Site icon Vistara News

Hemant Nimbalkar: ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸುರಳ್ಕರ್ ವಿಕಾಸ್ ಕಿಶೋರ್ ನೇಮಕ; ಹೇಮಂತ್ ನಿಂಬಾಳ್ಕರ್ ವರ್ಗಾವಣೆ

Hemant Nimbalkar

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ (Hemant Nimbalkar) ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಅವರ ಸ್ಥಾನಕ್ಕೆ 2012ರ ಐಎಎಸ್‌ ಬ್ಯಾಚ್‌ನ ಸುರಳ್ಕರ್ ವಿಕಾಸ್ ಕಿಶೋರ್ (Suralkar Vikas Kishor) ಅವರನ್ನು ನೇಮಿಸಲಾಗಿದೆ. ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡುವಂತೆ ಬಿಜೆಪಿ ದೂರು ನೀಡಿದ ಬೆನ್ನಲ್ಲೇ ವರ್ಗಾವಣೆ ಮಾಡಿರುವುದು ಕಂಡುಬಂದಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ಗಮಿತ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ನೂತನ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಅವರಿಗೆ ಶನಿವಾರ ಸಂಜೆ ಅಧಿಕಾರ ಹಸ್ತಾಂತರಿಸಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ಸರ್ಕಾರ ಶನಿವಾರ ಸಂಜೆ ನೇಮಿಸಿದ್ದು, ನೂತನ ಆಯುಕ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹುದ್ದೆಗೆ ಜೊತೆಗ ಬಿಬಿಎಂಪಿ ವಿಶೇಷ ಆಯುಕ್ತರ ಸಮವರ್ತಿತ ಹುದ್ದೆಯಲ್ಲಿಯೂ ಮುಂದುವರಿಯಲಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರುವುದರ ಮೂಲಕ ರಾಜ್ಯದಲ್ಲಿ ಹೆಸರುವಾಸಿಯಾಗಿದ್ದ ಸೂರಳ್ಕರ್ ವಿಕಾಸ್ ಕಿಶೋರ್ ಅವರು ಕೊಪ್ಪಳದಲ್ಲಿ ಜಿಲ್ಲಾಧಿಕಾರಿಗಳಾಗಿ, ಯಾದಗಿರಿ, ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ಜಿಪಂ ಸಿಇಒ ಅವರಾಗಿ ಕರ್ತವ್ಯ ನಿರ್ವಹಿಸಿದ್ದರು.

ಇದನ್ನೂ ಓದಿ | Lok Sabha Election 2024: ಜಯಪ್ರಕಾಶ್‌ ಹೆಗ್ಡೆ ವಿರುದ್ಧ ಮತ್ತೊಂದು ನೀತಿ ಸಂಹಿತಿ ಉಲ್ಲಂಘನೆ ದೂರು

ಹೇಮಂತ್ ನಿಂಬಾಳ್ಕರ್ ವಿರುದ್ಧ ದೂರು ನೀಡಿದ್ದ ಬಿಜೆಪಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಮಿಷನರ್ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲು ಕೋರಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿತ್ತು. ತಮ್ಮ ಕಚೇರಿಯನ್ನು ಬಳಸಿಕೊಂಡು ಪತ್ನಿ, ಉತ್ತರ ಕನ್ನಡದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ (Anjali Nimbalkar) ಪರವಾಗಿ ಮತ ನೀಡಲು ಕೇಳುತ್ತಿರುವುದಾಗಿ ಮಾಹಿತಿ ಸಿಕ್ಕಿದೆ. ಆದ್ದರಿಂದ ತಕ್ಷಣ ಅವರನ್ನು ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ ಮಾಡಿತ್ತು. ರಾಜ್ಯದ ಒಳಗಡೆ ಇದ್ದರೆ ಮತ್ತೆ ಪ್ರಭಾವ ಬಳಸುವ ಸಾಧ್ಯತೆ ಇದ್ದು, ಅವರಿಗೆ ಕರ್ನಾಟಕದಿಂದ ಹೊರಗಡೆ ಕೆಲಸ ಮಾಡಲು ಅವಕಾಶ ಕೊಡಿ ಎಂದು ಬಿಜೆಪಿ ನಾಯಕರು ತಿಳಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version