ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಲು (Jobs For Kannadigas) ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಬೆಂಗಳೂರು ಸೇರಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವೇದಿಕೆಯಿಂದ (Karave Protest) ಸೋಮವಾರ ಬೆಳಗ್ಗೆ ಪ್ರತಿಭಟನೆಗಳು ಆರಂಭವಾಗಿವೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಕರವೇ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಳಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ ಬಳಿ ಕುವೆಂಪು ಪುತ್ಥಳಿಗೆ ಟಿ.ಎ. ನಾರಾಯಣ ಗೌಡರು ಮಾಲಾರ್ಪಣೆ ಮಾಡುವ ಮೂಲಕ ಹೋರಾಟಕ್ಕೆ ಚಾಲನೆ ನೀಡಿದರು. ಗಾಂಧಿನಗರದ ಕರವೇ ಕೇಂದ್ರ ಕಚೇರಿಯಿಂದ ಸಾವಿರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಮೂಲಕ ಫ್ರೀಡಂ ಪಾರ್ಕ್ ಸೇರಿದರು. ನಂತರ ಅಲ್ಲಿ ಹೋರಾಟ ಆರಂಭಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಮೆಟ್ರೋ ಸ್ಟೇಷನ್, ಬಸ್ ನಿಲ್ದಾಣ, ಮಾಲ್‌ಗಳ ಬಳಿ ಕೂಡ ಬಂದೋಬಸ್ತ್ ಮಾಡಲಾಗಿದೆ.
ಪೋಲಿಸರು ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಿದರೆ ಪ್ರತಿಭಟನೆ ಉಗ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ. ಈಗಾಗಲೇ ಈ ಬಗ್ಗೆ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ಎಚ್ಚರಿಕೆ ಕೊಟ್ಟಿದ್ದಾರೆ. ನಾವು ಫ್ರೀಡಂ ಪಾರ್ಕಿನಲ್ಲಿ ಧರಣಿ ಬಿಟ್ಟು ಬೇರೆ ಯೋಜನೆ ಮಾಡಿಲ್ಲ. ಹೋರಾಟಗಳಲ್ಲಿ ಎರಡು ವಿಧ, ಒಂದು ಶಾಂತಿ, ಮತ್ತೊಂದು ಕ್ರಾಂತಿ. ಇಂದು ನಾವು ಶಾಂತಿಯುತವಾಗಿ ಹೋರಾಟ ಮಾಡಲು ಕರೆ ಕೊಟ್ಟಿದ್ದೇವೆ. ಒಂದು ತಿಂಗಳೊಳಗೆ ಸರೋಜಿನಿ ಮಹಿಷಿ ವರದಿ ಅನುಷ್ಠಾನ ಮಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಯಲಿದೆ. ಈ ಸಂಬಂಧ ಸಿಎಂ ಭೇಟಿಗೆ ಮನವಿ ಮಾಡಿದ್ದೇವೆ. ರ‍್ಯಾಲಿ, ಮೆರವಣಿಗೆ ಮಾಡಬಾರದು ಎಂತಲೂ ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನು ಕರವೇ ಪ್ರತಿಭಟನೆಗೆ ಸ್ಯಾಂಡಲ್‌ವುಡ್ ಸಾಥ್ ನೀಡಿದೆ. ಸ್ಯಾಂಡಲ್‌ವುಡ್ ನಟ ಪ್ರೇಮ್, ನಟಿ ಪೂಜಾಗಾಂಧಿ ಮತ್ತಿತರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ.
ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ.100 ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು. ಇತರ ಹುದ್ದೆಗಳಲ್ಲಿ ಶೇ. 80ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು. ಹಾಗೆಯೇ ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ 100 ಪ್ರತಿಶತ ಮೀಸಲಾತಿ ನೀಡಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಇದನ್ನೂ ಓದಿ | Dengue Fever: ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಒಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ
ಬೆಳಗಾವಿಯಲ್ಲಿ ಸರ್ಕಾರದ ವಿರುದ್ಧ ಕರವೇ ರಣಕಹಳೆ
ಬೆಳಗಾವಿ: ಬೆಳಗಾವಿಯಲ್ಲೂ ಸರ್ಕಾರದ ವಿರುದ್ಧ ಕರವೇ ರಣಕಹಳೆ ಮೊಳಗಿದೆ. ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಮೂಲ ತೆರಳಿ ಹೋರಾಟ ನಡೆಸಿದರು.
ಡಾ, ಸರೋಜನಿ ಮಹಿಷಿ ವರದಿ ಜಾರಿ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದ ಕಾರ್ಯಕರ್ತರು, ಡಿಸಿ ಮುಖೇನ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪರರಾಜ್ಯದವರ ಹಾವಳಿ ತಡೆಯುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಕನ್ನಡಿಗರಿಗೆ ಮಾತ್ರ ಶೇ.100 ಉದ್ಯೋಗ ನೀಡುವಂತೆ ಒತ್ತಾಯಿಸಲಾಗಿದೆ.
ಕೋಟೆ ನಾಡಿನಲ್ಲಿ ಸಿಡಿದೆದ್ದ ಕರವೇ
ಚಿತ್ರದುರ್ಗ: ಸರ್ಕಾರದ ವಿರುದ್ಧ ಕೋಟೆ ನಾಡಿನಲ್ಲಿ ಕರವೇ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ನಗರದ ಡಿಸಿ ವೃತ್ತದಲ್ಲಿ ನಾರಾಯಣಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕಾರ್ಪೊರೇಟ್ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕೆ ಆಗ್ರಹಿಸಿದರು. ರಾಜ್ಯದ ನಿರುದ್ಯೋಗಿ ಯುವಕರಿಗೆ ಕಂಪನಿಗಳಲ್ಲಿ ಉದ್ಯೋಗ ನೀಡಬೇಕು, ನಮಗೆ ಉದ್ಯೋಗಿ ಕೊಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ ಎಂದು ಘೋಷಣೆ ಕೂಗಿದರು.
ಹಾವೇರಿಯಲ್ಲಿ ಕರವೇ ಪ್ರತಿಭಟನೆ
ಹಾವೇರಿ: ಹಾವೇರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರವೇಯಿಂದ ಪ್ರತಿಭಟನೆ ನಡೆಯಿತು. ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕನ್ನಡಿಗರಿಗೆ ಉದ್ಯೋಗ ನೀಡುವ ಕಾಯ್ದೆ ರೂಪಿಸಲು ಒತ್ತಾಯಿಸಿ, ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.
ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿ
ಯಾದಗಿರಿ: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಕರವೇಯಿಂದ ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಕರವೇ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ಡಾ.ಸರೋಜಿನಿ ಮಹಿಷಿ ವರದಿ ಜಾರಿ ಮಾಡಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.
ಇದನ್ನೂ ಓದಿ : Dengue Fever: ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಒಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ
ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ
ಧಾರವಾಡ: ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ಧಾರವಾಡದ ಡಿಸಿ ಕಚೇರಿ ಎದುರು ಕರವೇ ಬಣದಿಂದ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರ ಈ ಕೂಡಲೇ ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.