ಹೊಸದಿಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಮರಳುವ ತರಾತುರಿಯ ನಡುವೆಯೂ ಕೆಲವು ಕ್ಷಣ ಬಿಡುವು ಮಾಡಿಕೊಂಡು ವಿಮಾನ ನಿಲ್ದಾಣದಲ್ಲಿ ಟಿ20 ವಿಶ್ವಕಪ್ ಫೈನಲ್ ಪಂದ್ಯಾಟವನ್ನು (T20 World Cup Final) ವೀಕ್ಷಿಸಿದರು.
ವೈರಲ್ ಆಗಿರುವ ವಿಡಿಯೋದಲ್ಲಿ, ಟ್ಯಾಬ್ ಒಂದರಲ್ಲಿ ಸಿದ್ದರಾಮಯ್ಯ ಅವರು ಟಿ20 ವಿಶ್ವಕಪ್‌ನ ಭಾರತ- ದಕ್ಷಿಣ ಆಫ್ರಿಕ ನಡುವಿನ ಫೈನಲ್ ಪಂದ್ಯಾಟವನ್ನು ವೀಕ್ಷಿಸುತ್ತಿರುವುದನ್ನು ಕಾಣಬಹುದಾಗಿದೆ. ವಿಶೇಷ ವಿಮಾನ ಲ್ಯಾಂಡ್ ಆಗಿದ್ದರೂ, ವಿಮಾನದ ಮೆಟ್ಟಿಲು ಏರುವ ಮುನ್ನ ಅವರು ನಿಂತುಕೊಂಡೇ ಪಂದ್ಯ ವೀಕ್ಷಿಸಿದರು.
ಬಾರ್ಬಡೋಸ್‌ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾರತ (India Team) ಹಾಗೂ ದಕ್ಷಿಣ ಆಫ್ರಿಕ (South Africa) ತಂಡಗಳು ಮುಖಾಮುಖಯಾಗಿವೆ. ಭಾರತ ಟೀಮ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ದಕ್ಷಿಣ ಆಫ್ರಿಕಕ್ಕೆ ಪಂದ್ಯ ಗೆಲ್ಲಲು 177 ರನ್‌ಗಳ ಟಾರ್ಗೆಟ್ ನೀಡಿದೆ. ಈ ನಡುವೆ ಭಾರತ 7 ವಿಕೆಟ್‌ಗಳು ಕಳೆದುಕೊಂಡಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ. ಇದರಲ್ಲಿ ಬೆಂಗಳೂರು ನಗರಕ್ಕೆ ಕುಡಿಯುವ ನೀರು (Drinking Water) ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು (Mekedatu project) ಅಣೆಕಟ್ಟು ಯೋಜನೆ ಪ್ರಮುಖವಾಗಿದ್ದು, 9000 ಕೋಟಿ ರೂ.ಗಳ ಡಿಪಿಆರ್‌ಗೆ ಕೇಂದ್ರ ಜಲ ಆಯೋಗದಿಂದ (Central water commission) ಅನುಮೋದನೆ ಬಾಕಿ ಇದೆ. ಈ ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಹಾಗೂ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ಮಹಾದಾಯಿ ಯೋಜನೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ.
ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿ.ಮೀ ಸುರಂಗ ಮಾರ್ಗಕ್ಕೆ 3000 ಕೋಟಿ ವೆಚ್ಚವಾಗಲಿದ್ದು, ಯೋಜನೆಯಿಂದ ಹಲವಾರು ಲಾಭಗಳಿವೆ. ಈ ಸುರಂಗ ಮಾರ್ಗ ರಾಷ್ಟ್ರೀಯ ಹೆದ್ದಾರಿ 7 ನ್ನು ರಾ.ಹೆ.4 ಕ್ಕೆ ಸಂಪರ್ಕಿಸುವುದರಿಂದ ಕರ್ನಾಟಕ ಸರ್ಕಾರ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ ಕೈಗೊಳ್ಳಬಹುದಾಗಿದ್ದು, ಕೇಂದ್ರ ಬಜೆಟ್ ಮೂಲಕ ರಾಜ್ಯ ಸರ್ಕಾರ ಹಾಗೂ ಎನ್.ಹೆಚ್.ಎ.ಐ ಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಡಾ ಜಿ ಪರಮೇಶ್ವರ, ಎಚ್ ಸಿ ಮಹದೇವಪ್ಪ ಅವರನ್ನು ಒಳಗೊಂಡ ಕರ್ನಾಟಕ ಸರಕಾರದ ನಿಯೋಗವು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ರಾತ್ರಿ ಭೇಟಿ ಮಾಡಿ ಕರ್ನಾಟಕದಲ್ಲಿ ಆಗಬೇಕಾದ ಅಭಿವೃದ್ಧಿ ಕೆಲಸಗಳ ಬಗ್ಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: Siddaramaiah: ಮೇಕೆದಾಟು ಕೂಡಲೇ ಕ್ಲಿಯರ್ ಮಾಡಿ: ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ