ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ (Corrupt Officers) ಲೋಕಾಯುಕ್ತ ಶಾಕ್ ಮುಟ್ಟಿಸಿದೆ. ರಾಜ್ಯದ ನಾನಾ ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳ ತಂಡಗಳು ದಾಳಿ (Lokayukta Raid) ನಡೆಸಿ, ಭ್ರಷ್ಟಾಚಾರ ಆರೋಪಿತ ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳಲ್ಲಿ ಪರಿಶೀಲನೆ ಆರಂಭಿಸಿವೆ.
9 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. 11 ಪ್ರಕರಣಗಳಿಗೆ ಸಂಬಂಧಿಸಿ ಸುಮಾರು 100 ಅಧಿಕಾರಿಗಳು 56 ಕಡೆ ನಡೆದ ದಾಳಿಗಳಲ್ಲಿ ಪಾಲ್ಗೊಂಡಿದ್ದಾರೆ. ಮಂಡ್ಯ, ಕಲಬುರಗಿ, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಕೋಲಾರ, ಮೈಸೂರು, ಹಾಸನ, ಬೆಂಗಳೂರು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು, ಬೆಳಗಾಗುವ ಮುನ್ನವೇ ತಂಡ ಕಟ್ಟಿಕೊಂಡು ದಾಳಿ ನಡೆಸಿದರು. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಇವರ ತಪಾಸಣೆ ನಡೆದಿದೆ.
ಕಲಬುರಗಿಯಲ್ಲಿ ಬಿಬಿಎಂಪಿ ರೆವಿನ್ಯೂ ಅಧಿಕಾರಿ ಬಸವರಾಜ ಮಾಗಿ, ಮಂಡ್ಯದಲ್ಲಿ ಗ್ರಾಮೀಣ ನೀರು ಸರಬರಾಜು ನಿವೃತ್ತ ಎಕ್ಷಿಕ್ಯೂಟಿವ್ ಇಂಜಿನಿಯರ್ ಶಿವರಾಜು ಎಸ್., ಚಿತ್ರದುರ್ಗದಲ್ಲಿ ಸಣ್ಣ ನೀರಾವರಿ ಇಲಾಖೆ ನಿವೃತ್ತ ಚೀಫ್ ಇಂಜಿನಿಯರ್ ಎಂ. ರವೀಂದ್ರ, ಧಾರವಾಡದಲ್ಲಿ ಪ್ರಾಜೆಕ್ಟ್ ಡೈರೆಕ್ಟರ್ ಶೇಖರ ಗೌಡ, ಬೆಳಗಾವಿಯಲ್ಲಿ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಮಹಾದೇವ ಬನ್ನೂರ್, ದಾವಣೆಗೆರೆಯಲ್ಲಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಡಿ.ಎಚ್ ಉಮೇಶ್, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಎಂ.ಎಸ್ ಪ್ರಭಾಕರ್, ಮೈಸೂರಿನಲ್ಲಿ ಸೂಪರಿಂಟೆಂಡೆಂಟ್ ಇಂಜಿಯರ್ ಮಹೇಶ್ ಕೆ., ಹಾಸನದಲ್ಲಿ ಸೆಕ್ರೆಟರಿ ಎನ್.ಎಂ ಜಗದೀಶ್, ಚಿತ್ರದುರ್ಗದಲ್ಲಿ ಸೂಪರಿಂಟೆಂಡೆಂಟ್ ಇಂಜಿಯರ್ ಕೆ.ಜಿ ಜಗದೀಶ್ ಇವರುಗಳ ಮನೆಗಳು, ಕಚೇರಿಗಳು ಹಾಗೂ ಇತರ ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ನಿನ್ನೆ ತಾನೇ ವಾಲ್ಮೀಕಿ ಹಗರಣದಲ್ಲಿ ಆರೋಪಿಗಳಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ, ಶಾಸಕ ಬಸವನಗೌಡ ದದ್ದಲ್ ಮನೆಗಳ ಮೇಲೆ ಇಡಿ, ಸಿಬಿಐ ರೇಡ್ ನಡೆದಿತ್ತು. ಯೂನಿಯನ್ ಬ್ಯಾಂಕ್ ಅಧಿಕಾರಿಗಳ ಮನೆಗಳ ಮೇಲೆ ಇಡಿ, ಆರ್‌ಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿಯ ಪರಿಶೀಲನೆ ಇನ್ನೂ ನಡೆಯುತ್ತಿರುವಾಗಲೇ ಲೋಕಾಯುಕ್ತ ರೇಡ್ ನಡೆದಿದೆ.
ಮಾಜಿ ಸಚಿವ ನಾಗೇಂದ್ರ ಆಪ್ತ ಇಡಿ ವಶಕ್ಕೆ
ಬೆಂಗಳೂರು: ಮಾಜಿ ಸಚಿವ ಬಿ. ನಾಗೇಂದ್ರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ (ED Raid) ನಡೆಸಿದ್ದು, ಈ ವೇಳೆ ನಾಗೇಂದ್ರ ಅವರ ಪಿಎ ಹರೀಶ್‌ರನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಅವರನ್ನು ಇಡಿ ಕಚೇರಿಗೆ ಅಧಿಕಾರಿಗಳು ಕರೆದೊಯ್ದಿದ್ದಾರೆ. ಇನ್ನು ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಎದುರಿಸುತ್ತಿರುವ ಮಾಜಿ ಸಚಿವ ನಾಗೇಂದ್ರ ಅವರ ಬಂಧನ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಬಿ. ನಾಗೇಂದ್ರ ಹಾಗೂ ಬಸವನಗೌಡ ದದ್ದಲ್ ನಿವಾಸಗಳ ಜತೆಗೆ ಮೂವರು ಯೂನಿಯನ್ ಬ್ಯಾಂಕ್ ಸಿಬ್ಬಂದಿ ಮನೆಯ ಮೇಲೂ ಇಡಿ ದಾಳಿ ನಡೆಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರವಾದ್ದರಿಂದ ವಸಂತನಗರದಲ್ಲಿರುವ ವಾಲ್ಮೀಕಿ ನಿಗಮದ ಕಚೇರಿಗೂ ಇಡಿ ರೇಡ್ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಇಡಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದೆ.
ಆರೋಪಿ ಸತ್ಯನಾರಾಯಣ್‌ನಿಂದ ವಾಲ್ಮೀಕಿ ನಿಗಮದ ಎಂ.ಡಿ. ಪದ್ಮನಾಭ್ ಹಣ ತಂದಿದ್ದರು ಎನ್ನಲಾಗಿದೆ. ಆ ಹಣದಲ್ಲಿ ನಾಗೇಂದ್ರ ಪಿಎ ಹರೀಶ್ 25 ಲಕ್ಷ ಹಣ ಪಡೆದಿದ್ದ. ದದ್ದಲ್ ಪಿಎ ಪಂಪಣ್ಣ ಕೂಡ 55 ಲಕ್ಷ ಹಣ ಪಡೆದಿದ್ದ. ಈ ಬಗ್ಗೆ ಪರಿಶೀಲನೆ ವೇಳೆ ಹರೀಶ್ ಬಾಯ್ಬಿಟ್ಟ ಹಿನ್ನೆಲೆಯಲ್ಲಿ ಆತನನ್ನು ಇಡಿ ವಶಕ್ಕೆ ಪಡೆದಿದೆ. ಪ್ರಕರಣದಲ್ಲಿ ಸಚಿವ ನಾಗೇಂದ್ರ ಪರ 50 ರಿಂದ 60 ಕೋಟಿ ವ್ಯವಹಾರ ನಡೆದಿರುವ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗೆ ಹರೀಶ್‌ನ ವಶಕ್ಕೆ ಪಡೆದಿದ್ದು, ಹರೀಶ್ ಹೇಳಿಕೆ ಆಧರಿಸಿ ಮಾಜಿ ಸಚಿವ ನಾಗೇಂದ್ರ ಬಂಧನ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ | ED Raid: ಇಡಿ- ಸಿಬಿಐ ಮೆಗಾ ದಾಳಿ; 80 ಅಧಿಕಾರಿಗಳಿಂದ ರೇಡ್, ಬ್ಯಾಂಕ್ ಸಿಬ್ಬಂದಿ ಮನೆ ಸೀಜ್! ಬೆಳಗ್ಗೆಯಿಂದ ಏನೇನಾಯ್ತು?