ಬೆಂಗಳೂರು: “ಸನಾತನ ಧರ್ಮವು (Sanatana Dharma) ಕೊರೊನಾ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕು” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರಿಗೆ ವಿಚಾರಣೆಗೆ ಖುದ್ದು ಹಾಜರಾಗುವಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಮನ್ಸ್ ನೀಡಿದೆ.
ಸೆ.4ರಂದು ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಬೆಂಗಳೂರಿನ ಪರಮೇಶ್ ಎಂಬುವವರು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಹೀಗಾಗಿ ತಮಿಳುನಾಡಿನ ಸಿಎಂ ಎಂ.ಕೆ. ಸ್ಟಾಲಿನ್ ಪುತ್ರ ಹಾಗೂ ಕ್ರೀಡಾ ಸಚಿವರಾಗಿರುವ ಉದಯನಿಧಿ ಸ್ಟಾಲಿನ್‌ಗೆ ಮಾರ್ಚ್ 4ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಧೀಶೆ ಜೆ.ಪ್ರೀತ್ ಅವರು ಸೂಚಿಸಿ ನೋಟಿಸ್ ನೀಡಿದ್ದಾರೆ.
ವಿವಾದಾತ್ಮಕ ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್ ವಿರುದ್ಧ ಈ ಹಿಂದೆ ದೇಶದ ವಿವಿಧೆಡೆ ದೂರುಗಳು ದಾಖಲಾಗಿದ್ದವು. ಇತ್ತೀಚೆಗೆ ತಮಿಳುನಾಡು ಸರ್ಕಾರ, ಉದಯನಿಧಿ ಸ್ಟಾಲಿನ್, ಮತ್ತೊಬ್ಬ ಸಚಿವ ಎ. ರಾಜಾ ಸೇರಿ 16 ಜನರಿಗೆ ಸುಪ್ರೀಂ ಕೋರ್ಟ್ ಕೂಡ ನೋಟಿಸ್ ಜಾರಿಗೊಳಿಸಿತ್ತು.
ಉದಯನಿಧಿ ಸ್ಟಾಲಿನ್ ಹೇಳಿದ್ದೇನು?
ತಮಿಳುನಾಡಿನ ಚೆನ್ನೈನಲ್ಲಿ ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ “ಸನಾತನ ನಿರ್ಮೂಲನಾ ಸಮಾವೇಶ”ದಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಉಲ್ಲೇಖ ಮಾಡಿದ್ದರು. “ ಸನಾತನ ಧರ್ಮ ಕೊರೊನಾ, ಡೆಂಗ್ಯೂ, ಮಲೇರಿಯಾ ಇದ್ದಂತೆ. ಇಂತಹ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನೀವು “ಸನಾತನ ವಿರೋಧಿ ಸಮ್ಮೇಳನ” ಎಂಬುದಾಗಿ ಆಯೋಜಿಸುವ ಬದಲು “ಸನಾತನ ನಿರ್ಮೂಲನಾ ಸಮ್ಮೇಳನ” ಎಂಬುದಾಗಿ ಕಾರ್ಯಕ್ರಮ ಆಯೋಜಿಸಿದ್ದು ನನಗೆ ಇಷ್ಟವಾಯಿತು” ಎಂದು ಹೇಳಿದ್ದರು.
ಇದನ್ನೂ ಓದಿ | ಡಿ.ಕೆ. ಸುರೇಶ್ ದೇಶ ವಿಭಜನೆ ಹೇಳಿಕೆ; ಸೋನಿಯಾ ಗಾಂಧಿ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ
ಉದಯನಿಧಿ ಸ್ಟಾಲಿನ್ ಅವರು ಈ ಹೇಳಿಕೆ ನೀಡಿದ ಬಳಿಕ ದೇಶಾದ್ಯಂತ ಸಂಚಲನ ಮೂಡಿಸಿತ್ತು. ಪರ-ವಿರೋಧ ಚರ್ಚೆಗಳು ಆರಂಭವಾಗಿದ್ದವು. ಬಿಜೆಪಿ ನಾಯಕರಂತೂ ಉದಯನಿಧಿ ಸ್ಟಾಲಿನ್ ಅವರ ಮೇಲೆ ಮುಗಿಬಿದ್ದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರೇ, “ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲೆಂದೇ ಪ್ರತಿಪಕ್ಷಗಳು ಒಗ್ಗೂಡಿ ಇಂಡಿಯಾ ಎಂಬ ಒಕ್ಕೂಟ ರಚಿಸಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಉದಯನಿಧಿ ಸ್ಟಾಲಿನ್, ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ಕಾನೂನು ಹೋರಾಟಕ್ಕೂ ಸಿದ್ಧನಾಗಿದ್ದೇನೆ ಎಂದು ಹೇಳಿದ್ದರು.