ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ (Government workers) ವೇತನ ಪರಿಷ್ಕರಣೆಗೆ ಏಳನೇ ವೇತನ ಆಯೋಗವನ್ನು (7th pay commission) ರಚಿಸಲಾಗಿದ್ದು, ಆಯೋಗದ ವರದಿ ಸ್ವೀಕರಿಸಿದ ನಂತರ ಪರಿಶೀಲಿಸಿ ಅವುಗಳನ್ನು ಜಾರಿಗೊಳಿಸಲು ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ರಾಜ್ಯ ಬಜೆಟ್‌ನಲ್ಲಿ (Karnataka Budget 2024) ಭರವಸೆ ನೀಡಿದ್ದಾರೆ.
ಶೇ. 40ರಷ್ಟು ಹೆಚ್ಚಳದೊಂದಿಗೆ 7ನೇ ವೇತನ ಪರಿಷ್ಕರಣೆಯನ್ನು ಕೂಡಲೇ ಜಾರಿಗೊಳಿಸುವುದು, ರಾಜ್ಯದ ಎಲ್ಲಾ ನೌಕರರಿಗೂ PFRDA ಕಾಯ್ದೆ /NPS ಪದ್ದತಿ ರದ್ದುಪಡಿಸಿ ನಿಶ್ಚಿತ ಪಿಂಚಣಿ ಯೋಜನೆ (OPS) ಮರುಸ್ಥಾಪಿಸುವುದು, ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವುದು, ಗುತ್ತಿಗೆ/ಹೊರಗುತ್ತಿಗೆ ಅರೆಕಾಲಿಕ ನೇಮಕಾತಿಯಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಸುಪ್ರೀಂ ಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು, ಇವರ ವೇತನವನ್ನು ಸರ್ಕಾರದಿಂದ ನೇರವಾಗಿ ಖಾತೆಗೆ ಜಮಾ ಮಾಡುವುದು, ಇವರುಗಳನ್ನು ಎಲ್ಲಾ ನೇರ ನೇಮಕಾತಿಗಳಲ್ಲಿ ಕಾಯಂಗೊಳಿಸುವುದು. ಹೊರಗುತ್ತಿಗೆ ನೇಮಕಾತಿಯನ್ನು ಕೈಬಿಟ್ಟು ಕಾಯಂ ನೇಮಕಾತಿ ಮಾಡಿಕೊಳ್ಳುವುದು ಮುಂತಾದ ಬೇಡಿಕೆಗಳನ್ನು ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಮುಂದಿಟ್ಟಿದ್ದರು.
ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನೌಕರರು ಪ್ರತಿಭಟನಾ ಧರಣಿಯನ್ನೂ ನಡೆಸಿದ್ದರು. ನಂತರ ಮುಖ್ಯಮಂತ್ರಿಗಳು ನೌಕರರ ಸಂಘಟನೆಗಳ ಪದಾಧಿಕಾರಿಗಳನ್ನು ಕರೆದು ಮಾತುಕತೆ ನಡೆಸಿ, ಹಲೆ ಪಿಂಚಣಿ ವ್ಯವಸ್ಥೆಯ ಮರುಜಾರಿ ಸೇರಿದಂತೆ ಕೆಲವು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು.
ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ನಲ್ಲಿ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ವಿಚಾರದಲ್ಲಿ ನೀಡಿದ ಇತರ ಭರವಸೆಗಳು ಹೀಗಿವೆ:
1) ಆಡಳಿತ ಸುಧಾರಣೆ ಒಂದು ನಿರಂತರ ಪ್ರಕ್ರಿಯೆಯಾಗಿದೆ. ಆಡಳಿತ ಸುಧಾರಣಾ ಆಯೋಗ-2 ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಕೈಗೊಳ್ಳಬಹುದಾದ ಸುಧಾರಣಾ ಕ್ರಮಗಳ ಬಗ್ಗೆ ಸಲ್ಲಿಸಿರುವ ವರದಿಗಳನ್ನು ಪರಿಶೀಲಿಸಿ, ಅವುಗಳ ಅನುಷ್ಠಾನದ ಕುರಿತು ಪರಿಶೀಲಿಸಲು ಸರ್ಕಾರ ಆಡಳಿತ ಸುಧಾರಣಾ ಆಯೋಗವನ್ನು ರಚಿಸಿದೆ. ಈ ಆಯೋಗವು ಆಡಳಿತ ಸುಧಾರಣಾ ಕ್ರಮಗಳ ಅನುಷ್ಠಾನದ ಮೇಲ್ವಿಚಾರಣೆ ಮಾಡಲಿದೆ.
2) ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ವಿವಿಧ ಕಾನೂನಿನಡಿಯಲ್ಲಿ 7,214 ಸಂಸ್ಥೆಗಳ ಶಾಸನಬದ್ಧ ಲೆಕ್ಕಪರಿಶೋಧಕರಾಗಿರುತ್ತದೆ. ಈ ಸಂಸ್ಥೆಗಳ ಲೆಕ್ಕಪರಿಶೋಧನೆಯಲ್ಲಿ ಏಕರೂಪತೆಯನ್ನು ತರಲು ಲೆಕ್ಕಪರಿಶೋಧನಾ ಕಾಯ್ದೆಯನ್ನು ಜಾರಿಗೆ ತರಲಾಗುವುದು.
3) ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳಿಗೆ ನೇರ ಪರಿಹಾರ ಒದಗಿಸುವ ದೃಷ್ಟಿಯಿಂದ ಜನಸ್ಪಂದನ ಕಾರ್ಯಕ್ರಮವನ್ನು ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ನಿಯಮಿತವಾಗಿ ಆಯೋಜಿಸಲಾಗುತ್ತಿದೆ. ಈವರೆಗೆ ರಾಜ್ಯಮಟ್ಟದ ಎರಡು ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಒಟ್ಟಾರೆ 18,000 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮೊದಲ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅಹವಾಲುಗಳ ಪೈಕಿ ಶೇ.94ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಎರಡನೇ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಿದ ಅಹವಾಲುಗಳನ್ನೂ ಸಹ ನಿಗದಿತ ಕಾಲಮಿತಿಯಲ್ಲಿ ಬಗೆಹರಿಸಲಾಗುವುದು.
ಇದನ್ನೂ ಓದಿ: Karnataka Budget 2024 : ನಯಾಪೈಸೆ ಪ್ರಯೋಜನ ಇಲ್ಲದ ಬಜೆಟ್, ಉತ್ತರಕ್ಕೆ ಒಂದು ರೂ. ಕೂಡಾ ಇಲ್ಲ; ಬಿ.ವೈ ವಿಜಯೇಂದ್ರ