ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Karnataka Politics) ಗೆದ್ದು ಸಂಸತ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ಮಾಜಿ ಸಿಎಂಗಳಾದ ಎಚ್.ಡಿ.ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಇಬ್ಬರು ನಾಯಕರು ಪ್ರತ್ಯೇಕವಾಗಿ ಭೇಟಿಯಾಗಿ, ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ಎಚ್.ಡಿ.ಕುಮಾರಸ್ವಾಮಿ ಹಾಗೂ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ಸಲ್ಲಿಕೆ ವೇಳೆ ಸ್ಪೀಕರ್ ಜತೆಗೆ ಕುಮಾರಸ್ವಾಮಿ ಉಭಯ ಕುಶಲೋಪರಿ ನಡೆಸಿದರು. ಇದೇ ವೇಳೆ ಸ್ಪೀಕರ್ ಅವರು ಕುದುರೆಮುಖ ವಿಚಾರ ಕೇಳಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಒಂದಷ್ಟು ವಿವರಣೆ ನೀಡಿದರು. ಅಲ್ಲದೇ ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಪುನಶ್ಚೇತನದ ಬಗ್ಗೆಯೂ ಮಾತುಕತೆ ನಡೆಸಿದರು.
ರಾಜೀನಾಮೆ ಬಳಿಕ ಎಚ್.ಡಿ. ಕುಮಾರಸ್ವಾಮಿ ಅವರು ಮಾತನಾಡಿ, ಸಂಸತ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಎರಡರಲ್ಲಿ ಒಂದು ಸ್ಥಾನ ಉಳಿಸಿಕೊಳ್ಳಬೇಕು. ಹೀಗಾಗಿ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಮುಂದೆ ಮಾತನಾಡೋಣ ಎಂದರು.
ಕುಮಾರಸ್ವಾಮಿ ಚನ್ನಪಟ್ಟಣ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಎಂಬ ಡಿ.ಕೆ. ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿ, ಪಾಪ ದೊಡ್ಡವರು ಅವರೇನೋ ಮಾತನಾಡಿಕೊಳ್ಳಲಿ. ಅವರು ಏನು ಬೇಕಾದರೂ ಮಾತನಾಡಲಿ ಬಿಡಿ ಎಂದು ಡಿಕೆಸುಗೆ ತಿರುಗೇಟು ನೀಡಿದರು.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಹಾವೇರಿ ಲೋಕಸಭೆ ಕ್ಷೇತ್ರದಿಂದ ಸಂಸದನಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ನಿರಂತರವಾಗಿ 4 ಬಾರಿ ಶಾಸಕನಾಗಿ ಆಯ್ಕೆ ಮಾಡಿ ಅಭಿವೃದ್ಧಿ ಮಾಡಲು ಅವಕಾಶ ಮಾಡಿಕೊಟ್ಟ ಶಿಗ್ಗಾಂವಿ ಕ್ಷೇತ್ರದ ಜನತೆಗೆ ಕೃತಜ್ಞತೆ ಹೇಳುವೆ ಎಂದರು.
ಇದನ್ನೂ ಓದಿ | Actor Darshan: ಕೃಷಿ ಇಲಾಖೆ ರಾಯಭಾರಿ ಹುದ್ದೆಯಿಂದ ಕೊಲೆ ಆರೋಪಿ ದರ್ಶನ್ ವಜಾ!
ಶಿಗ್ಗಾಂವಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಇನ್ನಷ್ಟು ಅಭಿವೃದ್ಧಿಗೆ ಈಗಾಗಲೇ ಸಿಎಂ ಅವರ ಜೊತೆ ಮಾತನಾಡಿದ್ದೇನೆ. ಸಿಎಂ ಬೆಂಗಳೂರಿಗೆ ಬಂದ ತಕ್ಷಣ ಅವರ ಬಳಿ ಚರ್ಚಿಸಿ ಅಭಿವೃದ್ಧಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಚರ್ಚಿಸುತ್ತೇನೆ. ಹಾವೇರಿ ಲೋಕಸಭೆ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಕೆಲಸ ಮಾಡುವೆ. ಸಂಸತ್ತಿನಲ್ಲಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಹೆಚ್ಚಿನ ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುವೆ ಎಂದರು.