ಚಿಕ್ಕಮಗಳೂರು: ಚಿಕ್ಕಮಗಳೂರು (Chikkamagaluru) ಪ್ರವಾಸ ಕೈಗೊಳ್ಳಬೇಕು ಎಂದು ಯೋಜನೆ ಹಾಕಿಕೊಂಡವರಿಗೆ ಬ್ಯಾಡ್ ನ್ಯೂಸ್. ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಇನ್ನೂ ಒಂದು ವಾರ ಮುಳ್ಳಯ್ಯನಗಿರಿ (Mullayyana Giri) ಪ್ರವೇಶಕ್ಕೆ ಅವಕಾಶವಿಲ್ಲ. ಜುಲೈ 29ರವರೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ (Karnataka Rain News).
ಚಿಕ್ಕಮಗಳೂರಿನಲ್ಲಿ ಭಾರಿ ಮಳೆ ಮುಂದುವರಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ರಾಜ್ಯದ ಅತ್ಯಂತ ಎತ್ತರದ ಶಿಖರ ಮುಳ್ಳಯ್ಯನಗಿರಿ ಪ್ರವಾಸಿಗರ ಅಚ್ಚುಮೆಚ್ಚಿನ ತಾಣ. ಪ್ರತಿ ದಿನ ಇಲ್ಲಿಗೆ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿರುತ್ತಾರೆ. ಅದರಲ್ಲಿಯೂ ವೀಕೆಂಡ್, ರಜಾ ದಿನ ಬಂತೆಂದರೆ ಸಾಕು ಜನ ಪ್ರವಾಹವೇ ಕಂಡು ಬರುತ್ತದೆ. ರಾಜ್ಯ ಮಾತ್ರದವಲ್ಲ ದೇಶದ ವಿವಿಧ ಭಾಗಗಳಿಂದಲೂ ಪ್ರವಾಸಿಗರು ಆಗಮಿಸುತ್ತಾರೆ.
ಮಳೆ ಜತೆಗೆ ಹಲವು ಕಡೆ ಗುಡ್ಡ ಕುಸಿದಿರುವ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಗಾಗಿ ಪಿಡಬ್ಲ್ಯುಡಿ ಕಾಲಾವಕಾಶ ಕೇಳಿದ್ದು, ಹೀಗಾಗಿ ಈ ನಿರ್ಬಂಧ ವಿಧಿಸಲಾಗಿದೆ. ಒಟ್ಟಿನಲ್ಲಿ ಮಳೆ ಕಡಿಮೆ ಆಗುವವರೆಗೂ ಮುಳ್ಳಯ್ಯನಗಿರಿಗೆ ಪ್ರವೇಶವಿಲ್ಲ.
ಕಾಫಿ ನಾಡಿನಲ್ಲಿ ಮುಂದುವರಿದ ಮಳೆ ಆರ್ಭಟ
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದಿದ್ದು, ಏಳೇ ಏಳು ದಿನದಲ್ಲಿ ಜನರ ಬದುಕು ಮೂರಾಬಟ್ಟೆಯಾಗಿದೆ. ಭಾರೀ ಮಳೆಗೆ ಚಿಕ್ಕಮಗಳೂರಿನಲ್ಲಿ 193ಕ್ಕೂ ಹೆಚ್ಚು ಮನೆಗಳು ಧರೆಗುರುಳಿವೆ. 1,849 ವಿದ್ಯುತ್ ಕಂಬಗಳು, 44 ಸೇತುವೆಗಳಿಗೆ ಹಾನಿಯಾಗಿದೆ. 90 ಎಕರೆ ತೋಟ ನಾಶವಾಗಿದ್ದು, 10 ಕಿ.ಮೀ.ಗೂ ಹೆಚ್ಚು ರಸ್ತೆ ಹಾಳಾಗಿದೆ. 100 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿ, ಸಾರ್ವಜನಿಕ ಆಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಕಳೆದೊಂದು ವಾರದಲ್ಲಿ ಜಿಲ್ಲೆಯಲ್ಲಿ 320 ಮಿ.ಮೀ. ಮಳೆ ಸುರಿದಿದ್ದು, ಇದು ವಾಡಿಕೆಗಿಂತ ಶೇ. 166ರಷ್ಟು ಅಧಿಕ. ಜಿಲ್ಲೆಯ 9 ತಾಲೂಕುಗಳಲ್ಲೂ ವಾಡಿಕೆಗಿಂತ ಹೆಚ್ಚಿನ ಮಳೆ ದಾಖಲಾಗಿದೆ. ಇದೀಗ ಆಗಸ್ಟ್‌ನಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆತಂಕ ಸೃಷ್ಟಿಸಿದೆ.
ಇದನ್ನೂ ಓದಿ: Karnataka Rain News: ಜೋಗ ಜಲಪಾತದ ಬಳಿ ಯುವಕ ನಾಪತ್ತೆ; ಪ್ರವಾಹಕ್ಕೆ ಕೊಚ್ಚಿ ಹೋದ ಬಾಲಕ
ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಬೆಳಗಾವಿ, ಕಲಬುರಗಿ ಜಿಲ್ಲೆಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಸೇರಿದಂತೆ ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.