Site icon Vistara News

Ankola landslide: ಅಂಕೋಲಾ- ಶಿರೂರು ಗುಡ್ಡ ಕುಸಿತ; 7ನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆಗೆ ಸೇನಾ ಪಡೆ ಸಾಥ್

Ankola landslide

Ankola landslide

ಕಾರವಾರ: ಉತ್ತರ ಕನ್ನಡ ಜಿಲ್ಲೆಯ (Uttara Kannada Landslide) ಅಂಕೋಲಾ- ಶಿರೂರು ಗುಡ್ಡ ಕುಸಿತ (Ankola landslide) ಪ್ರಕರಣದಲ್ಲಿ ಹೆದ್ದಾರಿಯ ಮೇಲೆ ಬಿದ್ದಿರುವ ಮಣ್ಣು ತೆಗೆಯುವ ಕಾರ್ಯಾಚರಣೆ 7ನೇ ದಿನಕ್ಕೆ ಕಾಲಿಟ್ಟಿದೆ. ದುರಂತದಲ್ಲಿ ನಾಪತ್ತೆಯಾದ 10 ಜನರಲ್ಲಿ ಇದುವರೆಗೆ 7 ಮಂದಿಯ ಶವ ಪತ್ತೆಯಾಗಿದೆ. ಇನ್ನುಳಿದ ಮೂವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಇಂದು ಕಾರ್ಯಾಚರಣೆಗೆ ಸೇನಾ ಪಡೆ ಸಾಥ್ ನೀಡುತ್ತಿದೆ. ಹೀಗಾಗಿ ರಕ್ಷಣಾ ಕಾರ್ಯ ಇನ್ನಷ್ಟು ವೇಗದಿಂದ ಸಾಗಲಿದೆ (Rain News).

ಈಗಾಗಲೇ ಶಿರೂರು ಗುಡ್ಡಕುಸಿತ ಘಟನಾ ಸ್ಥಳ ತಲುಪಿರುವ ಸೇನಾ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದೆ. 44 ಮಂದಿಯಿರುವ ಸೇನಾ ತುಕಡಿಯನ್ನು ಕೇಂದ್ರ ನಿಯೋಜಿಸಿದೆ. ಈಗಾಗಲೇ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿರುವ ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್‌, ನೌಕಾಪಡೆ, ಅಗ್ನಿಶಾಮಕ ದಳ, ಪೊಲೀಸರು ತೊಡಗಿಸಿಕೊಂಡಿದ್ದಾರೆ. ಪ್ರತಿಕೂಲ ಹವಾಮಾನ ಶೋಧ ಕಾರ್ಯಕ್ಕೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಇಂದು ನದಿಯಲ್ಲಿ ನಿರ್ಮಾಣವಾಗಿರುವ ಮಣ್ಣಿನ ದ್ವೀಪಗಳಲ್ಲಿ ಶೋಧ ನಡೆಸಲು ಚಿಂತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಸಿದ್ದರಾಮಯ್ಯ ಭೇಟಿ

ಘಟನಾ ಸ್ಥಳಕ್ಕೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದರು. ಬಳಿಕ ಕಾರವಾರದ ಜಿ.ಪಂ. ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಲ್ಲಿ ರಸ್ತೆ ಮಾಡಲು ನಮ್ಮ ಜಾಗ ನೀಡಿದ್ದೀವಿ, ನೀರು ನೀಡಿದ್ದೀವಿ. ನೀವು ಹೇಳಿದ ಹಾಗೆ ಕೇಳುವುದಕ್ಕೆ ನಾವಿಲ್ಲ, ರಸ್ತೆ ಕಾಮಗಾರಿ ಆರಂಭಿಸುವ ಮುನ್ನ ಇಲ್ಲಿ ಸಂಭವಿಸಬಹುದಾದ ಗುಡ್ಡ ಕುಸಿತದಂತಹ ಅನಾಹುತಗಳ ಬಗ್ಗೆ ವೈಜ್ಞಾನಿಕ ವರದಿ ಪಡೆದಿದ್ದೀರಾ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಈ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಕುರಿತಂತೆ ಜಿಲ್ಲಾಧಿಕಾರಿಗಳಿಂದ ವರದಿ ಪಡೆದು, ರಾಜ್ಯ ಸರ್ಕಾರದಿಂದ ಕೇಂದ್ರ ಹೆದ್ದಾರಿ ಸಚಿವರಿಗೆ ತೀಕ್ಷ್ಣ ಪತ್ರ ಬರೆಯುವುದಾಗಿ ಹೇಳಿದರು.

ಪ್ರಸ್ತುತ ಜಿಯಾಜಿಕಲ್ ಸರ್ವೆ ಆಫ್ ಇಂಡಿಯಾ ಸಿದ್ಧಪಡಿಸಿರುವ ಜಿಲ್ಲೆಯ ಗುಡ್ಡ ಕುಸಿತ ಪ್ರದೇಶಗಳ ಕುರಿತ ವರದಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಪರಿಶೀಲಿಸಿ, ಹೆದ್ದಾರಿಯಾದ್ಯಂತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು.

ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ಸ್ಥಳದಲ್ಲಿ ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್‌ ತಂಡಗಳ ಸಿಬ್ಬಂದಿಯ ಕಾರ್ಯಕ್ಷಮತೆಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಸಿದ್ದರಾಮಯ್ಯ ಸಿಬ್ಬಂದಿಯ ಶ್ರಮವನ್ನು ಶ್ಲಾಘಿಸಿದರು.

ಇದನ್ನೂ ಓದಿ: Ankola landslide: ಉತ್ತರ ಕನ್ನಡದ ರಾ. ಹೆದ್ದಾರಿ; ಕಾಮಗಾರಿ ಮುಗಿಸದೆ ಟೋಲ್ ಸಂಗ್ರಹ ಏಕೆ? ಗುತ್ತಿಗೆದಾರ ಕಂಪನಿಗೆ ಸಿಎಂ ತರಾಟೆ

ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಲಭ್ಯವಿರುವ ಎಲ್ಲ ಆಧುನಿಕ ತಂತ್ರಜ್ಞಾನ ಬಳಸಲು, ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ಮಾಡಬೇಕು ಎಂದ ಸಿಎಂ, ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು ತಂತ್ರಜ್ಞಾನದ ನೆರವು ಪಡೆಯುವಂತೆ ಸೂಚಿಸಿದರು.

Exit mobile version