ಬೆಂಗಳೂರು: ಮುಡಾ ಹಗರಣ (MUDA Scam) ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು (Governor) ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ (BJP-JDS Padayatra) ಸಿಕ್ಕಿರುವ ಯಶಸ್ಸು. ಇದನ್ನು ಸಿಬಿಐ (CBI) ತನಿಖೆ ನಡೆಸಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಹೇಳಿದ್ದಾರೆ.
ರಾಜ್ಯಪಾಲರ ಆದೇಶದ ಬಳಿಕ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ ಎಂದರು.
86 ಸಾವಿರ ಜನ ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ಬಗ್ಗೆ ಸ್ಪಷ್ಟನೆ ನೀಡಲು ಸಾಧ್ಯವಾಗಿಲ್ಲ. ಸದನದಲ್ಲಿ ನಿಲುವಳಿ ಸೂಚನೆಗೆ ಅವಕಾಶ ಕೊಟ್ಟು ಜನರಲ್ಲಿರುವ ಗೊಂದಲ ನಿವಾರಣೆ ಮಾಡಬೇಕಿತ್ತು. ಅದನ್ನು ಬಿಟ್ಟು ಪಲಾಯನ ಮಾಡಿದ್ದರಿಂದ ಇದರಲ್ಲಿ ಏನೋ ಇದೆ ಎಂದು ರಾಜ್ಯದ ಜನತೆಗೆ ಅನುಮೂನ ಮೂಡಿತು ಎಂದರು.
ಮುಡಾ ಹಗರಣದ ಪ್ರತಿ ಹಂತದಲ್ಲೂ ಸಿದ್ದರಾಮಯ್ಯನವರ ಹಸ್ತಕ್ಷೇಪ ಕಂಡುಬಂದಿದೆ. ಡಿನೋಟಿಫಿಕೇಶನ್, ಭೂ ಪರಿವರ್ತನೆ ಈ ಎಲ್ಲ ಹಂತದಲ್ಲೂ ಅವರ ಹುದ್ದೆಯ ಪ್ರಭಾವ ಬಳಕೆಯಾಗಿದೆ. ಕಾಂಗ್ರೆಸ್ ಈಗ ದ್ವೇಷದ ರಾಜಕಾರಣ ಮಾಡಿದರೆ ಅರ್ಥವಿಲ್ಲ. ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು, ಸಿಬಿಐ ತನಿಖೆಯಾಗಬೇಕು ಹಾಗೂ ಎಲ್ಲ ನಿವೇಶನಗಳನ್ನು ವಾಪಸ್ ಪಡೆಯಬೇಕೆಂಬುದು ನಮ್ಮ ಬೇಡಿಕೆ. ನಿವೇಶನ ವಂಚಿತರಾದ ಜನರಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದರು.
ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಆಗಿನ ರಾಜ್ಯಪಾಲರು ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್ ಕೈವಾಡವಿತ್ತು ಎಂದರೆ ಅದನ್ನು ಒಪ್ಪುತ್ತಾರಾ? ಅವರಿಗೊಂದು ನ್ಯಾಯ, ಇವರಿಗೊಂದು ನ್ಯಾಯವೇ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ. ರಾಜ್ಯಪಾಲರು ಸರ್ಕಾರದ ಭಾಗ. ಅವರ ವಿರುದ್ಧ ಕಾಂಗ್ರೆಸ್ ಪ್ರತಿಭಟಿಸಿದರೆ ಅದು ಸಂವಿಧಾನಕ್ಕೆ ತೋರುವ ಅಗೌರವ ಎಂದರು.
ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿಲ್ಲ. ಕಾಂಗ್ರೆಸ್ ಪಕ್ಷದ ಶಾಸಕರೇ ತಿರುಗಿಬಿದ್ದರೆ ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ಸ್ಪಷ್ಟಪಡಿಸಿದರು.
ತಡೆಯಾಜ್ಞೆಗೆ ಕೇವಿಯಟ್
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಸಿಎಂ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯಪಾಲರು ತನಿಖೆಗೆ ಆದೇಶ ನೀಡಿದ್ದು, ಮೊದಲ ದೂರುದಾರ ಪ್ರದೀಪ್ ಕುಮಾರ್ ಅವರು ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಅವರು ಸಿಎಂ ತಡೆಯಾಜ್ಞೆ ತರಲು ಮುಂದಾದರೆ ಅದರ ವಿರುದ್ಧ ಕೇವಿಯಟ್ ಹಾಕಲು ಮುಂದಾಗಿದ್ದಾರೆ. ಮಧ್ಯಂತರ ಆದೇಶ ನೀಡದಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ಮೊದಲ ದೂರುದಾರ ಪ್ರದೀಪ್ ಹೇಳಿದ್ದಾರೆ.
ಸಿಎಂ ಜೊತೆಗೆ ನಾವಿದ್ದೇವೆ: ಡಿಕೆ ಶಿವಕುಮಾರ್
ಮುಡಾ ಹಗರಣ ವಿಚಾರದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದರೂ, ಸಿದ್ದರಾಮಯ್ಯ ಅವರು ಸಿಎಂ ಆಗಿ ಮುಂದುವರಿಯಲಿದ್ದಾರೆ. ಇಡೀ ಸಚಿವ ಸಂಪುಟ ಹಾಗೂ ಕಾಂಗ್ರೆಸ್ ಪಕ್ಷ ಸಿಎಂ ಅವರ ಹಿಂದೆ ನಿಂತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ವಿರುದ್ಧ ಗವರ್ನರ್ ಕಚೇರಿಯನ್ನು ಬಿಜೆಪಿ ಉಪಯೋಗಿಸಿಕೊಂಡು ಕೆಲಸ ಮಾಡುತ್ತಿದೆ. ಗವರ್ನರ್ ಕಚೇರಿಯನ್ನು ಬಿಜೆಪಿ ಕಚೇರಿಯನ್ನಾಗಿ ಮಾಡಲು ಮುಂದಾಗಿದ್ದಾರೆ. ಕುಮಾರಸ್ವಾಮಿ ಮಾತಿನಂತೆ ಷಡ್ಯಂತ್ರ ನಡೆಯುತ್ತಿದೆ. ಹತ್ತು ತಿಂಗಳ ಒಳಗೆ ಸರ್ಕಾರ ತೆಗೆಯುತ್ತೇವೆಂದು ಹೇಳಿದ್ದರು. ಈಗ ಹಾಗೆ ಮಾಡಲು ಯತ್ನಿಸುತ್ತಿದ್ದಾರೆ. ಆದರೆ ರಾಜ್ಯದ ಜನ ಸಿಎಂ ಸಿದ್ದರಾಮಯ್ಯ ಪರ ಇದ್ದಾರೆ. ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಹೋರಾಟ ಮಾಡುತ್ತೇವೆ ಎಂದು ಡಿಕೆಶಿ ಹೇಳಿದರು.
ಇದನ್ನೂ ಓದಿ: CM Siddaramaiah: ಮುಡಾ ತನಿಖೆಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್; ಸಿಎಂಗೆ ಸಂಕಷ್ಟ