ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna Case) ಲೈಂಗಿಕ ಹಗರಣ (Pen Drive Case) ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಎಸ್ಐಟಿ (SIT) ಅಧಿಕಾರಿಗಳೊಂದಿಗೆ ಇಂದು ಮಹತ್ವದ ಸಭೆ ನಡೆಸಿದರು. ಪ್ರಕರಣದ ಸಂಬಂಧ ಇದುವರೆಗಿನ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದಿದ್ದು, ಇನ್ನಷ್ಟು ತೀವ್ರವಾದ ತನಿಖೆ ನಡೆಸಲು ಖಡಕ್ ಸೂಚನೆ ನೀಡಿದರು. ಇದಕ್ಕೂ ಮುನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಸಿಎಂಗೆ ಪತ್ರ ಬರೆದು, ಪ್ರಕರಣದ ತನಿಖೆ ತೀವ್ರಗೊಳಿಸಲು ಸೂಚಿಸಿದರು.
ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದು ಲುಕ್ಔಟ್ ನೋಟಿಸ್ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು. ಬ್ಲೂ ಕಾರ್ನರ್ ನೋಟೀಸ್ ಜಾರಿ ಮಾಡುವಂತೆ ಸಿಬಿಐಗೆ ಮನವಿ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಲಾಯಿತು. ತನಿಖೆಯ ಪ್ರಗತಿ, ಮುಂದಿನ ತನಿಖೆಯ ದಿಕ್ಕು, ಪ್ರಸಕ್ತ ಕಾನೂನಾತ್ಮಕ ಪ್ರಕ್ರಿಯೆಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಡಿಜಿಐಜಿ ಅಲೋಕ್ ಮೋಹನ್, ಎಸ್ಐಟಿ ಮುಖ್ಯಸ್ಥ ಬಿಕೆ ಸಿಂಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.
ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಸಹಿಸಲಾಗದು ಎಂದು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಸೂಕ್ತ ಕ್ರಮಗಳೊಂದಿಗೆ ಬಂಧನಕ್ಕೆ ಮುಂದಾಗುತ್ತೇವೆ. ಸಿಬಿಐ ಬ್ಲೂಕಾರ್ನರ್ ನೋಟಿಸ್ ಹೊರಡಿಸುವ ಸಾಧ್ಯತೆ ಇದ್ದು ತನಿಖೆಗೆ ವೇಗ ಸಿಗಲಿದೆ. ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಬಂಧಿಸಿ ಕರೆ ತರುವುದಾಗಿ ಅಧಿಕಾರಿಗಳು ತಿಳಿಸಿದರು.
ರಾಹುಲ್ ಗಾಂಧಿ ಪತ್ರ
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಪತ್ರ ಬರೆದಿದ್ದು, “ಸಂತ್ರಸ್ತರಿಗೆ ರಕ್ಷಣೆ ಕೊಡಬೇಕು, ಯಾರೇ ಆದರೂ ಕಠಿಣ ಕ್ರಮ ತೆಗೆದುಕೊಳ್ಳಿ” ಎಂದು ಒತ್ತಾಯಿಸಿದ್ದಾರೆ. “ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಅನೇಕರನ್ನು ಕ್ರೂರವಾಗಿ ಪ್ರಜ್ವಲ್ ನಡೆಸಿಕೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೇವರಾಜೇಗೌಡ ಮಾಹಿತಿ ತಿಳಿಸಿದ್ದರು ಎಂದು ತಿಳಿದು ನನಗೆ ಆಘಾತವಾಗಿದೆ. ಪ್ರಧಾನ ಮಂತ್ರಿಗಳ ಗಮನಕ್ಕೆ ತಂದರೂ ಅವರ ಪರವಾಗಿ ಪ್ರಚಾರ ಮಾಡಿದ್ದು ಮತ್ತೊಂದು ಶಾಕ್. ಭಾರತದಿಂದ ಆತ ಪಾರಾಗಲು ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ” ಎಂದು ಕೂಡ ಪತ್ರದಲ್ಲಿ ಬರೆದಿದ್ದಾರೆ.
“ಹರಿಯಾಣದ ಕುಸ್ತಿಪಟುಗಳು, ಮಣಿಪುರದ ಘಟನೆಗಳಲ್ಲಿ ಪ್ರಧಾನಿಗಳು ಮೌನ ವಹಿಸಿದ್ದಾರೆ. ತಾಯಂದಿರ, ಸಹೋದರಿಯರ ಪರವಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದು. ಕರ್ನಾಟಕ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಿ ಭಾರತಕ್ಕೆ ಕರೆ ತರುವ ಮನವಿ ಮಾಡಲಾಗಿದೆ. ಸಂತ್ರಸ್ತರಿಗೆ ರಕ್ಷಣೆ ನೀಡಬೇಕಾಗಿದೆ ಎಂದು ರಾಗಾ” ಬರೆದಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ.
— Siddaramaiah (@siddaramaiah) May 4, 2024
ನಿಷ್ಪಕ್ಷಪಾತ ತನಿಖೆ ನಡೆಸಿ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಷಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗಳಿಗೆ ಒಪ್ಪಿಸಲಾಗುವುದು.
ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ… pic.twitter.com/9N9x90LwBw
ಸಿಎಂ ಸಿದ್ದರಾಮಯ್ಯ X ಮುಖಾಂತರ ಭರವಸೆ
“ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಷಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗಳಿಗೆ ಒಪ್ಪಿಸಲಾಗುವುದು. ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂಬ ವಾಗ್ದಾನವನ್ನು @RahulGandhi ಅವರು ಸೇರಿದಂತೆ ನಾಡಿನ ಪ್ರತಿಯೊಬ್ಬರಿಗೂ ನೀಡುತ್ತಿದ್ದೇನೆ. ಸತ್ಯಮೇವ ಜಯತೇ..” ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಬರೆದಿದ್ದಾರೆ.
ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣ ಪತ್ತೆಗೆ ಬ್ಲೂ ಕಾರ್ನರ್ ನೋಟೀಸ್! ಏನಿದರ ಅಗತ್ಯ?