕವೇ 45 ಕೋಟಿ ರೂಪಾಯಿ ಅಕ್ರಮ ನಡೆದಿದೆ
- ಹವಾಲ ಹಣವನ್ನು ಗೋವಾ ಚುನಾವಣೆಯಲ್ಲಿ ಬಳಸಲಾಗಿದೆ
- ಉದ್ಯಮಿಗಳಿಂದ ಲಂಚದ ಬೇಡಿಕೆ ಪ್ರಕರಣಕ್ಕೆ ಅರವಿಂದ್ ಕೇಜ್ರಿವಾಲ್ ರೂವಾರಿ
- ಇ.ಡಿ ಅಧಿಕಾರಿಗಳ ಪರಿಶೀಲನೆ ವೇಳೆ ದೆಹಲಿ ಸಿಎಂ ಸಹಕಾರ ನೀಡಿಲ್ಲ
- ಪ್ರತಿ ಬಾರಿ ಸಮನ್ಸ್ ನೀಡಿದಾಗಲೂ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿಲ್ಲ
ಅರವಿಂದ್ ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. “ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಹಾಲಿ ಮುಖ್ಯಮಂತ್ರಿಯೊಬ್ಬರನ್ನು ಬಂಧಿಸಲಾಗಿದೆ. ಆಪ್ ಸರ್ಕಾರದ ನಾಲ್ವರು ಪ್ರಮುಖರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಯಾರನ್ನೂ ಬಂಧಿಸುವ ಅವಶ್ಯಕತೆಯೇ ಇಲ್ಲ. ಅವರಿಗೆ ಕಾರಣವನ್ನೇ ತಿಳಿಸದೆ ಬಂಧಿಸುವ ಪ್ರಕರಣವೂ ಇದಾಗಿಲ್ಲ” ಎಂದು ತಿಳಿಸಿದರು.
ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ ಬಳಿಕ ಅರವಿಂದ್ ಕೇಜ್ರಿವಾಲ್ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. “ನಾನು ನನ್ನ ಇಡೀ ಜೀವನವನ್ನೇ ದೇಶಕ್ಕಾಗಿ ಮುಡಿಪಾಗಿಟ್ಟಿದ್ದೇನೆ. ಸತ್ತರೂ ಅಷ್ಟೇ, ಇದ್ದರೂ ಅಷ್ಟೇ, ನನ್ನ ಜೀವನ ದೇಶಕ್ಕಾಗಿಯೇ” ಎಂದು ಮಾಧ್ಯಮಗಳಿಗೆ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಏನಿದು ಪ್ರಕರಣ?
ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ.5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಕೆ. ಕವಿತಾ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಬಂಧನ ‘ಕರ್ಮದ ಫಲ’ ಎಂದ ಪ್ರಣಬ್ ಮುಖರ್ಜಿ ಪುತ್ರಿ; ಏನದು ಕರ್ಮ?
ಜಲಮಂಡಳಿ ಕೇಸ್‌ನಲ್ಲೂ ಸಮನ್ಸ್
ಅರವಿಂದ್ ಕೇಜ್ರಿವಾಲ್ ವಿರುದ್ಧ ಅಬಕಾರಿ ನೀತಿ ಹಗರಣ ಮಾತ್ರವಲ್ಲ, ದೆಹಲಿ ಜಲ ಮಂಡಳಿ ಗುತ್ತಿಗೆ ಮಂಜೂರು ಮಾಡುವಾಗ ಕೂಡ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಜಾರಿ ನಿರ್ದೇಶನಾಲಯವು ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. ಮತ್ತೊಂದೆಡೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇ.ಡಿ ಸಲ್ಲಿಸಿದ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಇದರಿಂದ ಅವರು ತಾತ್ಕಾಲಿಕವಾಗಿ ರಿಲೀಫ್ ಪಡೆದಿದ್ದರು. ಆದರೆ, ದೆಹಲಿ ಹೈಕೋರ್ಟ್ ಇವರಿಗೆ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿತ್ತು. ಈಗ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ